ಬೆಂಗಳೂರು, ನ.26 www.bengaluruwire.com : ರಾಜಧಾನಿ ಬೆಂಗಳೂರಿನಲ್ಲಿ ಮತದಾರರ ಜಾಗೃತಿ ಮೂಡಿಸುವ ನೆಪದಲ್ಲಿ ಮನೆ ಮನೆಗೆ ತೆರಳಿ ಮತದಾರರ ಸಮೀಕ್ಷೆ ನಡೆಸಿ ನಿಯಮ ಉಲ್ಲಂಘಿಸಿದ ಚಿಲುಮೆ ಸಂಸ್ಥೆಯ ಅಕ್ರಮದಲ್ಲಿ ಶಿವಾಜಿನಗರ, ಚಿಕ್ಕಪೇಟೆ ಹಾಗೂ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ಖಾಸಗಿ ವ್ಯಕ್ತಿಗಳಿಗೆ ಮತಗಟ್ಟೆ ಹಂತದ ಅಧಿಕಾರಿಗಳು (BLO/BLCs) ಎಂಬ ಗುರುತಿನ ಚೀಟಿ ನೀಡಿರುವುದು ತನಿಖಾ ವರದಿ ಖಚಿತವಾದ ಹಿನ್ನಲೆಯಲ್ಲಿ ಕೇಂದ್ರ ಚುನಾವಣಾ ಆಯೋಗ ಇಬ್ಬರು ಐಎಎಸ್ ಅಧಿಕಾರಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತು ಮಾಡಿದೆ.
ಇದಲ್ಲದೆ ಈ ಮೂರು ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿಯ ಸಮಗ್ರ ಪರಿಶೀಲನೆಗೆ ನಿರ್ದೇಶನ ನೀಡಿದೆ. ಬಿಬಿಎಂಪಿ ವಿಶೇಷ ಆಯುಕ್ತ ಎಸ್.ರಂಗಪ್ಪ ಹಾಗೂ ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಅಮಾನತಿಗೆ ನಿರ್ದೇಶನ ನೀಡಿದೆ. ಬಿಬಿಎಂಪಿಯ ವಿಶೇಷ ಆಯುಕ್ತ ರಂಗಪ್ಪ ಅವರು, ಶಿವಾಜಿನಗರ ಮತ್ತು ಚಿಕ್ಕಪೇಟೆ ಕ್ಷೇತ್ರಗಳ ಹೆಚ್ಚುವರಿ ಜಿಲ್ಲಾ ಚುನಾವಣಾಧಿಕಾರಿಯಾಗಿದ್ದರು. ಹಾಗೂ ಶ್ರೀನಿವಾಸ್ ಮಹದೇವಪುರ ಕ್ಷೇತ್ರದ ಹೆಚ್ಚುವರಿ ಜಿಲ್ಲಾ ಚುನಾವಣಾಧಿಕಾರಿಯಾಗಿದ್ದರು. ಈ ಇಬ್ಬರು ಐಎಎಸ್ ಅಧಿಕಾರಿಗಳನ್ನು ಅಮಾನತುಗೊಳಿಸಿ, ಇಲಾಖೆ ವಿಚಾರಣೆ ವಿಚಾರಣೆ ಆರಂಭಿಸುವಂತೆ ಕೇಂದ್ರ ಚುನಾವಣಾ ಆಯೋಗ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ನಿರ್ದೇಶನ ನೀಡಿದೆ.
ಚಿಲುಮೆ ಸಂಸ್ಥೆಯು ಮತದಾರರ ಜಾಗೃತಿ ಅಭಿಯಾನವನ್ನು ದುರುಪಯೋಗಪಡಿಸಿಕೊಂಡು ಮತದಾರರ ಮಾಹಿತಿ ಕದ್ದಿದೆ ಹಾಗೂ ಮತಪಟ್ಟಿಗೆಗೆ ಅಕ್ರಮವಾಗಿ ಮತದಾರರ ಹೆಸರು ಸೇರ್ಪಡೆ ಹಾಗೂ ಪಟ್ಟಿಯಿಂದ ಹೆಸರು ತೆಗೆದುಹಾಕುವ ಕೆಲಸ ಮಾಡಿದೆ ಎಂಬ ಬಗ್ಗೆ ಮಾಧ್ಯಮಗಳ ವರದಿ, ರಾಜಕೀಯ ಪಕ್ಷಗಳು ಈ ಕುರಿತಂತೆ ಆಯೋಗಕ್ಕೆ ದೂರು ನೀಡಿದೆ. ಇದಲ್ಲದೆ ಕಾಡುಗೋಡಿ ಪೊಲೀಸ್ ಠಾಣೆ, ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣದ ಕುರಿತಂತೆ ತನಿಖೆ ನಡೆದು ಎಫ್ ಐಆರ್ ದಾಖಲಾಗಿದೆ. ಬೆಂಗಳೂರು ಪ್ರಾದೇಶಿಕ ಆಯುಕ್ತರಾದ ಅಮ್ಲಾನ್ ಬಿಸ್ವಾಸ್ ಆಡಳಿತಾತ್ಮಕ ತನಿಖೆಗೆ ಆದೇಶಿಸಿದ್ದಾರೆ. ಆಯೋಗವು ಈ ಪ್ರಕರಣ ಕುರಿತಂತೆ ವರದಿ ಪಡೆದ ಬಳಿಕ ಈ ಕ್ರಮ ಕೈಗೊಂಡಿದೆ.
ಶಿವಾಜನಿಗರ, ಚಿಕ್ಕಪೇಟೆ ಹಾಗೂ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿಗೆ ಸೇರ್ಪಡೆ ಹಾಗೂ ಪಟ್ಟಿಯಿಂದ ಮತದಾರರ ಹೆಸರನ್ನು ಕೈಬಿಟ್ಟಿರುವ ಕುರಿತು ಶೇ.100ರಷ್ಟು ಪರಿಶೀಲನೆ ನಡೆಸಬೇಕು ಎಂದು ಆಯೋಗ ಹೇಳಿದೆ. ಈ ಕುರಿತಂತೆ ಮೂರು ಕ್ಷೇತ್ರಗಳಲ್ಲಿನ ಮತದಾರರ ಪಟ್ಟಿಯ ಸಮಗ್ರ ಪರಿಶೀಲನೆಗೆ ಬಿಬಿಎಂಪಿ ಅಧಿಕಾರ ವ್ಯಾಪ್ತಿಯಿಂದ ಹೊರಗಿರುವ ಮೂರು ಐಎಎಸ್ ಅಧಿಕಾರಿಗಳನ್ನು ಆಯೋಗ ನೇಮಕ ಮಾಡಿದೆ. ಚಿಕ್ಕಪೇಟೆ ಕ್ಷೇತ್ರಕ್ಕೆ ಡಾ.ಆರ್.ವಿಶಾಲ್, ಶಿವಾಜಿನಗರ ಕ್ಷೇತ್ರಕ್ಕೆ ಪ್ರಿಯಾಂಕಾ ಮೇರಿ ಫ್ರಾನ್ಸಿಸ್ ಹಾಗೂ ಮಹದೇವಪುರ ಕ್ಷೇತ್ರಕ್ಕೆ ಅಜಯ್ ನಾಗಭೂಷಣ್ ಅವರನ್ನು ಆಯೋಗ ನೇಮಕ ಮಾಡಿದೆ.
3 ಕ್ಷೇತ್ರಗಳಲ್ಲಿ ಮತದಾರರ ಪಟ್ಟಿ ಪರಿಷ್ಕರಣಾ ಅವಧಿ ವಿಸ್ತರಣೆ:
ಬೆಂಗಳೂರಿನ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲೂ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣಾ ಅಭಿಯಾನದ ಡಿಸೆಂಬರ್ 9ಕ್ಕೆ ಕೊನೆಗೊಳ್ಳಲಿದೆ. ಆದರೆ, ಶಿವಾಜಿನಗರ, ಚಿಕ್ಕಪೇಟೆ ಮತ್ತು ಮಹದೇವಪುರ ವಿಧಾನಸಭಾ ಕ್ಷೇತ್ರಗಳಲ್ಲಿ ಡಿ.24ರವರೆಗೂ ವಿಶೇಷ ಪರಿಷ್ಕರಣಾ ಅಭಿಯಾನ ನಡೆಸುವಂತೆ ಆಯೋಗ ಆದೇಶಿಸಿದೆ.
ಈ ಮೂರೂ ಕ್ಷೇತ್ರಗಳಲ್ಲಿ ಮತದಾರರ ಪಟ್ಟಿಗೆ ಸೇರಿಸಿರುವ ಹೆಸರುಗಳು ಮತ್ತು ಕೈಬಿಡಲಾಗಿರುವ ಹೆಸರುಗಳ ಸಂಪೂರ್ಣ ವಿವರಗಳನ್ನು ನೋಂದಾಯಿತ ರಾಜಕೀಯ ಪಕ್ಷಗಳ ಜತೆ ಹಂಚಿಕೊಳ್ಳಲಾಗುವುದು. ಆ ಪಟ್ಟಿಯನ್ನು ಪರಿಶೀಲಿಸಿ ದೂರು ಮತ್ತು ಆಕ್ಷೇಪಣೆ ಸಲ್ಲಿಸಲು ಅವರಿಗೆ ಅವಕಾಶವಿರುತ್ತದೆ. ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ನೋಂದಾಯಿತ ರಾಜಕೀಯ ಪಕ್ಷಗಳು ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದೆ.
ಮತದಾರರ ಪಟ್ಟಿ ಪರಿಷ್ಕರಣೆಗೆ ವೀಕ್ಷಕರ ನೇಮಕ :
ಬಿಬಿಎಂಪಿ ವ್ಯಾಪ್ತಿಯಲ್ಲಿನ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಗೂ ವೀಕ್ಷಕರನ್ನಾಗಿ ಐಎಎಸ್ ಅಧಿಕಾರಿಗಳನ್ನು ನೇಮಿಸಲಾಗಿದೆ. ಬಿಬಿಎಂಪಿ ಕೇಂದ್ರ ವಲಯಕ್ಕೆ ಉಜ್ವಲ್ ಘೋಷ್, ಉತ್ತರ ವಲಯಕ್ಕೆ ರಾಮಚಂದ್ರನ್ ಆರ್., ದಕ್ಷಿಣ ವಲಯಕ್ಕೆ ಪಿ.ರಾಜೇಂದ್ರ ಚೋಳನ್, ಬೆಂಗಳೂರು ನಗರ ಜಿಲ್ಲೆಯ ವ್ಯಾಪ್ತಿಗೆ ಡಾ.ಎನ್.ಮಂಜುಳಾ ಅವರನ್ನು ವೀಕ್ಷಕರಾಗಿ ಕೇಂದ್ರ ಚುನಾವಣಾ ಆಯೋಗ ನೇಮಿಸಿದೆ. ಇವರು ಶಿವಾಜಿನಗರ, ಚಿಕ್ಕಪೇಟೆ ಮತ್ತು ಮಹದೇವಪುರ ಕ್ಷೇತ್ರಗಳನ್ನು ಹೊರತುಪಡಿಸಿ ಆಯಾ ವಲಯದ ಎಲ್ಲ ಕ್ಷೇತ್ರಗಳ ಮತದಾರರ ಪಟ್ಟಿ ಪರಿಷ್ಕರಣೆಗೆ ನಿಗಾವಹಿಸಬೇಕು ಎಂದು ತಿಳಿಸಿದೆ.
ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿನ ಅಕ್ರಮಗಳ ಕುರಿತು ವಿಚಾರಣೆ ನಡೆಸುತ್ತಿರುವ ಬೆಂಗಳೂರು ಪ್ರಾದೇಶಿಕ ಆಯುಕ್ತ ಅಮ್ಲಾನ್ ಆದಿತ್ಯ ಬಿಸ್ವಾಸ್ ಅವರಿಗೆ ಬಿಬಿಎಂಪಿ ವ್ಯಾಪ್ತಿಯಲ್ಲಿನ ಮತದಾರರ ಪಟ್ಟಿ ಪರಿಷ್ಕರಣೆಯ ಸಮಗ್ರ ಮೇಲುಸ್ತುವಾರಿಯ ಜವಾಬ್ದಾರಿಯನ್ನೂ ನೀಡಿ ಕೇಂದ್ರ ಚುನಾವಣಾ ಆಯೋಗ ಆದೇಶ ಹೊರಡಿಸಿದೆ.
ಈ ಕೆಲಸಕ್ಕೆ ಅವರು ಮುಖ್ಯ ಚುನಾವಣಾಧಿಕಾರಿಯ ಒಪ್ಪಿಗೆಯೊಂದಿಗೆ ಯಾವುದೇ ಅಧಿಕಾರಿಗಳನ್ನು ನೇಮಕ ಮಾಡಿಕೊಳ್ಳುವ ಅಧಿಕಾರ ನೀಡಲಾಗಿದೆ. ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿನ ಅಕ್ರಮದ ಕುರಿತು ನಡೆಸುತ್ತಿರುವ ವಿಚಾರಣೆಯನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆಯೂ ಆಯೋಗ ಸೂಚಿಸಿದೆ.