ಬೆಂಗಳೂರು, ಏ.21 www.bengaluruwire.com : ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರವನ್ನು ಕೇಂದ್ರ ಚುನಾವಣಾ ಆಯೋಗ ಅತಿ ಸೂಕ್ಷ ಲೋಕಸಭಾ ಕ್ಷೇತ್ರವನ್ನಾಗಿ ಪರಿಗಣಿಸುವ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಚುನಾವಣಾಧಿಕಾರಿಗಳಿಗೆ ಸೂಚಿಸಿದೆ.
ರಾಜ್ಯದ ಆಡಳಿತರೂಢ ಕಾಂಗ್ರೆಸ್ ಪಕ್ಷದ ಹಾಲಿ ಸಂಸದ ಡಿ.ಕೆ.ಸುರೇಶ್ ಹಾಗೂ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿ ಡಾ.ಸಿ.ಎನ್.ಮಂಜುನಾಥ್ ಸೇರಿದಂತೆ ಘಟಾನುಘಟಿ ಅಭ್ಯರ್ಥಿಗಳು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿದ್ದಾರೆ.
ಬಿಜೆಪಿಯ ಅಭ್ಯರ್ಥಿ ಡಾ.ಸಿ.ಎನ್.ಮಂಜುನಾಥ್ ಅವರ ಚುನಾವಣಾ ಏಜೆಂಟ್ ಆಗಿರುವ ಪದ್ಮನಾಭ ಜಿ.ವಿ. ಅವರು, ಬೆಂಗಳೂರು ಗ್ರಾಮಾಂತರ-23 ಲೋಕಸಭಾ ಕ್ಷೇತ್ರದಲ್ಲಿ ಪ್ರಬಲ ಅಭ್ಯರ್ಥಿಗಳು ಸ್ಪರ್ಧಿಸಿದ್ದು, ಆಡಳಿತ ಯಂತ್ರವನ್ನು ದುರುಪಯೋಗ ಪಡೆಸಿಕೊಳ್ಳುವ ಸಾಧ್ಯತೆಗಳಿದ್ದು, ಈ ಕಾರಣಗಳಿಂದ ಈ ಕ್ಷೇತ್ರಕ್ಕೆ ಹೆಚ್ಚುವರಿ ಪೊಲೀಸ್ ಪಡೆಯನ್ನು ಹಾಗೂ ಅರೆ ಸೇನಾಪಡೆಯನ್ನು ನಿಯೋಜಿಸಿ ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಸಲು ನೆರವಾಗುವಂತೆ ಚುನಾವಣಾ ಆಯೋಗಕ್ಕೆ ಏ.16ರಂದು ಇಮೇಲ್ ಮುಖಾಂತರ ದೂರು ನೀಡಿದ್ದರು. ಇದಕ್ಕೂ ಮುನ್ನ ಏ.10ರಂದು ಬಿಜೆಪಿ ಪಕ್ಷದ ವತಿಯಿಂದಲೂ ಕೇಂದ್ರ ಚುನಾವಣಾ ಆಯೋಗಕ್ಕೆ ಪತ್ರ ಬರೆದು ಇದೇ ರೀತಿ ಮನವಿ ಮಾಡಿತ್ತು.
ಈ ಹಿನ್ನಲೆಯಲ್ಲಿ ಕೇಂದ್ರ ಚುನಾವಣಾ ಆಯೋಗವು ಬೆಂಗಳೂರು ಗ್ರಾಮಾಂತರ ಕ್ಷೇತ್ರವನ್ನು ಅತಿ ಸೂಕ್ಷ ಲೋಕಸಭಾ ಕ್ಷೇತ್ರವನ್ನಾಗಿ ಪರಿಗಣಿಸಿ, ಕ್ಷೇತ್ರದಲ್ಲಿ ಅರಸೇನಾ ಪಡೆಯನ್ನು ನಿಯೋಜಿಸಲು ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗಳ ಕಚೇರಿಯಿಂದ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಚುನಾವಣಾಧಿಕಾರಿಗೆ ನಿಯಮಾನುಸಾರ ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ಸೂಕ್ತ ಸೂಚನೆ ನೀಡಿದೆ.
ಈಗಾಗಲೇ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ವ್ಯಾಪ್ತಿಯಲ್ಲಿ ಕಾಂಗ್ರೆಸ್, ಬಿಜೆಪಿಯ ಎರಡೂ ಪಕ್ಷಗಳ ಅಭ್ಯರ್ಥಿಗಳು ಭರ್ಜರಿ ಚುನಾವಣಾ ಪ್ರಚಾರ ಕಾರ್ಯದಲ್ಲಿ ತೊಡಗಿದ್ದು, ಪ್ರಬಲ ಪೈಪೋಟಿ ಕಂಡುಬರುತ್ತಿದೆ. ಈ ಮಧ್ಯೆ ಇಡೀ ಕ್ಷೇತ್ರವನ್ನು ಅತಿ ಸೂಕ್ಷ ಲೋಕಸಭಾ ಕ್ಷೇತ್ರವನ್ನಾಗಿ ಚುನಾವಣಾ ಆಯೋಗ ಪರಿಗಣಿಸಿದ್ದು, ಹಣಬಲ, ತೋಳ್ಬಲದಿಂದ ಸ್ಥಾನಗಿಟ್ಟಿಸುವವರ ಪಾಲಿಗೆ ನುಂಗಲಾರದ ತುತ್ತಾಗಿದೆ. ಇದೇ ಏ.26ರಂದು ರಾಜ್ಯದಲ್ಲಿ ಮೊದಲ ಹಂತದ ಮತದಾನ ನಡೆಯಲಿದೆ.