ಬೆಂಗಳೂರು, ಮಾ.1 www.bengaluruwire.com : ರಾಜ್ಯ ಸರ್ಕಾರಿ ನೌಕರರ ಮುಷ್ಕರಕ್ಕೆ ಮಣಿದ ರಾಜ್ಯ ಸರ್ಕಾರ 7ನೇ ರಾಜ್ಯ ವೇತನ ಆಯೋಗದ ಅಂತಿಮ ವರದಿಯನ್ನು ಕಾಯ್ದಿರಿಸಿ, ರಾಜ್ಯ ಸರ್ಕಾರಿ ನೌಕರರಿಗೆ ಶೇಕಡಾ 17ರಷ್ಟು ವೇತನ ಹೆಚ್ಚಿಸಿ ಮಧ್ಯಂತರ ಪರಿಹಾರವನ್ನು ಮಂಜೂರು ಮಾಡಿ ಅಧಿಕೃತ ಆದೇಶ ಹೊರಡಿಸಿದೆ. ಈ ಬಗ್ಗೆ ಆದೇಶ ಪ್ರಕಟವಾದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘ ಮುಷ್ಕರ (Government Employees Strike) ಕೈಬಿಡಲು ನಿರ್ಧಾರ ಮಾಡಿದೆ.
ನೌಕರರ ಸಂಘದ ಜೊತೆ ಮಾತುಕತೆ ನಡೆಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶೇ.17ರಷ್ಟು ವೇತನ ಹೆಚ್ಚಳ ಮಾಡಲು ಸೂಚಿಸಿದರು. ಈ ಬೇಡಿಕೆ ಈಡೇರಿಕೆ ಆಗಿರೋ ಹಿನ್ನಲೆಯಲ್ಲಿ ಸರ್ಕಾರದ ಬೊಕ್ಕಸಕ್ಕೆ ಒಂದು ತಿಂಗಳಿಗೆ 900 ಕೋಟಿ ಹೆಚ್ಚುವರಿ ಹಣ ಬೇಕಾಗುತ್ತದೆ. ರಾಜ್ಯ ಸರ್ಕಾರದ ಅಧಿಕೃತ ಆದೇಶದ ಬೆನ್ನಲ್ಲೇ ಅನಿರ್ದಿಷ್ಟ ಮುಷ್ಕರವನ್ನು ವಾಪಸ್ ತೆಗೆದು ಕೊಂಡಿದ್ದೇವೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಅವರು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಏ.1ರಿಂದ ಶೇ.17ರಷ್ಟು ವೇತನ ಹೆಚ್ಚಳಕ್ಕೆ ಸರ್ಕಾರ ಆದೇಶ ನೀಡಿದೆ. ಸರ್ಕಾರದ ಆದೇಶವನ್ನು ಸಾಮೂಹಿಕವಾಗಿ ಒಪ್ಪಿಕೊಳ್ಳುತ್ತಿದ್ದೇವೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಭರವಸೆಗಳು ಸಿಗುತ್ತವೆ ಎಂಬ ನಿರೀಕ್ಷೆಯಲ್ಲಿದ್ದೇವೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅನಿರ್ದಿಷ್ಟ ಅವಧಿಯ ಮುಷ್ಕರವನ್ನು ವಾಪಸ್ ಪಡೆದಿದ್ದೇವೆ ಎಂದು ವಿವರಿಸಿದರು.
ಪ್ರಸ್ತುತ ರಾಜ್ಯ ಸರ್ಕಾರಿ ನೌಕರರ ಬೇಡಿಕೆಗಳ ಹಿನ್ನೆಲೆಯಲ್ಲಿ, ಸರ್ಕಾರದ ನೀತಿ ನಿರ್ಣಯದಂತೆ 7ನೇ ರಾಜ್ಯ ವೇತನ ಆಯೋಗದ ಅಂತಿಮ ವರದಿಯನ್ನು ಕಾಯ್ದಿರಿಸಿ, ರಾಜ್ಯ ಸರ್ಕಾರಿ ನೌಕರರಿಗೆ, ಸ್ಥಳೀಯ ಸಂಸ್ಥೆಗಳ ಮತ್ತು ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರಿಗೆ ಹಾಗೂ ವಿಶ್ವವಿದ್ಯಾನಿಲಯಗಳ ಬೋಧಕೇತರ ಸಿಬ್ಬಂದಿಗಳಿಗೆ ಮಧ್ಯಂತರ ಪರಿಹಾರವನ್ನು ಮಂಜೂರು ಮಾಡಲು ಸರ್ಕಾರವು ನಿರ್ಧರಿಸಿರುತ್ತದೆ. ಅದರಂತೆ, ಆದೇಶವನ್ನು ಹೊರಡಿಸಿದೆ. 2018ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ವೇತನವನ್ನು ಪಡೆಯುತ್ತಿರುವ ರಾಜ್ಯ ಸರ್ಕಾರಿ ನೌಕರರುಗಳಿಗೆ 01ನೇ ಏಪ್ರಿಲ್ 2023 ರಿಂದ ಜಾರಿಗೆ ಬರುವಂತೆ ಮೂಲ ವೇತನದ ಶೇಕಡ 17 ರಷ್ಟು ಮಧ್ಯಂತರ ಪರಿಹಾರವನ್ನು ಮಂಜೂರು ಮಾಡಿದೆ.
ಹಳೆಯ ಪಿಂಚಣಿ ಯೋಜನೆ ಜಾರಿಗೆ ಸಮಿತಿ ರಚನೆ :
ರಾಜ್ಯದಲ್ಲಿ ರಾಷ್ಟ್ರೀಯ ಪಿಂಚಣಿ ಯೋಜನೆ (National Pension Scheme)ಯ ಬದಲಾಗಿ ಹಳೆಯ ಪಿಂಚಣಿ ಯೋಜನೆ (Old Pension Scheme)ಯನ್ನು ಜಾರಿಗೆ ಸಮಿತಿ ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರವು ರಾಜ್ಯದಲ್ಲಿ ಹಳೆಯ ಪಿಂಚಣಿ ಯೋಜನೆಯನ್ನು ಜಾರಿಗೆ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಯವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲು ತೀರ್ಮಾನಿಸಿ ಆದೇಶ ಹೊರಡಿಸಿದೆ. ರಾಜ್ಯದಲ್ಲಿ ದಿನಾಂಕ:01.04.2006 ರ ನಂತರ ಸರ್ಕಾರಿ ಸೇವೆಗೆ ಸೇರಿರುವ ನೌಕರರಿಗೆ ರಾಷ್ಟ್ರೀಯ ಪಿಂಚಣಿ ಯೋಜನೆಯನ್ನು ಜಾರಿಗೆ ತರಲಾಗಿರುತ್ತದೆ.
ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರ ದಿನಾಂಕ: 21.02.2023 ಮನವಿಯಲ್ಲಿ ಕರ್ನಾಟಕ ರಾಜ್ಯದಲ್ಲಿ ಪ್ರಸ್ತುತ ಜಾರಿಯಲಿರುವ ಸರ್ಕಾರಿ ನೌಕರರ ನೂತನ ಪಿಂಚಣಿ ಯೋಜನೆಗೆ ಸಂಬಂಧಿಸಿದಂತೆ ದೇಶದ ಹಲವು ರಾಜ್ಯಗಳು, ರಾಷ್ಟ್ರೀಯ ಪಿಂಚಣಿ ಯೋಜನೆಯ ಬದಲಾಗಿ ಈ ಹಿಂದೆ ಜಾರಿಯಲ್ಲಿದ್ದ ಹಳೆಯ ಪಿಂಚಣಿ ಯೋಜನೆಯನ್ನು ಅನುಷ್ಠಾನಗೊಳಿಸಿರುತ್ತವೆ, ಅದೇ ರೀತಿ ಕರ್ನಾಟಕ ರಾಜ್ಯದಲ್ಲೂ ಸಹ ರಾಷ್ಟ್ರೀಯ ಪಿಂಚಣಿ ಯೋಜನೆಯ ಬದಲಾಗಿ ಹಳೆಯ ಪಿಂಚಣಿ ಯೋಜನೆಯನ್ನು ಜಾರಿಗೆ ತರುವಂತೆ ಸರ್ಕಾರವನ್ನು ಕೋರಿರುತ್ತಾರೆ.
ರಾಜ್ಯ ಸರ್ಕಾರಿ ನೌಕರರ ಸಂಘದ ಮನವಿಯನ್ನು ಪರಿಶೀಲಿಸಿದ ಸರ್ಕಾರವು ಈಗಾಗಲೇ ಹಳೆಯ ಪಿಂಚಣಿ ಯೋಜನೆ ಯನ್ನು ಮರು ಜಾರಿ ಮಾಡಿರುವ ರಾಜ್ಯಗಳಲ್ಲಿ ಈ ಯೋಜನೆಯನ್ನು ಅನುಷ್ಠಾನಗೊಳಿಸಿರುವ ಕುರಿತು ಕೈಗೊಂಡಿರುವ ಕ್ರಮದ ಬಗ್ಗೆ ಅಧ್ಯಯನ ನಡೆಸಿ ವರದಿ ಸಲ್ಲಿಸಲು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಯವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲು ತೀರ್ಮಾನಿಸಿ ಆದೇಶಿಸುತ್ತದೆ.
“ಬೆಂಗಳೂರು ವೈರ್” ಡಿಜಿಟಲ್ ವೆಬ್ ನ್ಯೂಸ್ ಪೋರ್ಟೆಲ್ಲಿನ ಸೋಶಿಯಲ್ ಮೀಡಿಯಾ ಪೇಜ್ ಹಾಗೂ Google News ಗಳಿಗೆ ಉಚಿತವಾಗಿ Subscribe ಆಗಲು Facebook, Telegram, Twitter, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.