ಬೆಂಗಳೂರು, ಅ.19 www.bengaluruwire.com : ಆಯುಧ ಪೂಜೆ ಸಂದರ್ಭದಲ್ಲಿ ವಿಧಾನಸೌಧ, ವಿಕಾಸಸೌಧದಲ್ಲಿ ಅರಿಶಿನ-ಕುಂಕುಮ ಸೇರಿದಂತೆ ಯಾವುದೇ ರಾಸಾಯನಿಕಯುಕ್ತ ಬಣ್ಣಗಳನ್ನು ಬಳಸಬಾರದು ಎಂದು ಸರ್ಕಾರದ ಆದೇಶ ಸಾಕಷ್ಟು ವಿವಾದ ಹಾಗೂ ಚರ್ಚೆಗೆ ಕಾರಣವಾಗಿತ್ತು. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ (ಹಿಂದೆ ಟ್ವಿಟ್ಟರ್ ಎಂದು ಕರೆಯಲಾಗುತ್ತಿತ್ತು) ನಲ್ಲಿ ಪ್ರಕಟ ಮಾಡಿರುವ ಅವರು, ಆಯುಧಪೂಜೆ ಸಂದರ್ಭದಲ್ಲಿ ವಿಧಾನಸೌಧ, ವಿಕಾಸಸೌಧ ಹಾಗೂ ಬಹುಮಹಡಿ ಕಟ್ಟಡಗಳಲ್ಲಿ ಅರಿಶಿನ-ಕುಂಕುಮ ಸೇರಿದಂತೆ ಯಾವುದೇ ರಾಸಾಯನಿಕಯುಕ್ತ ಬಣ್ಣಗಳನ್ನು ಕಚೇರಿಗಳ ಒಳಗೆ ಅಥವಾ ಕಾರಿಡಾರ್‌ಗಳಲ್ಲಿ ಬಳಸಬಾರದು ಎಂದು ಹೊರಡಿಸಿರುವ ಆದೇಶ ಇದು ಹೊಸತೇನಲ್ಲ.
ಇವುಗಳು ಪಾರಂಪರಿಕ ಕಟ್ಟಡಗಳಾಗಿರುವುದರಿಂದ ರಾಸಾಯನಿಕಯುಕ್ತ ಬಣ್ಣಗಳು ನೆಲಹಾಸಿನ ಮೇಲೆ ಬಿದ್ದು, ಅವುಗಳ ಕಲೆ ಶಾಶ್ವತವಾಗಿ ಅಥವಾ ಬಹುಕಾಲ ಉಳಿಯುವುದರಿಂದ ಇದರಿಂದಾಗುವ ಹಾನಿ ತಪ್ಪಿಸಲು ಹಿಂದಿನ ಸರ್ಕಾರಗಳು ಪಾಲಿಸಿಕೊಂಡು ಬಂದಿದ್ದ ಸಂಪ್ರದಾಯವನ್ನೇ ನಾವು ಪಾಲಿಸಿದ್ದೇವೆ ಎಂದು ವಿವರಿಸಿದ್ದಾರೆ.
ಈ ಬಗ್ಗೆ ಸರ್ಕಾರದ ವಿರುದ್ಧ ನಡೆಸಲಾಗುತ್ತಿರುವ ಅಪಪ್ರಚಾರಕ್ಕೆ ಕಿವಿಗೊಡಬಾರದು ಎಂದು ಜನತೆಯಲ್ಲಿ ಮನವಿ ಮಾಡುತ್ತೇನೆ ಎಂದು ಹೇಳಿದ್ದಾರೆ. ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಇದೇ ರೀತಿಯ ಆದೇಶ ಹೊರಡಿಸಿದ್ದ ಪ್ರತಿಯನ್ನು ಸಹ ಹಂಚಿಕೊಂಡಿದ್ದಾರೆ.
ವಿಧಾನಸೌಧ, ವಿಕಾಸಸೌಧ ಹಾಗೂ ಸರ್ಕಾರದ ಬಹುಮಹಡಿ ಕಟ್ಟಡಗಳಲ್ಲಿ ಅರಿಶಿನ-ಕುಂಕುಮ ಸೇರಿದಂತೆ ಯಾವುದೇ ರಾಸಾಯನಿಕಯುಕ್ತ ಬಣ್ಣಗಳನ್ನು ಬಳಸಬಾರದು. ಈ ಹಿಂದೆ ಈ ರೀತಿಯ ಆದೇಶ ನೀಡಿದ್ದರೂ ಸರಿಯಾಗಿ ಪಾಲನೆಯಾಗಿಲ್ಲ. ಹಾಗಾಗಿ, ಈ ಬಾರಿ ಖಡ್ಡಾಯವಾಗಿ ಈ ಆದೇಶ ಪಾಲಿಸುವಂತೆ ಎಲ್ಲಾ ಸಚಿವರ ಆಪ್ತ ಕಾರ್ಯದರ್ಶಿಗಳಿಗೆ ಸರ್ಕಾರ ಸೂಚಿಸಿದೆ.