ಬೆಂಗಳೂರು, ಮಾ.8 www.bengaluruwire.com : ನಗರದಲ್ಲಿ ಬೇಸಿಗೆ ಬರುವ ಮುನ್ನವೇ ನೀರಿನ ಸಮಸ್ಯೆ ಬಿಗಡಾಯಿಸುತ್ತಿದೆ. ರಾಜ್ಯ ಸರ್ಕಾರ, ಬಿಬಿಎಂಪಿ, ಬೆಂಗಳೂರು ಜಲಮಂಡಳಿ (BWSSB) ಹಾಗೂ ನಗರ ಜಿಲ್ಲಾಡಳಿತ ಸಾರ್ವಜನಿಕರಿಗೆ ದಿನನಿತ್ಯ ಕುಡಿಯುವ ನೀರು ಪೂರೈಸಲು ಹೆಣಗಾಡುತ್ತಿದೆ. ಹೀಗಾಗಿ ಕುಡಿಯುವ ನೀರಿಗೆ ಹೊರತುಪಡಿಸಿ ಇನ್ನಿತರ ಬಳಕೆಗೆ ನೀರು ಬಳಕೆ ಮಾಡದಂತೆ ಮಂಡಳಿಯು ಆದೇಶಿಸಿದೆ.
ಬೆಂಗಳೂರು ಮಹಾನಗರದಲ್ಲಿ ಖಾಯಂ ವಾಸಿಗಳು ಹಾಗೂ ಬಂದು ಹೋಗುವವರನ್ನು ಸೇರಿಸಿದರೆ ಸುಮಾರು 1.40 ಕೋಟಿ ಜನಸಂಖ್ಯೆಯಿದೆ. ಎಲ್ಲರಿಗೂ ಕುಡಿಯುವ ನೀರನ್ನು ಪೂರೈಕೆ ಮಾಡುವುದು ಅವಶ್ಯವಾಗಿರುತ್ತದೆ. ಪ್ರಸ್ತುತ ನಗರದಲ್ಲಿ ಪ್ರತಿದಿನ ಉಷ್ಣಾಂಶ ಏರುತ್ತಿದ್ದು, ಇತ್ತೀಚಿನ ದಿನಗಳಲ್ಲಿ ಮಳೆಯ ಕೊರತೆಯಿಂದ ಅಂತರ್ಜಲ ಕುಸಿದಿದ್ದು, ಬೆಂಗಳೂರು ನಗರದಲ್ಲಿ ನೀರನ್ನು ಪೋಲು ಮಾಡುವುದನ್ನು ತಡೆಗಟ್ಟಲು ಕುಡಿಯುವ ನೀರನ್ನು ಸಾರ್ವಜನಿಕರು ಮಿತವಾಗಿ ಬಳಸುವಂತೆ ಮಂಡಳಿಯು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯು ಸೂಚಿಸಿದೆ ಅಗತ್ಯಪಡಿಸಲಾಗಿದೆ.
ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಕಾಯ್ದೆ-1964ರ ಕಲಂ 33 ಮತ್ತು 34 ರ ಅನುಸಾರ ಬೆಂಗಳೂರು ನಗರದಲ್ಲಿ ಕುಡಿಯುವ ನೀರನ್ನು ವಾಹನಗಳ ಸ್ವಚ್ಚತೆಗೆ, ಕೈದೋಟಕ್ಕೆ, ಕಟ್ಟಡ ನಿರ್ಮಾಣಕ್ಕೆ, ಮನೋರಂಜನೆಗಾಗಿ ಕಾರಂಜಿಯಂತಹ ಆಕರ್ಷಕ ವ್ಯವಸ್ಥೆಗೆ, ಸಿನಿಮಾ ಮಂದಿರ ಮತ್ತು ಮಾಲುಗಳಲ್ಲಿನ ಕುಡಿಯುವ ನೀರಿನ ಹೊರತು ಇನ್ನಿತರೆ ಬಳಕೆಗೆ, ರಸ್ತೆ ನಿರ್ಮಾಣ ಮತ್ತು ಸ್ವಚ್ಚತೆಯ ಉದ್ದೇಶಗಳಿಗೆ ಬಳಸದಂತೆ ನಿಷೇಧಿಸಲಾಗಿದೆ.
ಒಂದೊಮ್ಮೆ ಈ ನಿಷೇದದ ಆದೇಶವನ್ನು ಉಲ್ಲಂಘನೆ ಮಾಡಿದಲ್ಲಿ, ಉಲ್ಲಂಘನೆ ಮಾಡುವವರ ವಿರುದ್ದ ಜಲಮಂಡಳಿಯ ಕಾಯ್ದೆ 1964 ರ ಕಲಂ 109 ರಂತೆ ರೂ. 5000 ರೂ.ಗಳ ದಂಡ ವಿಧಿಸಲಾಗುವುದು. ಉಲ್ಲಂಘನೆಯು ಮರುಕಳಿಸಿದಲ್ಲಿ ದಂಡ ಮೊತ್ತ 5000 ರೂ. ಜೊತೆಗೆ ಹೆಚ್ಚುವರಿಯಾಗಿ ಪ್ರತಿದಿನದಂತೆ 500 ರೂ. ದಂಡ ಹಾಕಲಾಗುವುದು ಎಂದು ಜಲಮಂಡಳಿ ಅಧ್ಯಕ್ಷರಾದ ರಾಮ್ ಪ್ರಸಾತ್ ಮನೋಹರ್ ಆದೇಶದಲ್ಲಿ ತಿಳಿಸಿದ್ದಾರೆ.
ಸಾರ್ವಜನಿಕರು ಮೇಲ್ಕಂಡ ನಿಷೇಧಗಳನ್ನು ಯಾರಾದರು ಉಲ್ಲಂಘನೆ ಮಾಡವುದು ಕಂಡುಬಂದಲ್ಲಿ ಕೂಡಲೇ ಮಂಡಳಿಯ ಕಾಲ್ ಸೆಂಟರ್ ಸಂಖ್ಯೆ : 1916 ಗೆ ಮಾಹಿತಿ ನೀಡಬಹುದು.