ಬೆಂಗಳೂರು, ಆ.3 www.bengaluruwire.com : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP)ಯ 243 ವಾರ್ಡ್ ಗಳಿಗೆ ನಗರಾಭಿವೃದ್ಧಿ ಇಲಾಖೆಯು ಬುಧವಾರ ಮೀಸಲಾತಿ ಪಟ್ಟಿಯ ಅಧಿಸೂಚನೆಯನ್ನು ಹೊರಡಿಸಿದೆ.
ಸುಪ್ರೀಂಕೋರ್ಟ್ ಜ.28ರಂದು ಒಂದು ವಾರದಲ್ಲಿ ವಾರ್ಡ್ ವಾರು ಮೀಸಲಾತಿ ಪಟ್ಟಿ ಪ್ರಕಟಿಸುವಂತೆ ನೀಡಿದ ಸೂಚನೆ ಮೇರೆಗೆ ರಾಜ್ಯ ಸರ್ಕಾರ ಆ.3ರಂದು ಕರಡು ಮೀಸಲಾತಿ ಪಟ್ಟಿ ಪ್ರಕಟಿಸಿದೆ. ಮೀಸಲಾತಿ ಪಟ್ಟಿ ಪ್ರಕಟವಾದ ಬಳಿಕ ಅದರಿಂದ ಬಾಧಿತರಾದವರು ಕರಡು ಪಟ್ಟಿ ವಿಶೇಷ ರಾಜ್ಯಪತ್ರದಲ್ಲಿ ಪ್ರಕಟವಾದ ಏಳು ದಿನದ ಒಳಗಾಗಿ, ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳಿಗೆ ಲಿಖಿತವಾಗಿ ಕಚೇರಿ ಅವಧಿಯಲ್ಲಿ ತಮ್ಮ ಆಕ್ಷೇಪಣೆಯನ್ನು ಸಲ್ಲಿಸಬಹುದೆಂದು ಅಧಿಸೂಚನೆಯಲ್ಲಿ ತಿಳಿಸಿದೆ. 2011ರ ಜನಗಣತಿ ಆಧಾರದಲ್ಲಿ ಈ ಮೀಸಲಾತಿ ಪ್ರಕಟಿಸಲಾಗಿದೆ.
ಸುಪ್ರೀಂಕೋರ್ಟ್ ಜು.28ರ ತನ್ನ ಮಹತ್ವದ ಆದೇಶದಲ್ಲಿ, ಪಾಲಿಕೆ ವಾರ್ಡ್ ಗಳಿಗೆ ಮೀಸಲಾತಿ ಪಟ್ಟಿ ಪ್ರಕಟವಾದ ಬಳಿಕ ಚುನಾವಣಾ ಆಯೋಗವು ಪಾಲಿಕೆ ಚುನಾವಣೆ ನಡೆಸಲು ಅಗತ್ಯವಿರುವ ಎಲ್ಲ ಪ್ರಕ್ರಿಯೆಗಳನ್ನು ಆರಂಭಿಸಬೇಕು ಎಂದು ಸೂಚನೆ ನೀಡಿತ್ತು.