ಬೆಂಗಳೂರು, ಮಾ.17 www.bengaluruwire.com : ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆಯ ಆರ್ಭಟ ನಿಧಾನವಾಗಿ ಹೆಚ್ಚಳವಾಗುತ್ತಿದೆ. ಮಾ.18ರ ಬೆಳಗ್ಗೆಯ ವರೆಗೆ ಬೆಂಗಳೂರು ಸೇರಿದಂತೆ ರಾಜ್ಯದ ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡು ಪ್ರದೇಶದಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಕೆಲವೊಂದು ಪ್ರದೇಶದಲ್ಲಿ ಭಾರೀ ಮಳೆಯಾಗಲಿದೆ. ಉಳಿದಂತೆ ಇತರ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉತ್ತರ ಒಳನಾಡಿನ ಬೀದರ್, ಕಲ್ಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಗಳಲ್ಲಿ ಗುಡುಗಿನಿಂದ ಕೂಡಿದ ಮಳೆಯಾಗಲಿದೆ. ಇನ್ನು ದಕ್ಷಿಣ ಒಳನಾಡಿನ ಬೆಂಗಳೂರು ನಗರ ಜಿಲ್ಲೆ, ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೊಡಗು, ಕೋಲಾರ, ಮೈಸೂರು, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಇದೇ ಪರಿಸ್ಥಿತಿಯಿರಲಿದೆ ಎಂದು ಇಲಾಖೆಯ ಅಧಿಕಾರಿಗಳು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತ ಜಿಲ್ಲೆ, ಚಾಮರಾಜನಗರದಲ್ಲಿ ವ್ಯಾಪಕವಾಗಿ ಕಡಿಮೆಯಿಂದ ಸಾಧಾರಣ ಮಳೆ ಹಾಗೂ ಕೆಲವು ಕಡೆಗಳಲ್ಲಿ ಭಾರೀ ಮಳೆಯಾಗಲಿದೆ ಹಾಗೂ ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು ನಗರ ಜಿಲ್ಲೆಯಲ್ಲಿ ಅಲ್ಲಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಉಳಿದಂತೆ ದಕ್ಷಿಣ ಒಳನಾಡಿನ ಇತರ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ.
ಇನ್ನು ಉತ್ತರ ಒಳನಾಡಿನ ಯಾದಗಿರಿ ಹಾಗೂ ರಾಯಚೂರು ಜಿಲ್ಲೆಗಳಲ್ಲಿ ವ್ಯಾಪಕವಾಗಿ ಹಗುರದಿಂದ ಸಾಧಾರಣ ಮಳೆ ಹಾಗೂ ಕೆಲವು ಕಡೆ ಭಾರೀ ಮಳೆಯಾಗಲಿದೆ. ಅಲ್ಲದೆ ಬೀದರ್, ಕಲ್ಬುರ್ಗಿ, ವಿಜಯಪುರ, ಬಳ್ಳಾರಿ ಹಾಗೂ ಕೊಪ್ಪಳ ಜಿಲ್ಲೆಗಳಲ್ಲಿ ಅಲ್ಲಲ್ಲಿ ಒಂದೆರಡು ಕಡೆ ಹಾಗೂ ಚದುರಿದಂತೆ ಮಳೆಯಾಗಲಿದೆ. ಅದು ಹೊರತುಪಡಿಸಿದರೆ ಉತ್ತರ ಒಳನಾಡಿನ ಇತರ ಜಿಲ್ಲೆಗಳ ಭಾಗಗಳಲ್ಲಿ ಒಣಹವೆ ಮುಂದುವರೆಯಲಿದೆ. ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಲಿದೆ ಎಂದು ಹವಾಮಾನ ವಿಜ್ಞಾನಿಗಳು ತಿಳಿಸಿದ್ದಾರೆ.