ಬೆಂಗಳೂರು, ಮಾ.3 www.bengaluruwire.com : ದರವಿತೀಯ ಪಿಯುಸಿ ಪರೀಕ್ಷೆ ಮಾ.9ರಿಂದ 29ನೇ ತಾರೀಖಿನವರೆಗೆ ನಡೆಯಲಿದ್ದು, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು (KSRTC) ವಾರ್ಷಿಕ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಉಚಿತವಾಗಿ ಬಸ್ ನಲ್ಲಿ ಪರೀಕ್ಷಾ ಕೇಂದ್ರಕ್ಕೆ ಹೋಗಿ ಬರಲು ಅವಕಾಶ ಒದಗಿಸಿದೆ.
ರಾಜ್ಯದ ಎಲ್ಲಾ ರೀತಿಯ ರಸ್ತೆ ಸಾರಿಗೆ ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗಧೂತ ಬಸ್ಸುಗಳಲ್ಲಿ
ವಿದ್ಯಾರ್ಥಿಗಳು ತಮ್ಮ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಹೋಗುವಾಗ ಮತ್ತು ಹಿಂದಿರುಗುವಾಗ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಪ್ರವೇಶ ಪತ್ರವನ್ನು ತೋರಿಸಿ, ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಿದೆ.
ವಿದ್ಯಾರ್ಥಿ ವರ್ಗದವು ಈ ಸೌಲಭ್ಯವನ್ನು ಪಡೆದುಕೊಳ್ಳಬೇಕಾಗಿ ಕೆಎಸ್ ಆರ್ ಟಿಸಿ ನಿಗಮವು ಪತ್ರಿಕಾ ಪ್ರಕಟಣೆಯ ಮೂಲಕ ಕೋರಿದೆ.
ಇದಲ್ಲದೆ ಪ್ರವೇಶ ಪತ್ರದ ಆಧಾರದ ಮೇಲೆ ಬಸ್ಸುಗಳು ಓಡಾಡುವ ಮಾರ್ಗದಲ್ಲಿ ಪರೀಕ್ಷಾ ಕೇಂದ್ರಗಳಿದ್ದಲ್ಲಿ, ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ತೆರಳಲು ಬಸ್ಸನ್ನು ಹತ್ತುವವರಿದ್ದಲ್ಲಿ ಹಾಗೂ ಇಳಿಯಲು ಅನುಕೂಲವಾಗುವಂತೆ ನಿಗಮವು ಕೋರಿಕೆ ನಿಲುಗಡೆಗೆ ಅವಕಾಶ ಕಲ್ಪಿಸಿದೆ ಎಂದು ಕೆಎಸ್ ಆರ್ ಟಿಸಿಯ ಮುಖ್ಯ ಸಂಚಾರ ವ್ಯವಸ್ಥಾಪಕರು ತಿಳಿಸಿದ್ದಾರೆ.