ಹುಬ್ಬಳ್ಳಿ, ಫೆ19 www.bengaluruwire.com : ಸರ್ಕಾರಿ ಶಾಲೆ, ಹಾಸ್ಟೆಲ್ ಗಳಲ್ಲಿ “ಜ್ಞಾನ ದೆಗುಲವಿದು ಧೈರ್ಯವಾಗಿ ಪ್ರಸ್ನಿಸಿ” ಎಂಬುದನ್ನು ಬರೆಸುವ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮುಟ್ಟಾಳತನವನ್ನು ತೋರ್ಪಡಿಸಿದೆ ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ ಜೋಶಿ ವಾಗ್ದಾಳಿ ನಡೆಸಿದ್ದಾರೆ.
ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿ, “ಜ್ಞಾನ ದೇಗುಲವಿದು ಕೈ ಮುಗಿದು ಒಳಗೆ ಬನ್ನಿ” ಎಂಬ ಘೋಷವಾಕ್ಯವನ್ನು “ಜ್ಞಾನ ದೇಗುಲವಿದು ಧೈರ್ಯವಾಗಿ ಪ್ರಶ್ನಿಸಿ” ಎಂದು ತಿದ್ದುಪಡಿ ಮಾಡಿರುವುದು ಕಾಂಗ್ರೆಸ್ ನ ತುಷ್ಟೀಕರಣದ ಪರಮಾವಧಿ ಎಂದು ಕಿಡಿ ಕಾರಿದರು.
ಜ್ಞಾನ ದೇಗುಲವಿದು ಕೈ ಮುಗಿದು ಒಳಗೆ ಬನ್ನಿ ಎಂಬುದು ರಾಷ್ಟ್ರಕವಿ ಕುವೆಂಪು ಅವರ ಘೋಷವಾಕ್ಯ. ಇದನ್ನು ತಿದ್ದುಪಡಿ ಮಾಡುವ ಮೂಲಕ ಕುವೆಂಪು ಅವರಿಗೂ ಈ ಸರ್ಕಾರ ಅವಮಾನ ಮಾಡಿದೆ. ಈ ಸರ್ಕಾರ, ಕುವೆಂಪು ಅವರ ಘೋಷ ವಾಕ್ಯವನ್ನೇ ಬದಲಾಯಿಸಿದೆ. ಸರ್ಕಾರ ಮತ್ತು ಕಾಂಗ್ರೆಸ್ ಪಕ್ಷದ ದೃಷ್ಟಿಯಲ್ಲಿ ಕುವೆಂಪು ಜಾತ್ಯಾತೀತರಲ್ಲವೇ? ಎಂದು ಪ್ರಶ್ನಿಸಿದ್ದಾರೆ.
“ಹಿಂದೂ ವಿರೋಧಿ ನಡೆ” :
“ಜ್ಞಾನ ದೇಗುಲವಿದು ಕೈ ಮುಗಿದು ಒಳಗೆ ಬನ್ನಿ ಎಂದಿರುವುದರಲ್ಲಿ ತಪ್ಪೇನಿದೆ?” ಎಂದು ಪ್ರಶ್ನಿಸಿರುವ ಜೋಶಿ ಅವರು, “ಇದು ಕಾಂಗ್ರೆಸ್ ಸರ್ಕಾರದ ಹಿಂದೂ ವಿರೋಧಿ ನಡೆಯನ್ನು ಪ್ರತಿಬಿಂಬಿಸುತ್ತದೆ” ಎಂದು ಹೇಳಿದರು.
ಕಾಂಗ್ರೆಸ್ ಸರ್ಕಾರದ ತುಷ್ಟೀಕರಣದ ಪರಾಕಾಷ್ಠೆ :
ರಾಜ್ಯ ಕಾಂಗ್ರೆಸ್ ಸರ್ಕಾರ ತುಷ್ಟೀಕರಣದ ಪರಾಕಾಷ್ಠೆ ತಲುಪಿದೆ. ಕಾಂಗ್ರೆಸ್ ಪಕ್ಷ ಮತ್ತು ಸರ್ಕಾರ ಎಷ್ಟರ ಮಟ್ಟಿಗೆ ಹಿಂದೂ ವಿರೋಧಿ ನಡೆ ಅನುಸರಿಸುತ್ತಿದೆ ಮತ್ತು ಯಾವ ಹಂತಕ್ಕೆ ತುಷ್ಟೀಕರಣ ಮಾಡುತ್ತಿದ್ದಾರೆ ಎಂಬುದು ಇದರಿಂದ ಸ್ಪಷ್ಟವಾಗುತ್ತದೆ ಎಂದು ಸಚಿವ ಜೋಶಿ ಕಿಡಿ ಕಾರಿದರು.
ವಿಧಾನಸಭೆ, ವಿಧಾನ ಪರಿಷತ್ ನಲ್ಲಿ ಚರ್ಚೆ :
ಜ್ಞಾನ ದೇಗುಲವಿದು ಕೈ ಮುಗಿದು ಒಳಗೆ ಬನ್ನಿ ಎಂಬುದನ್ನು ಅಳಿಸಿ ಹಾಕಿ ಜ್ಞಾನ ದೇಗುಲವಿದು ಧೈರ್ಯವಾಗಿ ಪ್ರಶ್ನಿಸಿ ಎಂದು ತಿದ್ದುಪಡಿ ಮಾಡಿರುವ ಬಗ್ಗೆ ಬಹುತೇಕ ಇಂದು ವಿಧಾನಸಭೆ ಮತ್ತು ವಿಧಾನ ಪರಿಷತ್ ಅಲ್ಲಿ ಬಿಜೆಪಿ ಚರ್ಚೆ ಮಾಡಲಿದೆ ಎಂದು ಸಚಿವ ಪ್ರಹ್ಲಾದ ಜೋಶಿ ತಿಳಿಸಿದರು.