ಬೆಂಗಳೂರು, ಏ.06 www.bengaluruwire.com : ಕರ್ನಾಟಕ ವಿಧಾನಸಭಾ ಚುನಾವಣೆ ಮೇ 10ರಂದು ನಡೆಯಲಿದ್ದು, 42 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಕಾಂಗ್ರೆಸ್ ಗುರುವಾರ ಪ್ರಕಟಿಸಿದೆ.
ಕಾಂಗ್ರೆಸ್ 124 ಕ್ಷೇತ್ರಗಳಿಗೆ ಚುನಾವಣಾ ನೀತಿಸಂಹಿತೆ ಘೋಷಣೆಗೆ ಮುನ್ನವೇ ಅಭ್ಯರ್ಥಿಗಳ ಹೆಸರಿನ ಪಟ್ಟಿಯನ್ನು ಬಿಡುಗಡೆ ಮಾಡಿತ್ತು. ಉಳಿದ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಲು ಕಾಂಗ್ರೆಸ್ ಚುನಾವಣಾ ಸಮಿತಿಯು ಹಲವು ಸುತ್ತಿನ ಚರ್ಚೆಗಳನ್ನು ನಡೆಸಿ ಇದೀಗ ಎರಡನೇ ಪಟ್ಟಿ ಬಿಡುಗಡೆ ಮಾಡಿದೆ.
ಸಂಸದ ಮೋಹನ್ ಪ್ರಕಾಶ್ ನೇತೃತ್ವದ ಪಕ್ಷದ ಸ್ಕ್ರೀನಿಂಗ್ ಸಮಿತಿಯು ಸರಣಿ ಸಭೆ ನಡೆಸಿ 99 ಕ್ಷೇತ್ರಗಳಿಗೆ ಸಂಭಾವ್ಯರ ಹೆಸರನ್ನು ಅಂತಿಮಗೊಳಿಸಿತ್ತು. ಮೇಲುಕೋಟೆ ಕ್ಷೇತ್ರದಲ್ಲಿ ಸರ್ವೋದಯ ಕರ್ನಾಟಕ ಪಕ್ಷದ ಅಭ್ಯರ್ಥಿ ದರ್ಶನ್ ಪುಟ್ಟಣ್ಣಯ್ಯರನ್ನು ಬೆಂಬಲಿಸಲು ಪಕ್ಷ ನಿರ್ಧರಿಸಿದ್ದು, ಅಲ್ಲಿ ಪಕ್ಷದಿಂದ ಯಾವುದೇ ಅಭ್ಯರ್ಥಿ ನಿಲ್ಲಿಸದೇ ಇರಲು ತೀರ್ಮಾನಿಸಿದೆ ಎಂದು ಹೇಳಲಾಗುತ್ತಿದೆ.