ಬೆಂಗಳೂರು/ನವದೆಹಲಿ, ಮೇ.18 www.bengaluruwire.com : ವಿಧಾನಸಭಾ ಚುನಾವಣೆಯಲ್ಲಿ ಬಹುಮತ ಬಂದಿದ್ದರೂ ಮುಖ್ಯಮಂತ್ರಿ ಹುದ್ದೆ ಆಯ್ಕೆ ವಿಚಾರದಲ್ಲಿ ಪಟ್ಟು ಹಿಡಿದಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ
ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಮಧ್ಯೆ ಸಂಧಾನ
ನಡೆಸುವಲ್ಲಿ ಕಾಂಗ್ರೆಸ್ ಹೈಕಮಾಂಡ್ ಯಶಸ್ವಿಯಾಗಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.
ಎಐಸಿಸಿ ಇಂದು ಬೆಳಗ್ಗೆ 10 ಗಂಟೆಗೆ ನವದೆಹಲಿಯಲ್ಲಿ ಪತ್ರಿಕಾಗೋಷ್ಠಿಯನ್ನು ಕರೆದಿದ್ದು, ಅಲ್ಲಿಯೇ ಅಧಿಕೃತವಾಗಿ ಸಿದ್ದರಾಮಯ್ಯನವರನ್ನು ಎರಡನೇ ಬಾರಿಗೆ ಮುಖ್ಯಮಂತ್ರಿ ಸ್ಥಾನಕ್ಕೆ ಮತ್ತು ಡಿ.ಕೆ.ಶಿವಕುಮಾರ್
ಅವರನ್ನು ಉಪ ಮುಖ್ಯಮಂತ್ರಿ ಸ್ಥಾನಕ್ಕೆ ನೇಮಕ ಮಾಡಿರುವ ನಿರ್ಧಾರವನ್ನು ಪ್ರಕಟಿಸುವ ಸಾಧ್ಯತೆಯಿದೆ ಎಂದು ತಿಳಿದು ಬಂದಿದೆ.
ಕಾಂಗ್ರೆಸ್ ಹೈಕಮಾಂಡ್‌ಗೆ ಬಿಸಿ ತುಪ್ಪವಾಗಿದ್ದ ಮುಖ್ಯಮಂತ್ರಿ ಅಭ್ಯರ್ಥಿ ಆಯ್ಕೆ ಕಗ್ಗಂಟು ನಿವಾರಣೆಯಾದಂತಾಗಿದೆ. ಮುಖ್ಯಮಂತ್ರಿ ಹುದ್ದೆಗಾಗಿ ಪಟ್ಟು ಹಿಡಿದಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ನಡುವೆ (ತಲಾ 2.5 ವರ್ಷ) ಅಧಿಕಾರ ಹಂಚಿಕೆಯ ಸೂತ್ರವನ್ನು ಹೈಕಮಾಂಡ್ ಸಿದ್ದಪಡಿಸಿ ಇಬ್ಬರು ಮುಖಂಡರ ಪರಸ್ಪರ ಒಪ್ಪಿಗೆಯನ್ನು ಪಡೆದರು. ಅಲ್ಲದೆ ಡಿ.ಕೆ.ಶಿವಕುಮಾರ್ ಅವರ ಎಲ್ಲಾ ಬೇಡಿಕೆಗಳು ಮತ್ತು ಅವರು ಅಪೇಕ್ಷಿಸುವ ಎರಡು ಪ್ರಮುಖ ಖಾತೆಗಳನ್ನು ನೀಡಲು ಸಭೆಯಲ್ಲಿ ತೀರ್ಮಾನಿಸಲಾಗಿತ್ತು. ಇದರಿಂದ ಕೈ ನಾಯಕರು ಈ ಸಮಸ್ಯೆ ಬಗೆಹರಿಸಿದರು.
ಈ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಉಳಿದಿದ್ದ ರಾಜ್ಯ ಕಾಂಗ್ರೆಸ್ ನಾಯಕರುಗಳು ಗುರುವಾರ ಮಧ್ಯಾಹ್ನದ ವೇಳೆಗೆ ಬೆಂಗಳೂರಿಗೆ ಆಗಮಿಸಲಿದ್ದಾರೆ. ಹೈಕಮಾಂಡ್ ಸೂಚನೆಯ ಮೇರೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಇಂದು ಸಂಜೆ ಕೆಪಿಸಿಸಿ ಇಂದಿರಾ ಗಾಂಧಿ ಭವನದಲ್ಲಿ 7 ಗಂಟೆಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ ಎಂದು ತಿಳಿಸಿದ್ದಾರೆ. ಸಭೆಗೆ ವಿಧಾನಸಭೆ ಚುನಾವಣೆಯಲ್ಲಿ ಆಯ್ಕೆಯಾದ ಎಲ್ಲ ಶಾಸಕರು, ವಿಧಾನಪರಿಷತ್ ಸದಸ್ಯರು ಹಾಗು ಸಂಸದರುಗಳು ಆಗಮಿಸಬೇಕೆಂದು ಡಿಕೆಶಿ ಪತ್ರದ ಮೂಲಕ ಸೂಚಿಸಿದ್ದಾರೆ.
ಸಾಕಷ್ಟು ಪರ – ವಿರೋಧ ಚರ್ಚೆಗಳು, ಬರಲಿರುವ ಲೋಕಸಭಾ ಚುನಾವಣೆ ಸೇರಿದಂತೆ ಎಲ್ಲ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ಈ ನೇಮಕಾತಿಗೆ ಹೈಕಮಾಂಡ್ ಒಪ್ಪಿದೆ ನೀಡಿರುವುದಾಗಿ ಮೂಲಗಳು ತಿಳಿಸಿವೆ.
ಶಾಸಕಾಂಗ ಪಕ್ಷ ನಾಯಕನ ಆಯ್ಕೆ ಜವಾಬ್ದಾರಿಯನ್ನು ಮೊನ್ನೆ ನಡೆದ ಶಾಸಕರ ಸಭೆಯಲ್ಲಿ ಹೈಕಮಾಂಡ್‌ಗೆ ನೀಡುವ ನಿರ್ಣಯ ತೆಗೆದುಕೊಳ್ಳಲಾಗಿತ್ತು. ಅದರಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ ಪಕ್ಷದ ನಾಯಕಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರ ಜೊತೆ ಸುದೀರ್ಘ ಚರ್ಚೆ ನಡೆಸಿ ಕೈಗೊಂಡ ತೀರ್ಮಾನವನ್ನು ಸಂಜೆ ನಡೆಯುವ ಶಾಸಕಾಂಗ ಪಕ್ಷದ ಸಭೆಯಲ್ಲಿ ಪ್ರಕಟಿಸಲಾಗುತ್ತದೆ ಎನ್ನಲಾಗಿದೆ.
ಕಾಂಗ್ರೆಸ್ ಹೈಕಮಾಂಡ್ ಪ್ರತಿನಿಧಿಗಳು ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿಯಾದ ರಣದೀಪ್ ಸಿಂಗ್ ಸುರ್ಜೇವಾಲ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಸೇರಿದಂತೆ ಹಿರಿಯ ಮುಖಂಡರು ಈ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಶಾಸಕಾಂಗ ಪಕ್ಷದ ಸಭೆಯಲ್ಲಿ ಮುಖ್ಯಮಂತ್ರಿ ಅಭ್ಯರ್ಥಿ ಆಯ್ಕೆ ಮಾಡಿದ ಬಳಿಕ ಶುಕ್ರವಾರ ಅಥವಾ ಶನಿವಾರ ನೂತನ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ ಸಚಿವರುಗಳ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ ಎಂದು ಹೇಳಲಾಗಿದೆ.