ಬೆಂಗಳೂರು, ಜೂ.27 www.bengaluruwire.com : ವಿಧಾನಸೌಧ, ಬಿಬಿಎಂಪಿ ಸೇರಿದಂತೆ ನಗರದಾದ್ಯಂತ ಸರ್ಕಾರ, ಸ್ಥಳೀಯಾಡಳಿತ ಸಂಸ್ಥೆಗಳು ಹಾಗೂ ವಿವಿಧ ಸಂಘ ಸಂಸ್ಥೆಗಳು ನಾಡಪ್ರಭು ಕೆಂಪೇಗೌಡರ 514ನೇ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಿದವು.
ನಾಡ ಪ್ರಭು ಕೆಂಪೇಗೌಡ ಅವರ 514ನೇ ಜಯಂತಿ ಅಂಗವಾಗಿ ವಿಧಾನ ಸೌಧದ ಪೂರ್ವ ದಿಕ್ಕಿನಲ್ಲಿ ಇರುವ ಅವರ ಪ್ರತಿಮೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.
ಕಂದಾಯ ಸಚಿವ ಕೃಷ್ಣ ಬೈರೇಗೌಡ, ಮಾಜಿ ಸಚಿವ ಹೆಚ್.ಎಂ.ರೇವಣ್ಣ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಉಪಸ್ಥಿತರಿದ್ದರು.
ಬೆಂಗಳೂರಿನ ಸದಾಶಿವನಗರದ ರಮಣ ಮಹರ್ಷಿ ಪಾರ್ಕ್ ನಲ್ಲಿ ಮಂಗಳವಾರ ಏರ್ಪಡಿಸಿದ್ದ ಕೆಂಪೇಗೌಡ ಉತ್ಸವದಲ್ಲಿ ಆದಿ ಚುಂಚನಗಿರಿ ಮಠದ ಶ್ರೀ ನಿರ್ಮಲಾನಂದ ಸ್ವಾಮೀಜಿ, ಡಿಸಿಎಂ ಡಿ ಕೆ ಶಿವಕುಮಾರ್, ಶಾಸಕರಾದ ಅಶ್ವಥ್ ನಾರಾಯಣ್, ಮುನಿರಾಜು, ಶ್ರೀ ಆದಿ ಚುಂಚನಗಿರಿ ಶಾಖಾಮಠದ ಶ್ರೀ ಸೌಮ್ಯನಾಥ ಸ್ವಾಮೀಜಿ, ವಿಜಯ ಕರ್ನಾಟಕ ಸಂಪಾದಕ ಸುದರ್ಶನ್ ಚನ್ನಂಗಿಹಳ್ಳಿ, ರಾಜ್ಯ ಒಕ್ಕಲಿಗರ ಮಹಾಸಭಾ ಅಧ್ಯಕ್ಷ ಎ.ಎಚ್ ಅನಂದ್ ಮತ್ತಿತರರು ಭಾಗವಹಿಸಿದ್ದರು.
ಇನ್ನೊಂದೆಡೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP)ಯ ಕೇಂದ್ರ ಕಛೇರಿಯ ಮುಂಭಾಗದ ಉದ್ಯಾನದಲ್ಲಿರುವ ನಾಡಪ್ರಭು ಕೆಂಪೇಗೌಡರ ಪ್ರತಿಮೆಗೆ ಆಡಳಿತಗಾರರಾದ ರಾಕೇಶ್ ಸಿಂಗ್, ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ರವರು ಮಾಲಾರ್ಪಣೆ ಮಾಡಿ ಪುಷ್ಪನಮನ ಅರ್ಪಿಸಿದರು.
ಇದೇ ವೇಳೆ ಕೆಂಪೇಗೌಡರ ಸೊಸೆ ಮಹಾತ್ಯಾಗಿ ಲಕ್ಷ್ಮೀದೇವಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಪುಷ್ಪನಮನ ಅರ್ಪಿಸಲಾಯಿತು. ಇದೇ ಸಂದರ್ಭದಲ್ಲಿ ವಿಶೇಷ ಆಯುಕ್ತರಾದ ಡಾ. ಹರೀಶ್ ಕುಮಾರ್, ಉಪ ಆಯುಕ್ತರಾದ ಮಂಜುನಾಥ ಸ್ವಾಮಿ ಹಾಗೂ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.