ಬೆಂಗಳೂರು ಜು.27 (www.bengaluruwire.com) : ರಾಜ್ಯದ ನೂತನ ಮುಖ್ಯಮಂತ್ರಿ ಹಾಗೂ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಬಸವರಾಜ ಬೊಮ್ಮಾಯಿ ಆಯ್ಕೆಯಾಗಿದ್ದಾರೆ.
ಜು.28 ರ ಬೆಳಗ್ಗೆ 11 ಗಂಟೆಗೆ ರಾಜಭವನದ ಗ್ಲಾಸ್ ಹೌಸ್ ಸಭಾಂಗಣದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ಸಮ್ಮುಖದಲ್ಲಿ ನಿಯೋಜಿತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ನಿರ್ಗಮಿತ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆಪ್ತ ಬಣದಲ್ಲಿ ಗುರುತಿಸಿಕೊಂಡಿದ್ದ ಬಸವರಾಜ ಬೊಮ್ಮಾಯಿ ಸಮರ್ಥ ರೀತಿಯಲ್ಲಿ ತಮಗೆ ವಹಿಸಿದ್ದ ಗೃಹಖಾತೆಯನ್ನು ಯಶಸ್ವಿಯಾಗಿ ನಿರ್ವಹಿಸಿದ್ದರು. ಜನತಾ ಪರಿವಾರ ಮೂಲದ ಬಸವರಾಜ ಬೊಮ್ಮಾಯಿ 1998 ರಿಂದ 2008ರ ತನಕ ವಿಧಾನ ಪರಿಷತ್ ಸದಸ್ಯರಾಗಿ ಹಾಗೂ ಶಿಗ್ಗಾವ್ ನಿಂದ 3 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು.
ತಂದೆ ಎಸ್.ಆರ್.ಬೊಮ್ಮಾಯಿ ರಾಜ್ಯದ ಮಾಜಿ ಮುಖ್ಯಮಂತ್ರಿ, ಕೇಂದ್ರ ಸಚಿವ ಹಾಗು ರಾಷ್ಟ್ರೀಯ ಜನತಾದಳದ ಅಧ್ಯಕ್ಷರಾಗಿದ್ದರು. 1960 ರಲ್ಲಿ ಹುಬ್ಬಳ್ಳಿಯಲ್ಲಿ ಜನಸಿದ್ದ ಬಸವರಾಜ್ ಬೊಮ್ಮಾಯಿ ಬಿ.ಇ ಪದವೀಧರರು. ಮೂಲತಃ ವಿದ್ಯಾರ್ಥಿ ದೆಸೆಯಿಂದಲೇ ಸಾಮಾಜಿಕ ಹಾಗೂ ರಾಜಕೀಯ ಚಟುವಟಿಕೆ ಮತ್ತು ಸಂಘಟನೆಯಲ್ಲಿ ತೊಡಗಿದ್ದವರು.
1993 ರಲ್ಲಿ ಹುಬ್ಬಳ್ಳಿಯಲ್ಲಿ ನಡೆದ ರಾಜ್ಯ ಯುವ ಜನತಾದಳದ ಬೃಹತ್ ಸಮಾವೇಶದಸಂಘಟನೆಯ ನೇತೃತ್ವವಹಿಸಿದ್ದರು. 1995ರಲ್ಲಿ ರಾಜ್ಯದ ಜನತಾದಳದ ಪ್ರಧಾನ ಕಾರ್ಯದರ್ಶಿಯಾಗಿ ನೇಮಕವಾಗಿದ್ದರು. ತದನಂತರ 1996 ರಿಂದ 1997 ರ ತನಕ ರಾಜ್ಯದ ಮುಖ್ಯಮಂತ್ರಿಯಾಗಿದ್ದ ಜೆ.ಎಚ್.ಪಟೇಲರಿಗೆ ರಾಜಕೀಯ ಕಾರ್ಯದರ್ಶಿಯಾಗಿ ನೇಮಕವಾದರು.
ಆನಂತರ ಬಿ.ಎಸ್.ಯಡಿಯೂರಪ್ಪ, ಸದಾನಂದಗೌಡ ಹಾಗೂ ಜಗದೀಶ್ ಶೆಟ್ಟರ್ ಮುಖ್ಯಮಂತ್ರಿ ಗಳಾಗಿದ್ದಾಗ ಸತತ 5 ವರ್ಷಗಳ ತನಕ ಜಲಸಂಪನ್ಮೂಲ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಹೀಗೆ ರಾಜಕೀಯದಲ್ಲಿ ಹಂತ ಹಂತವಾಗಿ ಮೇಲೇರುತ್ತಾ ಬಂದು ಇದೀಗ ಜು.28 ರಂದು ರಾಜ್ಯದ 23ನೇ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುತ್ತಿದ್ದಾರೆ.
ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವುದಕ್ಕೆ ಪತ್ನಿ ಬಿ.ಚೆನ್ನಮ್ಮ, ಪುತ್ರ ಭರತ್ ಹಾಗೂ ಪುತ್ರಿ ಅದಿತಿ ಅತೀವ ಸಂತಸ ವ್ಯಕ್ತಪಡಿಸಿದ್ದಾರೆ.
ಬಿಜೆಪಿ ಹಿರಿಯ ಮುತ್ಸದ್ಧಿಯಾಗಿದ್ದ ಬಿ.ಎಸ್.ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿಸಿ ಆ ಹುದ್ದೆಯನ್ನು ಸೂಕ್ತ ವ್ಯಕ್ತಿಗೆ ಕೊಡುವ ನಿಟ್ಟಿನಲ್ಲಿ ಸಾಕಷ್ಟು ಲೆಕ್ಕಾಚಾರ ಹಾಗೂ ನಿರೀಕ್ಷೆ ಇಟ್ಟುಕೊಂಡು ಬಿಜೆಪಿ ಹೈಕಮಾಂಡ್ ಬಸವರಾಜ ಬೊಮ್ಮಾಯಿಯವರನ್ನು ಆಯ್ಕೆ ಮಾಡಿದೆ.
ಉಪಮುಖ್ಯಮಂತ್ರಿಗಳಾಗಿ ಆರ್.ಅಶೋಕ್, ಗೋವಿಂದ ಕಾರಜೋಳ ಹಾಗೂ ಶ್ರೀರಾಮುಲು ಅವರನ್ನು ಆಯ್ಕೆ ಮಾಡಲಾಗಿದೆ.