ಮೈಸೂರು, ಸೆ.18, www.bengaluruwire.com :
ದಸರಾ ಉದ್ಘಾಟನೆಗೆ ರಾಷ್ಟ್ರಪತಿಗಳು ಆಗಮಿಸುವ ಹಿನ್ನೆಲೆಯಲ್ಲಿ ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.
ಕಾರ್ಯಕ್ರಮದ ವೇದಿಕೆ ಸಿದ್ಧತೆ, ಗಣ್ಯರು, ಸಾರ್ವಜನಿಕರಿಗೆ ಆಸನದ ವ್ಯವಸ್ಥೆ, ಕಾರ್ಯಕ್ರಮ ವೀಕ್ಷಣೆ, ಭದ್ರತೆ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.
ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವರು, ರಾಷ್ಟ್ರಪತಿಗಳ ಕಚೇರಿ ಸೂಚನೆಯಂತೆ ಸಿದ್ಧತೆ ಮಾಡಲಾಗುತ್ತಿದೆ. ಸೂಕ್ತ ರೀತಿಯಲ್ಲಿ ಭದ್ರತೆ ವ್ಯವಸ್ಥೆ ಮಾಡಲಾಗಿದೆ ಎಂದರು.
ಸ್ಥಳದ ಲಭ್ಯತೆಗನುಗುಣವಾಗಿ ಸಾರ್ವಜನಿಕರಿಗೆ ಆಸನದ ವ್ಯವಸ್ಥೆ ಮಾಡಲಾಗುತ್ತಿದೆ. 1500-2000 ಜನರು ಸೇರುವಷ್ಟು ಸ್ಥಳವಕಾಶವಿದೆ. ದೇವಸ್ಥಾನಕ್ಕೆ ಆಗಮಿಸುವ ಭಕ್ತರೆಲ್ಲರಿಗೂ ಕಾರ್ಯಕ್ರಮ ವೀಕ್ಷಿಸಲು ಅವಕಾಶವಿದೆ ಎಂದು ಹೇಳಿದರು.
ಬಳಿಕ ದೇವಸ್ಥಾನದ ಪಾರ್ಕಿಂಗ್ ಆವರಣದಲ್ಲಿ ನೂತನವಾಗಿ ನಿರ್ಮಿಸಿರುವ ಅಂಗಡಿ ಮಳಿಗೆಗಳು, ಫುಡ್ ಕೋರ್ಟ್ ಗೆ ಭೇಟಿ ಕೊಟ್ಟರು.
ಈ ಸಂದರ್ಭದಲ್ಲಿ ಸಂಸದರಾದ ಪ್ರತಾಪ್ ಸಿಂಹ, ಶಾಸಕರಾದ ಜಿ.ಟಿ.ದೇವೇಗೌಡ, ಮೇಯರ್ ಶಿವಕುಮಾರ್, ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್, ಪೊಲೀಸ್ ಕಮಿಷನರ್ ಚಂದ್ರಗುಪ್ತ, ಅಪರ ಜಿಲ್ಲಾಧಿಕಾರಿ ಮಂಜುನಾಥಸ್ವಾಮಿ ಸೇರಿದಂತೆ ಹಲವಾರು ಅಧಿಕಾರಿಗಳು, ನಿಗಮ ಮಂಡಳಿಗಳ ಅಧ್ಯಕ್ಷರು ಮತ್ತು ಮುಖಂಡರು ಉಪಸ್ಥಿತರಿದ್ದರು.