ಬೆಂಗಳೂರು, ಫೆ.22 www.bengaluruwire.com : ರಾಜ್ಯದ 55 ಲಕ್ಷ ಸರ್ಕಾರಿ ಮತ್ತು ಅನುದಾನಿತ ಶಾಲಾ ಮಕ್ಕಳಿಗೆ ಕ್ಷೀರಭಾಗ್ಯ ಯೋಜನೆಯಡಿ ಅವರ ಆರೋಗ್ಯಕ್ಕೆ ಅನುಕೂಲವಾಗುವ ಬಹುಪೌಷ್ಠಿಕಾಂಶವುಳ್ಳ ಸಾಯಿ ಶ್ಯೂರ್ ರಾಗಿ ಮಾಲ್ಟ್ ನೀಡುವ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಚಾಲನೆ ನೀಡಿದ್ದಾರೆ.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ, ಶ್ರೀ ಸತ್ಯ ಸಾಯಿ ಅನ್ನ ಪೂರ್ಣ ಟ್ರಸ್ಟ್ ಅವರ ಸಹಯೋಗದೊಂದಿಗೆ
ಏರ್ಪಡಿಸಿದ್ದ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸೌಧದಲ್ಲ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, 55 ಲಕ್ಷ ಸರ್ಕಾರಿ ಶಾಲೆ ಮಕ್ಕಳ ಮಾನಸಿಕ ದೈಹಿಕ ಆರೋಗ್ಯಕ್ಕಾಗಿ ರಾಗಿ ಮಾಲ್ಟ್ ವಿತರಣೆ ಮಾಡಲು ಶುರು ಮಾಡಿದ್ದೇವೆ. ಉತ್ತಮ ಪೌಷ್ಠಿಕಾಂಶ ಉತ್ತಮ ಶಿಕ್ಷಣಕ್ಕೆ ರಹದಾರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.
2013 ರಲ್ಲಿ ನಮ್ಮ ಸರ್ಕಾರ ಬಂದಾಗ ನಮ್ಮಲ್ಲಿ ಹಾಲು ಉತ್ಪಾದನೆ ಹೆಚ್ಚಾಯಿತು. ಈ ಹೆಚ್ಚುವರಿ ಹಾಲಿನ ಮಾರಾಟ ಮತ್ತು ಹಾಲಿನ ಉಪ ಉತ್ಪನ್ನಗಳನ್ನು ಹೆಚ್ಚುವರಿಯಾಗಿ ಉತ್ಪಾದನೆ ಮಾಡಲು ಸಾಧ್ಯವಿರಲಿಲ್ಲ. ಹೀಗಾಗಿ ಆ ಕೂಡಲೇ ಸರ್ಕಾರಿ ಶಾಲಾ ಮಕ್ಕಳಿಗೆ ವಾರದಲ್ಲಿ ಐದು ದಿನ ಹಾಲು ಕೊಡುವ ಕ್ಷೀರಭಾಗ್ಯ ಯೋಜನೆಯನ್ನು ಆರಂಭಿಸಿದೆ. ಕೆಎಂಎಫ್ (KMF) ಮೂಲಕ ಮಕ್ಕಳಿಗೆ ಹಾಲು ಹೋಗುತ್ತದೆ. ಈ ಹಾಲಿನ ಹಣವನ್ನು ಸರ್ಕಾರ ಕೆಎಂಎಫ್ ಗೆ ನೀಡುತ್ತದೆ. ಆ ಮೂಲಕ ಕೆಎಂಎಫ್ ಗೆ ಹಾಲು ಸರಬರಾಜು ಮಾಡುವ ರೈತರಿಗೆ ನೆರವಾಗುವ ತೀರ್ಮಾನ ಮಾಡಿದೆವು. ಇದರ ಜತೆಗೆ ಕಳೆದ ಬಜೆಟ್ ನಲ್ಲಿ ಶಾಲಾ ಮಕ್ಕಳಿಗೆ ವಾರಕ್ಕೆ ಎರಡು ದಿನ ಮೊಟ್ಟೆ ಕೊಡುವ ಕಾರ್ಯಕ್ರಮ ಶುರು ಮಾಡಿದೆವು ಎಂದು ವಿವರಿಸಿದರು.
ಈಗ ಅತ್ಯಂತ ಪೌಷ್ಠಿಕವಾದ ರಾಗಿ ಮಾಲ್ಟ್ ಕೊಡುವ ಕಾರ್ಯಕ್ರಮ ಶುರುವಾಗಿದೆ. ಇದರಿಂದ ಮಕ್ಕಳ ಮಾನಸಿಕ ಮತ್ತು ದೈಹಿಕ ಆರೋಗ್ಯ ವೃದ್ಧಿಯಾಗುತ್ತದೆ. ಮಕ್ಕಳಿಗೆ ರಕ್ತಹೀನತೆ ಬರಬಾರದು. ಪೌಷ್ಠಿಕಾಂಶ ಕೊರತೆ ಆಗಬಾರದು. ಆಗ ಮಾತ್ರ ಮಕ್ಕಳು ಮಾನಸಿಕವಾಗಿ ಸದೃಢವಾಗಿ ಓದಿನಲ್ಲಿ ಹೆಚ್ಚು ಚುರುಕಾಗುತ್ತಾರೆ. ಗುಣಮಟ್ಟದ ಶಿಕ್ಷಣ ಪಡೆದುಕೊಳ್ಳುತ್ತಾರೆ. ಶ್ರೀಮಂತರ ಮಕ್ಕಳ ರೀತಿ ಬಡವರು, ಶ್ರಮಿಕರು, ದಲಿತ, ಶೂದ್ರರ ಮಕ್ಕಳಿಗೂ ಉತ್ತಮ ಶಿಕ್ಷಣ ದೊರೆಯಬೇಕು. ಏಕೆಂದರೆ ಮಕ್ಕಳೇ ದೇಶದ, ಸಮಾಜದ ಭವಿಷ್ಯವನ್ನು ರೂಪಿಸುತ್ತಾರೆ ಎನ್ನುತ್ತಾ ಬುದ್ದ, ಬಸವ, ಅಂಬೇಡ್ಕರ್ ಮಾತುಗಳನ್ನು ಉಲ್ಲೇಖಿಸಿದರು.
ವಾರಕ್ಕೆ ಮೂರು ದಿನ ರಾಗಿಮಾಲ್ಟ್ ಹಾಗೂ ಎರಡು ದಿನ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಹಾಲು ವಿತರಣೆಯಾಗಲಿದೆ. ಕಾರ್ಯಕ್ರಮದಲ್ಲಿ ಆಹಾರ ಮತ್ತು ನಾಗರೀಕ ಪೂರೈಕೆ ಸಚಿವ ಕೆ.ಹೆಚ್ ಮುನಿಯಪ್ಪ ನವರು ಹಾಗೂ ಸದ್ಗರು ಶ್ರೀ ಮಧುಸೂದನ ಸಾಯಿ ಸ್ವಾಮೀಜಿಯವರು, ಶಾಲಾ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ನವರು ಉಪಸ್ಥಿತರಿದ್ದರು.