ಬೆಂಗಳೂರು, ನ.4 www.bengaluruwire.com : ಬೆಂಗಳೂರು ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಭಾಗವಹಿಸಬೇಕಾದರೆ ಹೊಸದಾಗಿ ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗಬೇಕಿದ್ದು, ಈ ನಿಟ್ಟಿನಲ್ಲಿ ಪದವೀಧರರೆಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ನೋಂದಣಿಯಾಗಬೇಕೆಂದು ಬೆಂಗಳೂರು ನಗರ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ಕರೆ ನೀಡಿದ್ದಾರೆ.
ಬೆಂಗಳೂರು ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರ ಚುನಾವಣೆ-2024ಕ್ಕೆ ಸಂಬಂಧಿಸಿದಂತೆ ಸಾಮೂಹಿಕ ನೊಂದಣಿ ವಿಶೇಷ ಅಭಿಯಾನಕ್ಕೆ ನಗರದ ಪ್ರೆಸ್ ಕ್ಲಬ್ ನಲ್ಲಿ ಚಾಲನೆ ನೀಡಿದ ಬಳಿಕ ಮಾತನಾಡಿದ ಅವರು, ಎಂಎಲ್‌ಸಿ ಚುನಾವಣೆ ಪ್ರಮುಖ ಚುನಾವಣೆಯಾಗಿದ್ದು, ಎಲ್ಲಾ ಪದವೀಧರರು ನಮೂನೆ-18 ಹಾಗೂ ಶಿಕ್ಷಕರ ಕ್ಷೇತ್ರಕ್ಕಾಗಿ ನಮೂನೆ-19 ಅನ್ನು ಭರ್ತಿ ಮಾಡಿ ಸಂಬಂಧಪಟ್ಟ ಅಧಿಕಾರಿಗಳಿಗೆ ನೀಡಲು ತಿಳಿಸಿದರು.
ಪದವೀಧರ ಪಡೆದಿರುವವರೆಲ್ಲರೂ ಮತದಾರರ ಪಟ್ಟಿಯಲ್ಲಿ ನೋಂದಣಿಯಾಗಬೇಕು. ಕರಡು ಪಟ್ಟಿ ಬಿಡುಗಡೆಯಾದ ಬಳಿಕ ಮತ್ತೊಮ್ಮೆಯೂ ಹೆಸರನ್ನು ಸೇರ್ಪಡೆಯಾಗಲು ಅವಕಾಶವಿರುತ್ತದೆ. ಎಲ್ಲರೂ ಸ್ವಯಂ ಪ್ರೇರಣೆಯಿಂದ ಮುಂದೆ ಬಂದು ನೋಂದಣಿ ಮಾಡಿಕೊಳ್ಳಬೇಕು. ನಗರದಲ್ಲಿ ಪದವೀದರ ಕ್ಷೇತ್ರಕ್ಕೆ ಇದುವರೆಗೆ 15,000 ಅರ್ಜಿಗಳನ್ನು ನೋಂದಣಿ ಮಾಡಿಕೊಳ್ಳಲಾಗಿದ್ದು, ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಪದವೀಧರರು ನೋಂದಣಿ ಮಾಡಿಕೊಳ್ಳಲು ಮನವಿ ಮಾಡಿದರು.
ನವೆಂಬರ್ 2020ಕ್ಕಿಂತ ಮೊದಲು ಭಾರತದ ಯಾವುದೇ ಅಂಗೀಕೃತ ವಿಶ್ವವಿದ್ಯಾಲಯದಲ್ಲಿ ಯಾವುದೇ ವಿಷಯದಲ್ಲಿ ಪದವಿ ಪಡೆದಿರುವವರು ಪದವಿಯ ಅಂಕಪಟ್ಟಿಗಳ ಮೂಲ ಪ್ರತಿ ಮತ್ತು ಜೆರಾಕ್ಸ್ ಪ್ರತಿ ಮತ್ತು ಮತದಾರರ ಗುರುತಿನ ಚೀಟಿ ಅಥವಾ ಆಧಾರ್ ಕಾರ್ಡ್ ನ ಮೂಲ ಮತ್ತು ಜೆರಾಕ್ಸ್ ಪ್ರತಿ, 2 ಪಾಸ್ ಪೋರ್ಟ್ ಅಳತೆಯ ಫೋಟೋ ನೀಡಬೇಕು. ನಮೂನೆ 18ನ್ನು ಸ್ಥಳದಲ್ಲಿಯೇ ನೀಡಲಾಗುವುದು ಹಾಗೂ ಪದವಿ ಪ್ರಮಾಣ ಪತ್ರದ ಧೃಡಿಕರಣಕ್ಕೆ ಸ್ಥಳದಲ್ಲಿಯೇ ಗೆಜೆಟೆಡ್ ಅಧಿಕಾರಿಗಳು ಹಾಜರಿದ್ದು ಧೃಡಿಕರಿಸಲಿದ್ದಾರೆ ಮತ್ತು ಭರ್ತಿ ಮಾಡಿದ ನಮೂನೆ 18 ನ್ನು ಸ್ವೀಕರಿಸಲಾಗುವುದು ಎಂದರು.
ಚುನಾವಣಾ ವಿಭಾಗದ ವಿಶೇಷ ಆಯುಕ್ತರಾದ ಆರ್. ರಾಮಚಂದ್ರನ್ ರವರು ಮಾತನಾಡಿ, ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಬೆಂಗಳೂರು ಶಿಕ್ಷಕರ ಕ್ಷೇತ್ರ ಹಾಗೂ ಪದವೀಧರರ ಚುನಾವಣೆಗೆ ಸಂಬಂಧಿಸಿದಂತೆ ಬೆಂಗಳೂರು ಜಿಲ್ಲಾ ಚುನಾವಣಾಧಿಕಾರಿಗಳ ವ್ಯಾಪ್ತಿಯಲ್ಲಿ ಪದವೀಧರರ ಕ್ಷೇತ್ರ ಚುನಾವಣೆಗೆ ಸಂಬಂಧಿಸಿದಂತೆ ನೂತನವಾಗಿ(De-Novo) ಮತದಾರ ಪಟ್ಟಿಯನ್ನು ಸಿದ್ದಪಡಿಸಲಾಗುತ್ತದೆ ಎಂದು ತಿಳಿಸಿದರು.
ಎಡಿಇಒ ಕೇಂದ್ರ, ಸಹಾಯಕ ಚುನಾವಣಾ ನೋಂದಣಿ ಅಧಿಕಾರಿಯಾದ ಡಾ.ಕೆ.ಹರೀಶ್ ಕುಮಾರ್ ಅವರು ಮಾತನಾಡಿ, ಪದವೀಧರರ ಮತದಾರರ ಪಟ್ಟಿಯಲ್ಲಿ ನೋಂದಣಿ ಮಾಡಿಕೊಳ್ಳಲು ಎಲ್ಲಾ ಪದವೀಧರರು ಮುಂದೆ ಬರಬೇಕು. ವಿಶೇಷವಾಗಿ ಪದವೀಧರರ ಸಂಖ್ಯೆ ಸಾಕಷ್ಟಿದ್ದರೂ ನೋಂದಣಿಯಾಗುವವರ ಸಂಖ್ಯೆ ಕಡಿಮೆಯಿರುವ ಕಾರಣ ಪಾಲಿಕೆ ವತಿಯಿಂದ ವಿಶೇಷ ಅಭಿಯಾನವನ್ನು ಹಮ್ಮಿಕೊಂಡು ಸ್ಥಳದಲ್ಲಿಯೇ ಸೂಕ್ತ ದಾಖಲೆಗಳೊಂದಿಗೆ ಭರ್ತಿ ಮಾಡಿದ ಅರ್ಜಿಗಳನ್ನು ಪಡೆಯಲಾಗುತ್ತಿದೆ ಎಂದು ಹೇಳಿದರು.
ಬೆಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷರಾದ ಶ್ರೀಧರ್ ಅವರು ಮಾತನಾಡಿ, ಬೆಂಗಳೂರು ಪದವೀಧರ ಕ್ಷೇತ್ರದ ಚುನಾವಣೆಗಾಗಿ ಪಾಲಿಕೆ ಹಾಗೂ ಪ್ರೆಸ್ ಕ್ಲಬ್ ಸಹಭಾಗಿತ್ವದಲ್ಲಿ ವಿಶೇಷ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದ್ದು, ಎಲ್ಲಾ ಪದವಿಧರರು ಇದರ ಸದುಪಯೋಗವನ್ನು ಪಡೆದುಕೊಳ್ಳಲು ತಿಳಿಸಿದರು.
ಈ ವೇಳೆ ಚುನಾವಣಾ ವಿಭಾಗದ ಸಹಾಯಕ ಆಯುಕ್ತರಾದ ಅಜಯ್, ಸ್ವೀಪ್ ನೋಡಲ್ ಅಧಿಕಾರಿಯಾದ ಪ್ರತಿಭಾ, ಗೆಜೆಟೆಡ್ ಅಧಿಕಾರಿಗಳು, ನೊಂದಣಾಧಿಕಾರಿಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.