ಬೆಂಗಳೂರು, ಆ.3 (wwwbengaluruwire.com) : ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ಬಿ.ಎಸ್.ಯಡಿಯೂರಪ್ಪ ಹಾಗೂ ಪುತ್ರ ಬಿ.ವೈ.ವಿಜಯೇಂದ್ರ ಅವರಿಗೆ ಸಂಕಷ್ಟ ಎದುರಾಗಿದೆ.
ಅಧಿಕಾರ ದುರ್ಬಳಕೆ ಮಾಡಿಕೊಂಡ ಪ್ರಕರಣ ಸಂಬಂಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಬಿ.ಎಸ್.ಯಡಿಯೂರಪ್ಪ ಮತ್ತು ಇತರರರಿಗೆ ಅಭಿಯೋಜನಾ ಮಂಜೂರಾತಿ ಇಲ್ಲವೆಂದು ಸಾಮಾಜಿಕ ಹೋರಾಟಗಾರ ಟಿ.ಜೆ.ಅಬ್ರಹಾಂ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿತ್ತು. ಈ ತೀರ್ಪಿನ ವಿರುದ್ಧ ಅಬ್ರಹಾಂ ಹೈಕೋರ್ಟಿನಲ್ಲಿ ಹೂಡಿದ್ದ ಕ್ರಿಮಿನಲ್ ಮೇಲ್ಮನವಿ ಪ್ರಕರಣವು ಇಂದು ವಿಚಾರಣೆಗೆ ಬಂದಿದ್ದು, ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸುನಿಲ್ ದತ್ ಯಾದವ್, ಬಿ.ಎಸ್.ವೈ ಮತ್ತಿತರರಿಗೆ ತುರ್ತು ನೋಟಿಸ್ ಜಾರಿ ಮಾಡಿದ್ದಾರೆ.
ಅಲ್ಲದೆ ಪ್ರಕರಣದ ಮುಂದಿನ ವಿಚಾರಣೆಯನ್ನು ಆಗಸ್ಟ್ ಎರಡನೇ ವಾರಕ್ಕೆ ಮುಂದೂಡಿದ್ದಾರೆ. ಸಾಮಾಜಿಕ ಹೋರಾಟಗಾರರಾದ ಟಿ.ಜೆ.ಅಬ್ರಹಾಂ ಅವರ ವಕೀಲರಾದ ವಿಕಾಸ್ ಉಪಾಧ್ಯಾಯ ಸುಮಾರು ಒಂದೂವರೆ ಗಂಟೆಗಳಷ್ಟು ಸಮಯ ವಾದ ಮಂಡಿಸಿದರು.
ಬಳಿಕ ನ್ಯಾಯಮೂರ್ತಿ ಗಳು ಆರೋಪಿಗಳಾದ ಬಿ.ಎಸ್.ಯಡಿಯೂರಪ್ಪ, ಬಿ.ವೈ.ವಿಜಯೇಂದ್ರ, ಶಶಿಧರ್ ಮರಡಿ, ಸಂಜಯ್ ಶ್ರೀ, ಚಂದ್ರಕಾಂತ ರಾಮಲಿಂಗಂ, ಶಾಸಕರಾದ ಎಸ್.ಟಿ.ಸೋಮಶೇಖರ್, ಐಎಎಸ್ ಅಧಿಕಾರಿ ಡಾ.ಜಿ.ಸಿ.ಪ್ರಕಾಶ್, ಕೆ.ರವಿ ಮತ್ತು ವಿರೂಪಾಕ್ಷಪ್ಪ ಯಮಕನಮರಡಿ ರವರಿಗೆ ತುರ್ತಾಗಿ ನೊಟೀಸ್ ತಲುಪಲು ಹ್ಯಾಂಡ್ ಸಮನ್ಸ್ ಅನ್ನು ಜಾರಿ ಮಾಡಿದರು.
ಪ್ರಕರಣದ ಹಿಂದಿನ ವಿವರ:
ಬಿ.ಎಸ್.ಯಡಿಯೂರಪ್ಪ, ಬಿ.ವೈ.ವಿಜಯೇಂದ್ರ, ಶಶಿಧರ್ ಮರಡಿ, ಸಂಜಯ್ ಶ್ರೀ, ಚಂದ್ರಕಾಂತ ರಾಮಲಿಂಗಂ, ಶಾಸಕ ಎಸ್.ಟಿ.ಸೋಮಶೇಖರ್, ಐಎಎಸ್ ಅಧಿಕಾರಿ ಡಾ.ಜಿ.ಸಿ.ಪ್ರಕಾಶ್, ಕೆ.ರವಿ ಮತ್ತು ವಿರೂಪಾಕ್ಷಪ್ಪ ಯಮಕನಮರಡಿ ರವರು ಅಧಿಕಾರ ದುರ್ಬಳಕೆ ಮಾಡಿಕೊಂಡು ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ ಎಂದು ಸಾಮಾಜಿಕ ಹೋರಾಟಗಾರರಾದ ಟಿ.ಜೆ.ಅಬ್ರಹಾಂ ಅವರು ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ)ಕ್ಕೆ ದೂರು ನೀಡಿದ್ದರು.
ಅಲ್ಲದೆ ಯಡಿಯೂರಪ್ಪ ಕುಟುಂಬದವರು ನಕಲಿ ಕಂಪನಿಗಳಲ್ಲಿ ಹೂಡಿಕೆ ಮಾಡಿದ್ದು, ಸರ್ಕಾರದ ವಿವಿಧ ಯೋಜನೆಗಳಲ್ಲಿ ಕೋಟ್ಯಂತರ ರೂ. ಕಿಕ್‌ಬ್ಯಾಕ್ ಪಡೆದಿರುವ ಬಗ್ಗೆ ತನಿಖೆ ನಡೆಸಬೇಕೆಂದು ಎಸಿಬಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದರು. ತನಿಖೆ ನಡೆಸಿದ್ದ ಎಸಿಬಿ, ದೂರನ್ನು ಕೈಬಿಟ್ಟಿತ್ತು. ಇದನ್ನು ಪ್ರಶ್ನಿಸಿದ್ದ ಟಿ.ಜೆ.ಅಬ್ರಹಾಂ ರವರು, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಖಾಸಗೀ ದೂರು ಸಲ್ಲಿಸಿದ್ದರು.
ಮುಖ್ಯಮಂತ್ರಿಯವರು ಸಾಂವಿಧಾನಿಕ ಹುದ್ದೆಯಲ್ಲಿರುವುದರಿಂದ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರ ಪೂರ್ವಾನುಮತಿ ಪಡೆದಿಲ್ಲ ಎಂದು ವಿಶೇಷ ನ್ಯಾಯಾಲಯವು ಟಿ.ಜೆ.ಅಬ್ರಹಾಂ ರವರ ಖಾಸಗೀ ದೂರನ್ನು ವಜಾಗೊಳಿಸಿತ್ತು. ಇದನ್ನು ಪ್ರಶ್ನಿಸಿ ಅಬ್ರಹಾಂ ಹೈಕೋರ್ಟ್ ನಲ್ಲಿ ಕ್ರಿಮಿನಲ್ ಮೇಲ್ಮನವಿಯನ್ನು ಸಲ್ಲಿಸಿದ್ದರು.