ಬೆಂಗಳೂರು, ಜೂ.10 www.bengaluruwire.com : ಬೆಂಗಳೂರಿಗರಿಗೆ ಖುಷಿಯ ಸುದ್ದಿ. ಇಷ್ಟು ದಿನಗಳ ಕಾಲ ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ ಸಿಂಹ, ಹುಲಿ ಸಫಾರಿ ಮಾತ್ರ ಲಭ್ಯವಿತ್ತು. ಆದರೀಗ ಈ ತಿಂಗಳ ಅಂತ್ಯದೊಳಗೆ ಚಿರತೆ ಸಫಾರಿ ಆರಂಭಿಸಲಿದ್ದೇವೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.
ವಿಕಾಸ ಸೌಧದ ಸಚಿವರ ಕಾರ್ಯಾಲಯದಲ್ಲಿ ಸೋಮವಾರ ನಡೆದ ಮೃಗಾಲಯ ಪ್ರಾಧಿಕಾರದ 156ನೇ ಆಡಳಿತ ಮಂಡಳಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ರಾಜ್ಯದಲ್ಲಿರುವ ವಿವಿಧ ಮೃಗಾಲಯಗಳಿಗೆ ಪ್ರವಾಸಿಗರನ್ನು ಹೆಚ್ಚು ಸೆಳೆಯಲು ಮತ್ತು ಆದಾಯ ಹೆಚ್ಚಿಸಲು ಕೈಗೊಳ್ಳ ಬೇಕಾದ ಕ್ರಮಗಳ ಬಗ್ಗೆ ಪರಾಮರ್ಶಿಸಿದರು. ಈ ಸಂದರ್ಭದಲ್ಲಿ ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಸಾರ್ವಜನಿಕರಿಗಾಗಿ ಚಿರತೆ ಸಫಾರಿಯನ್ನು ಈ ಮಾಸಾಂತ್ಯದೊಳಗೆ ಆರಂಭಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಪ್ರಸ್ತುತ ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ 12 ಚಿರತೆಗಳಿದ್ದು, ಸಫಾರಿ ಆರಂಭಿಸುವ ಮುನ್ನ ಕಬ್ಬಿಣದ ಆಳೆತ್ತರದ ಜಾಲರಿ, ಗೇಟ್, ಸಫಾರಿಗೆ ಬರುವವರ ಸುರಕ್ಷತೆ, ವಾಹನ, ಮೂಲಭೂತ ಸೌಕರ್ಯಗಳನ್ನು ಕೈಗೊಳ್ಳುವ ಕೆಲಸ ಅಂತಿಮ ಹಂತಕ್ಕೆ ಬಂದಿದೆ.
ಬನ್ನೇರುಘಟ್ಟ ರಾಷ್ಟ್ರೀಯ ಜೈವಿಕ ಉದ್ಯಾನವನದಲ್ಲಿ ಪಿಪಿಪಿ ಮಾದರಿಯಲ್ಲಿ ಸಿಹಿ ನೀರು ಮತ್ತು ಉಪ್ಪು ನೀರಿನ ಮತ್ಸ್ಯಾಗಾರಗಳನ್ನು ನಿರ್ಮಿಸಲು ಈಗಾಗಲೇ ನಡೆದಿರುವ ಪರಿಕಲ್ಪನೆ ಅಧ್ಯಯನ ವರದಿ ಮತ್ತು ಕಾರ್ಯಸಾಧ್ಯತೆ ವರದಿ ಪರಿಶೀಲಿಸಿ ಜಾಗತಿಕ ಮಾನದಂಡಗಳ ರೀತ್ಯ ಮತ್ಸ್ಯಾಗಾರ ನಿರ್ಮಾಣಕ್ಕೆ ಸಚಿವರು ಅನುಮೋದನೆ ನೀಡಿದರು. ಮೃಗಾಲಯಗಳಲ್ಲಿ ವನ್ಯಜೀವಿ ಪಶುವೈದ್ಯರ ಕೊರತೆ ಆಗದಂತೆ ಮತ್ತು ಮೃಗಾಲಯದಲ್ಲಿರುವ ವನ್ಯಜೀವಿಗಳು ಸೋಂಕು ಇತ್ಯಾದಿಯಿಂದ ಸಾವಿಗೀಡಾಗದಂತೆ ಕ್ರಮ ವಹಿಸಲು ಪಶುವೈದ್ಯರ ನೇಮಕಾತಿಯ ಬಗ್ಗೆ ಚರ್ಚಿಸಿ, ವೈದ್ಯರ ನೇಮಕಾತಿಗೆ ಅನುಮೋದನೆ ನೀಡಲಾಯಿತು.
ಮೈಸೂರು ಶ್ರೀ ಚಾಮರಾಜೇಂದ್ರ ಮಲಯ ಹಾಗೂ ಕಾರಂಜಿ ಕೆರೆ ಮಧ್ಯ ಭಾಗದಲ್ಲಿ ಸಾರ್ವಜನಿಕ, ಖಾಸಗಿ ಪಾಲುದಾರಿಕೆ (ಪಿಪಿಪಿ) ಮಾದರಿಯಲ್ಲಿ ಅಕ್ವೇರಿಯಂ (ಮತ್ಸ್ಯಾಗಾರ) ನಿರ್ಮಿಸಲು, ವಿಸ್ತೃತ ಯೋಜನಾ ವರದಿ (ಡಿಪಿಆರ್) ಸಿದ್ಧಪಡಿಸಲು ಸಮಾಲೋಚನಾ ಸಂಸ್ಥೆ ಆಯ್ಕೆ ಮಾಡಲು 15 ದಿನಗಳ ಒಳಗಾಗಿ ಪ್ರಸ್ತಾವನೆ ಮಂಡಿಸಲು ಸೂಚಿಸಲಾಯಿತು. ಮೈಸೂರು ಮೃಗಾಲಯ ಮತ್ತು ಕಾರಂಜಿ ಕೆರೆ ಪ್ರಕೃತಿ ಉದ್ಯಾನದಲ್ಲಿ ಕ್ಯಾಮೆರಾ ಕಾಂಬೋ ಟಿಕೆಟ್ ಪರಿಚಯಿಸಿ, ಸ್ಥಿರ ಕ್ಯಾಮರಾಗೆ 150 ರೂ. ಮತ್ತು ವಿಡಿಯೋ ಕ್ಯಾಮರಾಗೆ 300 ರೂ. ದರ ವಿಧಿಸಲು ಅನುಮತಿ ನೀಡಲಾಯಿತು.
ಅದೇ ರೀತಿ ಚಿತ್ರದುರ್ಗದ ಆಡು ಮಲ್ಲೇಶ್ವರ ಕಿರು ಮೃಗಾಲಯಕ್ಕೆ ಸ್ಥಳೀಯ ಪಶುವೈದ್ಯಾಧಿಕಾರಿಗಳ ಸೇವೆ ಪಡೆಯಲು ಘಟನೋತ್ತರ ಅನುಮೋದನೆ ನೀಡಲಾಯಿತು. ಸಭೆಯಲ್ಲಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ವನ್ಯಜೀವಿ) ಸುಭಾಷ್ ಮಾಲ್ಕಡೆ, ಬನ್ನೇರುಘಟ್ಟ ಜೈವಿಕ ಉದ್ಯಾನವನದ ಕಾರ್ಯನಿರ್ವಾಹಕ ನಿರ್ದೇಶಕ ಎ.ವಿ.ಸೂರ್ಯಸೇನ್, ಮೈಸೂರು ಮೃಗಾಲಯ ಪ್ರಾಧಿಕಾರದ ಹಿರಿಯ ಅಧಿಕಾರಿಗಳು ಸೇರಿದಂತೆ ಮತ್ತಿತರರು ಪಾಲ್ಗೊಂಡಿದ್ದರು.
ಪ್ರಾಣಿಗಳ ಆರೈಕೆ ಮತ್ತು ನಿರ್ವಹಣೆಗೆ ಡಿಪ್ಲೊಮೊ ಕೋರ್ಸ್ :
ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ ಪ್ರಾಣಿಗಳ ಆರೈಕೆ ಮತ್ತು ನಿರ್ವಹಣೆ (Animal Care and Management)ಯ 10 ತಿಂಗಳುಗಳ ಡಿಪ್ಲೊಮಾ ಕೋರ್ಸ್ ಆರಂಭಿಸಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ತಾತ್ವಿಕ ಅನುಮೋದನೆ ನೀಡಿದ್ದಾರೆ. ಮೃಗಾಲಯಗಳಲ್ಲಿ ವನ್ಯಜೀವಿಗಳ ಆರೈಕೆಗೆ ನುರಿತ ಸಿಬ್ಬಂದಿಯ ಅಗತ್ಯವಿದ್ದು, ಬೆಂಗಳೂರು ವಿಶ್ವವಿದ್ಯಾಲಯದ ಮಾನ್ಯತೆಯೊಂದಿಗೆ ಬೆಂಗಳೂರಿನ ಲೈಫ್ ಸೈನ್ಸ್ ಎಡ್ಯುಕೇಷನ್ ಟ್ರಸ್ಟ್ ಸಹಯೋಗದಲ್ಲಿ ಈ ಕೋರ್ಸ್ ಆರಂಭಿಸಲು ತಾತ್ವಿಕ ಅನುಮೋದನೆ ನೀಡಿದ್ದಾರೆ.
ಈ ಡಿಪ್ಲೊಮಾ ಪದವಿ ಪಡೆದವರಿಗೆ ಉದ್ಯೋಗಾವಕಾಶಗಳು ಲಭಿಸುವಂತಿರಬೇಕು. ದೀರ್ಘಕಾಲ ಈ ಕೋರ್ಸ್ ಪ್ರಾಮುಖ್ಯತೆ ಪಡೆಯುವಂತಿರಬೇಕು, ಈ ನಿಟ್ಟಿನಲ್ಲಿ ಪಠ್ಯಕ್ರಮ ಮತ್ತು ಪ್ರಾಯೋಗಿಕ ತರಬೇತಿ ಕಾರ್ಯಕ್ರಮ ರೂಪಿಸುವ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ ಸಾಧಕ ಬಾಧಕ ಚರ್ಚಿಸಿ ಮುಂದಿನ ಸಭೆಯಲ್ಲಿ ಪ್ರಸ್ತಾವನೆ ಮಂಡಿಸಲು ಸೂಚಿಸಿದರು. ಪ್ರಾಣಿಗಳ ಆರೈಕೆ ಹಾಗೂ ನಿರ್ವಹಣೆ ಮಾಡಲು ಆಸಕ್ತ ವಿದ್ಯಾರ್ಥಿಗಳಿಗೆ ವೈಜ್ಞಾನಿಕವಾಗಿ ವನ್ಯಜೀವಿ ಮತ್ತು ಸಾಕುಪ್ರಾಣಿಗಳ ಸಂರಕ್ಷಣೆ, ನಿರ್ವಹಣೆ, ಆರೈಕೆ ಕುರಿತಂತೆ ಅಗತ್ಯ ಜ್ಞಾನ ಮತ್ತು ಕೌಶಲ ನೀಡುವ ಈ ಡಿಪ್ಲೊಮಾ ಕೋರ್ಸ್ ಪಡೆದವರು ಮೃಗಾಲಯಗಳಲ್ಲಿ, ಪುನರ್ವಸತಿ ಕೇಂದ್ರಗಳಲ್ಲಿ ಪ್ರಾಣಿಪಾಲಕರಾಗಿ ಕೆಲಸ ನಿರ್ವಹಿಸಬಹುದು. ಅದೇ ರೀತಿ ಖಾಸಗಿಯಾಗಿಯೂ ಸಾಕು ಪ್ರಾಣಿಗಳ ಆರೈಕೆ ಕೇಂದ್ರಗಳನ್ನು ನಡೆಸಬಹುದು. ಶಾಲಾ, ಕಾಲೇಜುಗಳಲ್ಲಿ ಪ್ರಾಣಿ ಆರೈಕೆಯ ತರಬೇತಿ ನೀಡಬಹುದು ಎಂದು ಸಭೆಗೆ ತಿಳಿಸಲಾಯಿತು.
ಇತರ ಪ್ರಮುಖ ನಿರ್ಣಯಗಳು:
• ಬನ್ನೇರುಘಟ್ಟ ಜೈವಿಕ ಉದ್ಯಾನದ ಪ್ರಾಣಿ, ಪಕ್ಷಿಗಳಿಗೆ ಮತ್ತು ಪ್ರವಾಸಿಗರಿಗೆ ಅನುಕೂಲವಾಗುವಂತೆ ಬೆಂಗಳೂರು ಜಲಮಂಡಳಿಯಿಂದ ಕಾವೇರಿ ನೀರು ಒದಗಿಸಲು ಈಗಾಗಲೇ ಸರ್ಕಾರ ಅನುಮತಿ ನೀಡಿದ್ದು,, ಕೊಳವೆ ಮಾರ್ಗ ಅಳವಡಿಕೆ ಕಾಮಗಾರಿ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ನೀರು ಹರಿಸು ಕ್ರಮ ಕೈಗೊಳ್ಳಲು ಸಮ್ಮತಿ.
• ಬನ್ನೇರುಘಟ್ಟ ಉದ್ಯಾನದಲ್ಲಿ ನೇರಗುತ್ತಿಗೆ ಆಧಾರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮತ್ತು 21 ಸಾವಿರ ಮಾಸಿಕ ವೇತನ ಮೀರಿದ 153 ಸಿಬ್ಬಂದಿಗೆ ಸಿ.ಜಿ.ಎಚ್.ಎಸ್. ದರದಂತೆ ವೈದ್ಯಕೀಯ ವೆಚ್ಚ ಭರಿಸಲು ಅನುಮೋದನೆ.
• ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನ ವ್ಯಾಪ್ತಿಯಲ್ಲಿ ನಿರ್ಮಾಣ ಮಾಡಲಾಗಿರುವ ರಣಹದ್ದು ಸಂರಕ್ಷಣಾ ಸಂತಾನೋತ್ಪತ್ತಿ ಕೇಂದ್ರವನ್ನು ಬನ್ನೇರುಘಟ್ಟ ಜೈವಿಕ ಉದ್ಯಾನವನದ ಸ್ಯಾಟಲೈಟ್ ಕೇಂದ್ರವಾಗಿ ಕಾರ್ಯನಿರ್ವಹಣೆಗೆ ಅನುಮೋದನೆ.
• ಗದಗ ಮೃಗಾಲಯದ ವಿಸ್ತರಣೆ ಮತ್ತು ಅಭಿವೃದ್ಧಿಗೆ 13.20 ಎಕೆ ಜಮೀನು ಭೂಸ್ವಾಧೀನ ಮತ್ತು ಮೃಗಾಲಯದ ಸಿಬ್ಬಂದಿಗೆ ರಿಯಾಯಿತಿ ದರದಲ್ಲಿ ಮಧ್ಯಾಹ್ನದ ಊಟ ಪೂರೈಕೆಗೆ ಸಮ್ಮತಿ.