ಬೆಂಗಳೂರು, ಸೆ.23 www.bengaluruwire.com : ಡಿಎಂಕೆ ಸರಕಾರ ಮತ್ತು ಐಎನ್‍ಡಿಐಎ ಒಕ್ಕೂಟವನ್ನು ಮೆಚ್ಚಿಸುವ ಉದ್ದೇಶದಿಂದ ರಾಜ್ಯದ ಕಾಂಗ್ರೆಸ್ ಸರಕಾರವು ಕಾವೇರಿ ನೀರನ್ನು ತಮಿಳುನಾಡಿಗೆ ಬಿಡುಗಡೆ ಮಾಡುತ್ತಿದೆ. ಇದನ್ನು ತಕ್ಷಣವೇ ರಾಜ್ಯ ಸರ್ಕಾರ ನಿಲ್ಲಿಸಬೇಕು ಎಂದು ಬಿಜೆಪಿ ನಗದಲ್ಲಿಂದು ಬೃಹತ್ ಪ್ರತಿಭಟನೆ ನಡೆಸಿತು.
ಕಾವೇರಿ ನೀರಿನ ವಿಚಾರವೂ ಸೇರಿ ವಿವಿಧ ರಂಗಗಳಲ್ಲಿ ರಾಜ್ಯ ಸರಕಾರದ ವೈಫಲ್ಯವನ್ನು ಖಂಡಿಸಿ ಬಿಜೆಪಿ ವತಿಯಿಂದ ಶನಿವಾರ, ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದಲ್ಲಿ ಖಾಲಿ ಬಿಂದಿಗೆ ಹಿಡಿದು ಬೃಹತ್ ಪ್ರತಿಭಟನೆ ನಡೆಸಲಾಯಿತು.
ತಮಿಳುನಾಡಿಗೆ ನೀರು ಹರಿಸುವುದನ್ನು ತಕ್ಷಣ ನಿಲ್ಲಿಸುವಂತೆ ಬಿಜೆಪಿ ನಾಯಕರು ಆಗ್ರಹಿಸಿದರು. ತಮಿಳುನಾಡಿಗೆ ನೀರು ಹರಿಸುವುದನ್ನು ತಕ್ಷಣ ನಿಲ್ಲಿಸುವಂತೆ ಆಗ್ರಹಿಸಿದ್ದಾರೆ.
ಕಾವೇರಿ ಜಲಾನಯನ ಪ್ರದೇಶದ ಜನರು ನೀರಿಗಾಗಿ ಗುಳೆ ಹೋಗುವ ಸ್ಥಿತಿ ಬರಲಿದೆ ಎಂದು ಬಿಜೆಪಿ ಪ್ರತಿಭಟನೆಯಲ್ಲಿ ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಎಚ್ಚರಿಸಿದರು.
ಕರ್ನಾಟಕ ಮತ್ತು ಕನ್ನಡಿಗರ ಹಿತ ಕಾಪಾಡುವಲ್ಲಿ ಕಾಂಗ್ರೆಸ್ ಸರಕಾರವು ಸಂಪೂರ್ಣ ವಿಫಲವಾಗಿದೆ. ರಾಜ್ಯದ ಜನರನ್ನು ಬಲಿ ಕೊಡಲು ಈ ಸರಕಾರ ವಿಫಲವಾಗಿದೆ. ತಮಿಳುನಾಡಿನಲ್ಲಿ ಉತ್ತಮ ಮಳೆ ಆಗಿದ್ದರೂ, ಇಲ್ಲಿ ನೀರಿಲ್ಲದಿದ್ದರೂ ತಮಿಳುನಾಡಿಗೆ ನೀರು ಬಿಡಲಾಗುತ್ತಿದೆ ಎಂದು ಸಂಸದ ಪಿ.ಸಿ.ಮೋಹನ್ ಅವರು ಟೀಕಿಸಿದರು.
ಒಂದೆಡೆ ಖಾಲಿ ಕೊಡ ಹಿಡಿಯುವ ಸ್ಥಿತಿ ಇದೆ. ಇನ್ನೊಂದೆಡೆ ಬ್ರ್ಯಾಂಡ್ ಬೆಂಗಳೂರು ಎಂದು ತಿಳಿಸಿದರೆ ಹೇಗೆ ಎಂದು ಸಂಸತ್ ಸದಸ್ಯರು ಪ್ರಶ್ನಿಸಿದ್ದಾರೆ. ಅಲ್ಲದೆ ಕಾಂಗ್ರೆಸ್ ನಡತೆ ಖಂಡನೀಯ ಎಂದು ತಿಳಿಸಿದರು.
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಮಾಜಿ ಸಚಿವರು, ಶಾಸಕರು, ವಿಧಾನಪರಿಷತ್ ಸದಸ್ಯರು, ಬಿಜೆಪಿಯ 3 ಮಹಾನಗರ ಜಿಲ್ಲೆಗಳ ಅಧ್ಯಕ್ಷರು, ನಗರಪಾಲಿಕೆ ಮಾಜಿ ಸದಸ್ಯರು ಸೇರಿದಂತೆ ಬಿಜೆಪಿಯ ಹಿರಿಯ ಮುಖಂಡರು ಈ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.