ರಾಯಚೂರು, ಜು.10 www.bengaluruwire.com : ಆರ್ ಟಿಪಿಎಸ್ ಶಾಖೋತ್ಪನ್ನ ವಿದ್ಯುತ್ ಕೇಂದ್ರವು ಯಾವುದೇ ಅಡಚಣೆ ಇಲ್ಲದೆ ನಿರಂತರ 100 ದಿನಗಳ ಕಾಲ ವಿದ್ಯುತ್ ಉತ್ಪಾದನೆ ಮಾಡಿದ ಹಿನ್ನೆಲೆಯಲ್ಲಿ ಬುಧವಾರ ಇಲ್ಲಿ ಆಯೋಜಿಸಿದ್ದ ಸಂಭ್ರಮಾಚರಣೆಯಲ್ಲಿ ಇಂಧನ ಸಚಿವ ಕೆ.ಜೆ ಜಾರ್ಜ್ ಅವರು ಪಾಲ್ಗೊಂಡರು.
ಮೊದಲು ಯರಮರಸ್ ಶಾಖೋತ್ಪನ್ನ ವಿದ್ಯುತ್ ಕೇಂದ್ರಕ್ಕೆ ಭೇಟಿ ನೀಡಿದ ಸಚಿವರು, ಅಲ್ಲಿನ ವಿದ್ಯುತ್ ಉತ್ಪಾದನಾ ಘಟಕಗಳನ್ನು ವೀಕ್ಷಿಸಿದರಲ್ಲದೆ, ಹಿರಿಯ ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆ ನಡೆಸಿದರು. ಈ ವೇಳೆ ವಿದ್ಯುತ್ ಕೇಂದ್ರದ ವಿಸ್ತರಣಾ ಯೋಜನೆಯ ಬಗ್ಗೆಯೂ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು.
ಬಳಿಕ ರಾಯಚೂರು ಶಾಖೋತ್ಪನ್ನ ವಿದ್ಯುತ್ ಕೇಂದ್ರಕ್ಕೆ ತೆರಳಿ ಅಲ್ಲಿಯೂ ವಿದ್ಯುತ್ ಉತ್ಪಾದನಾ ಘಟಕಗಳ ಕಾರ್ಯವೈಖರಿಯನ್ನು ವೀಕ್ಷಿಸಿ ಅಧಿಕಾರಿಗಳಿಂದ ಮಾಹಿತಿ ಪಡೆದರು. ಇದೇ ವೇಳೆ ಈ ಕೇಂದ್ರವು ಯಾವುದೇ ಅಡಚಣೆ ಇಲ್ಲದೆ ನಿರಂತರವಾಗಿ 100 ದಿನಗಳ ಕಾಲ ವಿದ್ಯುತ್ ಉತ್ಪಾದನೆ ಮಾಡಿ ಸಾಧನೆ ಮಾಡಿರುವ ಹಿನ್ನೆಲೆಯಲ್ಲಿ ಕೇಕ್ ಕತ್ತರಿಸಿ ಸಂಭ್ರಮ ಹಂಚಿಕೊಂಡರು.
ರಾಜ್ಯದ ಶಾಖೋತ್ಪನ್ನ ಕೇಂದ್ರಗಳು ನಿರಂತರವಾಗಿ ಮತ್ತು ದಾಖಲೆಯ ವಿದ್ಯುತ್ ಉತ್ಪಾದನೆ ಮಾಡುವ ಮೂಲಕ ಈ ಬಾರಿಯ ಬೇಸಿಗೆಯಲ್ಲಿ ಲೋಡ್ ಶೆಡ್ಡಿಂಗ್ ಇಲ್ಲದೆ ವಿದ್ಯುತ್ ಪೂರೈಸುವಲ್ಲಿ ನೆರವಾಗಿದ್ದಕ್ಕಾಗಿ ಕೇಂದ್ರದ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಅಭಿನಂದಿಸಿದರು.
ರಾಯಚೂರು ಶಾಖೋತ್ಪನ್ನ ವಿದ್ಯುತ್ ಸ್ಥಾವರ ಒಟ್ಟು 7 ಘಟಕಗಳಿದ್ದು, ಒಟ್ಟಾರೆ 1,740 ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸುವ ಸಾಮರ್ಥ್ಯ ಹೊಂದಿದೆ. 1986ರಲ್ಲಿ ಆರಂಭವಾದ ಈ ಘಟಕವು ಬೇಸಿಗೆ ಕಾಲದಲ್ಲಿ ನಿರಂತರವಾಗಿ ಆಮದು ಕಲ್ಲಿದ್ದಲು ಹಾಗೂ ದೇಶೀಯ ಕಲ್ಲಿದ್ದಲು ಮಿಶ್ರಣ ಮಾಡಿ ಬಳಸಿದ್ದರಿಂದ ಶಾಖೋತ್ಪನ್ನ ವಿದ್ಯುತ್ ಉತ್ಪಾದನೆ ತಡೆರಹಿತವಾಗಿ ಉತ್ಪಾದನೆ ಮಾಡಿತ್ತು.
ಇಂಧನ ಇಲಾಖೆ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ, ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕ ಪಂಕಜ್ ಕುಮಾರ್ ಪಾಂಡೆ, ಕೆಪಿಸಿಎಲ್ ತಾಂತ್ರಿಕ ನಿರ್ದೇಶಕ ದಿವಾಕರ್ ಸಿ.ಎಂ. ಸೇರಿದಂತೆ ಶಾಖೋತ್ಪನ್ನ ವಿದ್ಯುತ್ ಕೇಂದ್ರಗಳ ಅಧಿಕಾರಿಗಳು ಹಾಜರಿದ್ದರು.