ಬೆಂಗಳೂರು, ಮೇ.30 www.bengaluruwire.com : ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಈ ಬಾರಿ ಮೈಸೂರಿನಲ್ಲಿ ಆಯೋಜಿಸಲು ನಿರ್ಧರಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಭಾಗವಹಿಸಲಿದ್ದಾರೆ.
ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ನಡೆಯಲಿರುವ ಯೋಗ ದಿನಾಚರಣೆ ಜೂನ್ 21 ರಂದು ಅರಮನೆ ಮೈದಾನದಲ್ಲಿ ನಡೆಯಲಿದೆ.
ಬೆಂಗಳೂರಿನ ಗೃಹ ಕಚೇರಿ ಕೃಷ್ಣಾದಿಂದ ಸಿಎಂ ಬಸವರಾಜ ಬೊಮ್ಮಾಯಿ ವಿಡಿಯೋ ಕಾನ್ಫರೆನ್ಸ್ ನಲ್ಲಿ ಕಾರ್ಯಕ್ರಮದ ಪೂರ್ವ ಸಿದ್ಧತೆಗಳ ಬಗ್ಗೆ ಪ್ರಧಾನಿಗಳ ಜತೆ ಸೋಮವಾರ ಮಾತುಕತೆ ನಡೆಸಿದರು.
ಈ ಸಂದರ್ಭದಲ್ಲಿ ಮೈಸೂರಿನಲ್ಲಿ ಯೋಗ ದಿನಾಚರಣೆ ಗೆ ಮಾಡಲಾಗಿರುವ ವ್ಯವಸ್ಥೆಯನ್ನು ಪ್ರಧಾನಿಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ ವಿವರಿಸಿದರು.
ಕೇಂದ್ರ ಆಯುಷ್ ಸಚಿವ ಸರಬಾನಂದ ಸೊನೊವಾಲ್, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್ ಉಪಸ್ಥಿತರಿದ್ದರು.