ಬೆಂಗಳೂರು, ಮೇ.16 (www.bengaluruwire.com) : ಬಿಡಿಎ ಬಡಾವಣೆಗಳಲ್ಲಿರುವ ನಿರ್ಮಾಣವಾಗಿರುವ 95 ಸಾವಿರ ಮನೆಗಳನ್ನು 38ಡಿ ಅಡಿಯಲ್ಲಿ ಸಕ್ರಮ ಮಾಡಲಾಗುತ್ತದೆ ಎಂದು ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ತಿಳಿಸಿದ್ದಾರೆ.
ಸೋಮವಾರ ಬಿಡಿಎ ಕೇಂದ್ರ ಕಚೇರಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಬಿಡಿಎ ಸ್ವಾಧೀನಪಡಿಸಿಕೊಂಡಿರುವ ಪ್ರದೇಶಗಳಲ್ಲಿ ಸುಮಾರು 95 ಸಾವಿರ ಮನೆಗಳನ್ನು ಈಗಾಗಲೇ ನಿರ್ಮಾಣ ಮಾಡಲಾಗಿದೆ. ಆದರೆ, ಈ ಮನೆಗಳನ್ನು ಬಿಡಿಎದಿಂದ ನೋಂದಣಿ ಮಾಡಿಸಿಕೊಂಡಿಲ್ಲ. ಈ ಹಿನ್ನೆಲೆಯಲ್ಲಿ ಬಿಡಿಎ ಬಡಾವಣೆಗಳಲ್ಲಿರುವ 95 ಸಾವಿರ ಮನೆಗಳನ್ನು 38ಡಿ ಅಡಿಯಲ್ಲಿ ಸಕ್ರಮಗೊಳಿಸಲು ನಿರ್ಧರಿಸಲಾಗಿದೆ ಎಂದರು.
ಹಿಂದಿನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಆಸಕ್ತಿ ತೋರಿ ಈ ಮನೆಗಳನ್ನು ಸಕ್ರಮಗೊಳಿಸಲು ನಿರ್ಧರಿಸಿದ್ದರು. ಅದರಂತೆ ಬಿಡಿಎ ಪ್ರಾಧಿಕಾರದ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ಮಾಡಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಈ ವಿಚಾರವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಗಮನಕ್ಕೂ ತರಲಾಗಿದ್ದು, ಅವರು ಕೂಡ ಈ ಬಗ್ಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಸದ್ಯದಲ್ಲೇ ಈ ಪ್ರಸ್ತಾವನೆಗೆ ಅನುಮೋದನೆ ಮಾಡಿ ಕಳುಹಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಈ ಹಿಂದೆ 20*30 ಅಳತೆಯ ನಿವೇಶನಕ್ಕೆ ಶೇ.10 ರಷ್ಟು, 30*40 ಗೆ ಶೇ.20 ಮತ್ತು 50*80 ಕ್ಕೆ ಶೇ.50 ರಷ್ಟು ಮಾರ್ಗಸೂಚಿ ದರವನ್ನು ಪಾವತಿಸಿ ಸಕ್ರಮ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿತ್ತು. ಆದರೆ, ದುಬಾರಿ ಶುಲ್ಕವಾಗುವುದರಿಂದ ತಮಗೆ ಪಾವತಿಸಿ ಸಕ್ರಮ ಮಾಡಿಸಿಕೊಳ್ಳಲು ಸಾಧ್ಯವಾಗುವುದಿಲ್ಲ. ಈ ಶುಲ್ಕವನ್ನು ಕಡಿಮೆ ಮಾಡಬೇಕೆಂದು ಸಾರ್ವಜನಿಕರು ಮನವಿ ಮಾಡಿದ್ದರಿಂದ ಶುಲ್ಕ ಪರಿಷ್ಕರಣೆ ಮಾಡಿ ಈ ಹಿಂದೆ ನಿಗದಿಪಡಿಸಲಾಗಿದ್ದ ದರಕ್ಕಿಂತ ಶೇ.50 ರಷ್ಟು ಕಡಿಮೆ ಮಾಡಿ ಸರ್ಕಾರದ ಅನುಮೋದನೆಗೆ ಕಳುಹಿಸಲಾಗಿದೆ ಎಂದು ತಿಳಿಸಿದರು.
ಈ ಅಕ್ರಮ ಸಕ್ರಮದಿಂದ ಬಿಡಿಎಗೆ ಸುಮಾರು 9 ರಿಂದ 10 ಸಾವಿರ ಕೋಟಿ ಆದಾಯ ಬರುವ ನಿರೀಕ್ಷೆ ಇದ್ದು, ಈ ಯೋಜನೆಯ ಸದ್ಬಳಕೆ ಮಾಡಿಕೊಳ್ಳಬೇಕೆಂದು ವಿಶ್ವನಾಥ್ ಸಾರ್ವಜನಿಕರಿಗೆ ಮನವಿ ಮಾಡಿದರು.