ಬೆಂಗಳೂರು : ಕೋವಿಡ್ ಪರಿಸ್ಥಿತಿಯಿಂದ ಬೆಂಗಳೂರು ನಗರ ಜಿಲ್ಲೆಯಲ್ಲಿ ದೈನಂದಿನ ಕಡತಗಳ ವಿಲೇವಾರಿಗೆ ತ್ವರಿತವಾಗಿ ಕಾಲಮಿತಿಯಲ್ಲಿ ಕ್ರಮ ಕೈಗೊಳ್ಳುತ್ತೇವೆ. ಇದಕ್ಕಾಗಿ ಶೀಘ್ರದಲ್ಲೇ ಕಡತಯಙ್ಞ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು ಎಂದು ಬೆಂಗಳೂರು ನಗರ ಜಿಲ್ಲೆ ಜಿಲ್ಲಾಧಿಕಾರಿ ಜೆ.ಮಂಜುನಾಥ್ ತಿಳಿಸಿದ್ದಾರೆ.
ಹಿಂದಿನ ಜಿಲ್ಲಾಧಿಕಾರಿ ಜಿ.ಎನ್.ಶಿವಮೂರ್ತಿ ಅವರ ವರ್ಗಾವಣೆಯಿಂದ ತೆರವಾದ ಸ್ಥಾನಕ್ಕೆ ನೂತನ ಜಿಲ್ಲಾಧಿಕಾರಿಯಾಗಿ ಸೋಮವಾರ ಅಧಿಕಾರ ವಹಿಸಿಕೊಂಡ ಬಳಿಕ ಮಾಧ್ಯಮದವರೊಂದಿಗೆ ಮಾತನಾಡುತ್ತಾ ಈ ವಿಷಯ ತಿಳಿಸಿದರು.
ಕೋವಿಡ್ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರದ ಆದೇಶದ ಮೇರೆಗೆ ಬೆಂಗಳೂರು ನಗರ ಜಿಲ್ಲೆಯ ವಿವಿಧ ಇಲಾಖೆಗಳ ಅಧಿಕಾರಿ ಮತ್ತು ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದರು. ಹೀಗಾಗಿ ಭೂಮಿಗೆ ಸಂಬಂಧಿಸಿದ ವ್ಯಾಜ್ಯ ಪ್ರಕರಣ, ಕಂದಾಯ ಕೆಲಸ ಕಾರ್ಯಗಳು , ಸರ್ಕಾರದ ವಿವಿಧ ಯೋಜನೆಗಳ ಅನುಷ್ಠಾನಕ್ಕೆ ಸ್ವಲ್ಪ ಮಟ್ಟಿನ ತೊಡಕಾಗಿತ್ತು.
ಸದ್ಯ ಕರೋನಾ ಸೋಂಕು ಕಡಿಮೆಯಾದ ಹಿನ್ನಲೆಯಲ್ಲಿ ವಿವಿಧ ಇಲಾಖೆಗಳಲ್ಲಿ ಬಾಕಿ ಉಳಿದ ಯೋಜನೆಗಳು ಹಾಗೂ ಕಡತಗಳನ್ನು ವಿಲೇವಾರಿ ಮಾಡಲು ಅಧಿಕಾರಿಗಳೊಂದಿಗೆ ಸಭೆ ನಡೆಸುತ್ತೇವೆ. ಆನಂತರ ಸೂಕ್ತ ಕಡತಯಙ್ಞ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ನೂತನ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ನಗರದಲ್ಲಿನ ಭೂಮಾಫಿಯಾದಿಂದಾಗಿ ಕೆರೆ, ರಾಜಕಾಲುವೆ ಭೂ ಒತ್ತುವರಿಯಾದ ಬಗ್ಗೆ ಮಾಧ್ಯಮದವರು ಗಮನ ಸೆಳೆದಾಗ, ಇವುಗಳ ಬಗ್ಗೆ ಮುತುವರ್ಜಿ ವಹಿಸಿ ಸರ್ಕಾರದ ಭೂಮಿ ಕೈತಪ್ಪದಂತೆ ಸೂಕ್ತ ವ್ಯವಸ್ಥೆ ಮಾಡುತ್ತೇವೆ.
ಆನೇಕಲ್ ತಾಲ್ಲೂಕು ಕಚೇರಿಯಲ್ಲಿನ ಅವ್ಯವಸ್ಥೆ ಬಗ್ಗೆ ಸಾಕಷ್ಟು ದೂರುಗಳಿರುವುದು ತಿಳಿದು ಬಂದಿದ್ದು, ಅಲ್ಲಿ ಸುಗಮ ಆಡಳಿತ ವ್ಯವಸ್ಥೆಗೆ ಕ್ರಮ ಕೈಗೊಳ್ಳುವುದಾಗಿ ಹೇಳಿದರು.
ಇದಕ್ಕೂ ಮುನ್ನ ನಿರ್ಗಮಿತ ಜಿಲ್ಲಾಧಿಕಾರಿ ಜಿ.ಎನ್.ಶಿವಮೂರ್ತಿ, ನೂತನ ಜಿಲ್ಲಾಧಿಕಾರಿಗಳಿಗೆ ಇಲಾಖೆ ಅಧಿಕಾರಿಗಳ ಜೊತೆ ಪರಿಚಯಾತ್ಮಕ ಸಭೆ ನಡೆಸಿ, ತಮಗೆ ನೀಡಿದಂತೆ ಹೊಸ ಜಿಲ್ಲಾಧಿಕಾರಿಗಳಿಗೂ ಸಹಕಾರ ನೀಡುವಂತೆ ಕೋರಿದರು.
ಇದೇ ಸಂದರ್ಭದಲ್ಲಿ ಸೇವಾಲಾಲ್ ಜಯಂತಿ ಪ್ರಯುಕ್ತ ಸಂತಶ್ರೇಷ್ಠರ ಭಾವಚಿತ್ರಕ್ಕೆ ನೂತನ ಜಿಲ್ಲಾಧಿಕಾರಿಗಳು ಪುಷ್ಪ ನಮನ ಸಲ್ಲಿಸಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಅನಿತಾಲಕ್ಷ್ಮಿ, ಉತ್ತರ ವಿಶೇಷ ಜಿಲ್ಲಾಧಿಕಾರಿ ಜಗದೀಶ್, ದಕ್ಷಿಣ ವಿಶೇಷ ಜಿಲ್ಲಾಧಿಕಾರಿ ಬಸವರಾಜ್ ಸೇರಿದಂತೆ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.