ಬೆಂಗಳೂರು, (www.bengaluruwire.com):
ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸಚಿವಾಲಯದ ಪ್ರಧಾನ ಕಾರ್ಯದರ್ಶಿಯಗಿ ಎನ್.ಮಂಜುನಾಥ್ ಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ.
ಬಸವರಾಜ್ ಬೊಮ್ಮಾಯಿ ಮುಖ್ಯಮಂತ್ರಿಯಾದ ಕೂಡಲೇ ಮಾಡಿದ ಮೊದಲ ಕೆಲಸ ಈ ಹಿಂದೆ ಸಚಿವಾಲಯದಲ್ಲಿದ್ದ ಸಿಬ್ಬಂದಿಯನ್ನು ಬೇರೆಡೆ ವರ್ಗಾಯಿಸಿದ್ದರು. ಈ ಹಿಂದೆ ಜೆಡಿಎಸ್- ಕಾಂಗ್ರೆಸ್ ಸರ್ಕಾರದಲ್ಲಿ ಮುಖ್ಯಮಂತ್ರಿಗಳ ಸಚಿವಾಲಯದಲ್ಲಿ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ಇ.ವಿ.ರಮಣರೆಡ್ಡಿ ಅವರನ್ನು ನೇಮಕ ಮಾಡಲಾಗಿತ್ತು. ಬಿ.ಎಸ್.ಯಡಿಯೂರಪ್ಪ ಸಿಎಂ ಆಗಿದ್ದಾಗಲೂ ಅವರೇ ಮುಂದುವರೆದಿದ್ದರು.
ಇದೀಗ ಅವರನ್ನು ಸಿಎಂ ಸಚಿವಾಲಯದಿಂದ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ. ಸಚಿವ ಆರ್.ಅಶೋಕ್ ಅವರಿಗೆ ಆಪ್ತರಾಗಿದ್ದ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಯಾಗಿದ್ದ ಮಂಜುನಾಥ್ ಪ್ರಸಾದ್ ಅವರನ್ನು ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ.
ಕೋವಿಡ್ ಎರಡನೇ ಅಲೆಯಲ್ಲಿ ವಿಪತ್ತು ನಿರ್ವಹಣೆ ಇಲಾಖೆಯ ಹೆಚ್ಚುವರಿ ಹೊಣೆ ವಹಿಸಿಕೊಂಡು ಕೋವಿಡ್ ನಿಯಂತ್ರಣ ವಿಚಾರದಲ್ಲಿ ಕೈಗೊಂಡ ಹಲವು ನಿರ್ಧಾರಗಳು ಹಿಂದಿನ ಸರ್ಕಾರದಲ್ಲಿ ಎಲ್ಲರ ಗಮನ ಸೆಳೆದಿದ್ದವು. ಬಿಬಿಎಂಪಿಯಲ್ಲಿ 3 ವರ್ಷಗಳಿಗೂ ಹೆಚ್ಚು ಕಾಲ ಆಯುಕ್ತರಾಗಿ ಯಶಸ್ವಿಯಾಗಿ ಆಡಳಿತ ನಡೆಸಿ ನಗರದ ಹಲವು ಸಮಸ್ಯೆ, ಸವಾಲುಗಳನ್ನು ಚಾಕಚಕ್ಯತೆಯಿಂದ ನಿರ್ವಹಿಸಿದ್ದರು. ಅಲ್ಲದೆ ಅವರು ಕಾರ್ಯನಿರ್ವಹಿಸಿದ ಸ್ಥಳಗಳಲ್ಲಿ ಎಲ್ಲ ಸಿಬ್ಬಂದಿ, ಅಧಿಕಾರಿಗಳನ್ನು ಗಣನೆಗೆ ತೆಗೆದುಕೊಂಡು ಕೆಲಸ ಮಾಡುತ್ತಾರೆ.
ಬಹುಶಃ ಇದೆಲ್ಲವೂ ಸಿಎಂ ಬಸವರಾಜ ಬೊಮ್ಮಾಯಿ ತಮ್ಮ ಸಚಿವಾಲಯ ಪ್ರಧಾನ ಕಾರ್ಯದರ್ಶಿಯಾಗಿ ಎನ್.ಮಂಜುನಾಥ್ ಪ್ರಸಾದ್ ಅವರನ್ನು ಆಯ್ಕೆ ಮಾಡಲು ಪ್ರಮುಖ ಕಾರಣ ಎನ್ನಲಾಗಿದೆ. ಈ ಜವಾಬ್ದಾರಿ ಜೊತೆಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹೆಚ್ಚುವರಿ ಹೊಣೆಯನ್ನು ನೀಡಲಾಗಿದೆ.
ಹಿರಿಯ ಐಎಎಸ್ ಅಧಿಕಾರಿ ರಾಕೇಶ್ ಸಿಂಗ್ ಹೆಸರೂ ಕೂಡ ಸಿಎಂ ಪ್ರಧಾನ ಕಾರ್ಯದರ್ಶಿ ಹುದ್ದೆಯ ರೇಸ್ ನಲ್ಲಿ ಪ್ರಬಲವಾಗಿ ಕೇಳಿಬಂದಿತ್ತು. ಆದರೆ ಅಂತಿಮವಾಗಿ ಮಂಜುನಾಥ್ ಪ್ರಸಾದ್ ರನ್ನು ರಾಜ್ಯ ಸರ್ಕಾರ ಈ ಪ್ರಭಾವಿ ಹುದ್ದೆಗೆ ನೇಮಕ ಮಾಡಿದೆ.
ರಾಕೇಶ್ ಸಿಂಗ್ ಪ್ರಸ್ತುತ ಬಿಬಿಎಂಪಿ ಆಡಳಿತಾಧಿಕಾರಿ, ನಗರಾಭಿವೃದ್ಧಿ ಹಾಗೂ ಜಲಸಂಪನ್ಮೂಲ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಈ ಹಿಂದೆ ನಮ್ಮ ಮೆಟ್ರೋ ನಿಗಮದ ವ್ಯವಸ್ಥಾಪಕ ನಿರ್ದೇಶಕ ಹುದ್ದೆಯನ್ನು ನಿಭಾಯಿಸಿದ್ದು ಇತ್ತೀಚೆಗಷ್ಟೆ ಆ ಸ್ಥಾನಕ್ಕೆ ಐಎಎಸ್ ಅಧಿಕಾರಿ ಅಂಜುಮ್ ಪರ್ವೇಜ್ ಅವರನ್ನು ನಿಯೋಜಿಸಲಾಗಿತ್ತು.
ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿರವರ ನೂತನ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಡಿರುವ ಏನ್. ಮಂಜುನಾಥ್ ಪ್ರಸಾದ್ ಅವರನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಅಮೃತ್ ರಾಜ್ ನೇತೃತ್ವದಲ್ಲಿ ಶುಕ್ರವಾರ ಭೇಟಿ ಮಾಡಿ, ಶಾಲು ಹಾಕಿ- ಹೂಗುಚ್ಛ ನೀಡಿ ಸನ್ಮಾನಿಸಲಾಯಿತು.