ಬೆಂಗಳೂರು, ಜು.10 www.bengaluruwire.com : ರಾಷ್ಟ್ರಪತಿ ಸ್ಥಾನಕ್ಕೆ ಎನ್ ಡಿಎ ಮತ್ತು ಇತರೆ ಪಕ್ಷಗಳ ಅಭ್ಯರ್ಥಿಯಾಗಿರುವ ದ್ರೌಪದಿ ಮುರ್ಮು ಅವರು ಇಂದು ಬೆಂಗಳೂರಿಗೆ ಆಗಮಿಸಿ ಬಿಜೆಪಿ ಶಾಸಕರು ಮತ್ತು ಸಂಸದರ ಸಭೆಯಲ್ಲಿ ಪಾಲ್ಗೊಂಡರು. ಅಲ್ಲದೆ ಮಾಜಿ ಪ್ರಧಾನಿ ಎಚ್.ಡಿ.ದೇವಗೌಡ ಅವರ ನಿವಾಸಕ್ಕೆ ತೆರಳಿ ಜು.18ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣೆಯಲ್ಲಿ ತಮಗೆ ಮತನೀಡುವಂತೆ ಮತ ಯಾಚನೆ ನಡೆಸಿದರು.
ರಾಜಧಾನಿ ಬೆಂಗಳೂರಿಗೆ ಭಾನುವಾರ ಸಂಜೆ ಬಂದ ದ್ರೌಪತಿ ಮುರ್ಮು ಅವರನ್ನು ಮೊದಲಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆತ್ಮೀಯವಾಗಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಮತ್ತು ನಗರಭಿವೃದ್ಧಿ ಸಚಿ ಬಸವರಾಜ್ ಬೈರತಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಬಳಿಕ ಅವರು ಶಾಂಗ್ರಿಲಾ ಹೋಟೆಲ್ ನಲ್ಲಿ ಏರ್ಪಡಿಸಿದ್ದ, ಭಾರತೀಯ ಜನತಾಪಕ್ಷದ ಶಾಸಕರ ಹಾಗೂ ಸಂಸದರ ಸಭೆಯಲ್ಲಿ ಪಾಲ್ಗೊಂಡಿದ್ದರು. ಈ ಸಭೆಯಲ್ಲಿ ನಿಕಟ ಪೂರ್ವ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ , ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ಕಿಶನ್ ರೆಡ್ಡಿ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ , ಮಾಜಿ ಮುಖ್ಯಮಂತ್ರಿಗಳಾದ ಜಗದೀಶ್ ಶೆಟ್ಟರ್, ಡಿವಿ ಸದಾನಂದ ಗೌಡ ಮತ್ತು ಇತರರು ಭಾಗವಹಿಸಿದ್ದರು.
ಸಭೆಯ ಬಳಿಕ ದ್ರೌಪದಿ ಮುರ್ಮು ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಜತೆ, ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಅವರ ನಿವಾಸಕ್ಕೆ ತೆರಳಿ, ಅವರನ್ನು ಭೇಟಿ ಮಾಡಿ ಮುಂಬರುವ ರಾಷ್ಟ್ರಪತಿ ಚುನಾವಣೆಯಲ್ಲಿ ತಮಗೆ ಮತ ನೀಡುವಂತೆ ಮತ ಯಾಚಿಸಿದರು. ಈ ಸಂದರ್ಭದಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಷಿ, ಕಿಶನ್ ರೆಡ್ಡಿ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ, ಮಾಜಿ ಸಿಎಂ ಎಚ್ ಡಿ ಕುಮಾರ ಸ್ವಾಮಿ, ಮಾಜಿ ಸಚಿವ ಎಚ್ ಡಿ ರೇವಣ್ಣ ಮತ್ತು ಇತರರು ಭಾಗವಹಿಸಿದ್ದರು.