ಬೆಂಗಳೂರು, ಫೆ.24 www.bengaluruwire.com : ಏಳನೇ ವೇತನ ಆಯೋಗ ಜಾರಿ ಹಾಗೂ ನೂತನ ಪಿಂಚಣಿ ಯೋಜನೆ ಜಾರಿಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವು ಮಾ.1 ರಿಂದ ನಡೆಸುವ ಪ್ರತಿಭಟನೆಗೆ ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ನೌಕರರ ಸಂಘ ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘ ಬೆಂಬಲ ವ್ಯಕ್ತಪಡಿಸಿದೆ.
ಈ ಹಿನ್ನಲೆಯಲ್ಲಿ ಮಾ.1 ರಿಂದ ರಾಜ್ಯದ ಹತ್ತು ಮಹಾನಗರ ಪಾಲಿಕೆ ಹಾಗೂ ಬಿಬಿಎಂಪಿಯಲ್ಲಿನ ನೌಕರರು ಕೆಲಸಕ್ಕೆ ಗೈರು ಹಾಜರಾಗುವ ಮೂಲಕ ಈ ಹೋರಾಟಕ್ಕೆ ಕೈಜೋಡಿಸಿದೆ ಎಂದು ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಎ.ಅಮೃತ್ ರಾಜ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸರ್ಕಾರವು ಈಡೇರಿಸಬೇಕಾದ ಪ್ರಮುಖ ಬೇಡಿಕೆಗಳು:
1. ರಾಜ್ಯ ಸರ್ಕಾರಿ ನೌಕರರು ಸರ್ಕಾರದ ಅಧೀನಕ್ಕೊಳಪಡುವ ನೌಕರರಿಗೆ 11-07-2022 ರಿಂದ ಪರಿಷ್ಕೃತ ವೇತನ ಭತ್ಯೆಗಳಿಗೆ ಅರ್ಹರಾಗಿದ್ದು, 1ನೇ ವೇತನ ಆಯೋಗದ ಮಾದರಿಯಂತೆ 7ನೇ ವೇತನ ಆಯೋಗದಿಂದ ಮಧ್ಯಂತರ ವರದಿಯನ್ನು ಆದಷ್ಟು ಬೇಗನೆ ಪಡೆದು, ಚುನಾವಣೆ ನೀತಿ ಸಂಹಿತೆಗಿಂತ ಮೊದಲು ಶೇ.10ರಷ್ಟು ಫಿಟ್‌ಮೆಂಟ್ ಸೌಲಭ್ಯವನ್ನು 01- 07-2022 ರಿಂದ ಜಾರಿಗೆ ಬರುವಂತೆ ಸರ್ಕಾರಿ ಆದೇಶ ಹೊರಡಿಸುವುದು,
2. ರಾಜ್ಯದ ಎನ್.ಪಿ.ಎಸ್ ನೌಕರರ ಜೀವನ ನಿರ್ವಹಣೆ ಸಂಧ್ಯಾ ಕಾಲದ ಬದುಕು ಅತ್ಯಂತ ಕಷ್ಟಕರವಾಗಿರುವುದರಿಂದ ಎನ್.ಪಿ.ಎನ್. ನೌಕರರನ್ನು ಓ.ಪಿ.ಎಸ್ ವ್ಯಾಪ್ತಿಗೆ ತರುವುದು ಸರ್ಕಾರದ ಜವಾಬ್ದಾರಿಯಾಗಿರುತ್ತದೆ. ಈಗಾಗಲೇ ಪಂಜಾಬ್, ರಾಜಸ್ಥಾನ, ಛತ್ತೀಸ್‌ಗಡ, ಜಾರ್ಖಂಡ್, ಹಿಮಾಚಲ ಪ್ರದೇಶ ರಾಜ್ಯಗಳಲ್ಲಿ ಹಳೆ ಪಿಂಚಣಿ ಯೋಜನೆಯನ್ನು ಜಾರಿಗೆ ಬಂದಿದ್ದು, ಅದೇ ಮಾದರಿಯಲ್ಲಿ ಕರ್ನಾಟಕದಲ್ಲೂ ಸಹ ಎನ್.ಪಿ.ಎಸ್ ಯೋಜನೆಯನ್ನು ರದ್ದುಪಡಿಸಿ ಹಳೆ ಪಂಚಣಿ ಯೋಜನೆಯನ್ನು ಜಾರಿಗೊಳಿಸುವುದು.