ಬೆಂಗಳೂರು, ಅ.16 www.bengaluruwire.com : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮದಿಂದ ನಗರದಲ್ಲಿ ಸುರಿದ ಭಾರೀ ಮಳೆಗೆ ಯಲಹಂಕದ ಕೇಂದ್ರೀಯ ವಿಹಾರ್, ಮಹದೇವಪುರ, ಬೊಮ್ಮನಹಳ್ಳಿ ವಲಯದಲ್ಲಿ ಹಲವು ಬಡಾವಣೆಗಳಲ್ಲಿ, ರಸ್ತೆಗಳಲ್ಲಿ ನೀರು ನಿಂತಿದ್ದು ವಾಹನಗಳ ಓಡಾಟಕ್ಕೆ ಸಮಸ್ಯೆಯಾಗಿದೆ. ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿದ, ಮರ ಬಿದ್ದ ಘಟನೆಗಳು ವರದಿಯಾಗಿದೆ.
ಈ ಮಧ್ಯೆ ನಗರದಲ್ಲಿ ನಿರಂತರ ಮಳೆ ಬಿದ್ದ ಹಿನ್ನಲೆಯಲ್ಲಿ ಸೃಷ್ಟಿಯಾದ ಸಮಸ್ಯೆಗಳ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ರಾಜಕೀಯ ಕೆಸರೆರಚಾಟ ಹೆಚ್ಚಾಗಿದೆ. ಈ ಬಗ್ಗೆ ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ಅಭಿವೃದ್ಧಿ ಸಚಿವ ಡಿ.ಕೆ.ಶಿವಕುಮಾರ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದು,
“ಬೆಂಗಳೂರಿನಲ್ಲಿ ಅನಿರೀಕ್ಷಿತವಾಗಿ ಸುರಿಯುತ್ತಿರುವ ಭಾರಿ ಮಳೆಯನ್ನು ನಿಭಾಯಿಸಲು ಸರ್ಕಾರ ಸಮರ್ಥವಾಗಿದೆ. ಪ್ರಕೃತಿಗೆ ಕಡಿವಾಣ ಹಾಕಲು ಸಾಧ್ಯವೇ? ಚಂಡಮಾರುತ ತಡೆಯಲು ಸಾಧ್ಯವೇ? ಇದನ್ನು ಅರ್ಥ ಮಾಡಿಕೊಳ್ಳದ ವಿರೋಧ ಪಕ್ಷಗಳು ರಾಜ್ಯದ ಮಾನ ಹರಾಜು ಹಾಕುವುದನ್ನು ನಿಲ್ಲಿಸಬೇಕು” ಎಂದು ಗುಡುಗಿದ್ದಾರೆ.
“ಬೆಂಗಳೂರಿನಲ್ಲಿ ಹೆಚ್ಚಿನ ಮಳೆಯಾಗುತ್ತಿರುವ ಹಿನ್ನೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಶಾಲೆಗಳಿಗೆ ರಜೆ ನೀಡಲಾಗಿದೆ. ಇಂದು (ಬುಧವಾರ) ಕೂಡ ಮಳೆ ಸಾಧ್ಯತೆ ಇದೆ, ಸಂಚಾರ ದಟ್ಟಣೆಯಾಗಲಿದ್ದು, ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು” ಎಂದು ತಿಳಿಸಿದರು.
“ಕಾವೇರಿ 5ನೇ ಹಂತದ ಕುಡಿಯುವ ನೀರಿನ ಯೋಜನೆ ಕಾರ್ಯಕ್ರಮದಿಂದ ಮರಳಿದ ನಂತರ ಇಂದು ಸಂಜೆ ಪೊಲೀಸ್ ಇಲಾಖೆ, ಬಿಬಿಎಂಪಿ ಹಾಗೂ ಅಗ್ನಿಶಾಮಕ ದಳದ ಅಧಿಕಾರಿಗಳ ಜತೆ ಮತ್ತೊಂದು ಸುತ್ತಿನ ಸಭೆ ನಡೆಸಿ ಪರಿಸ್ಥಿತಿ ಅವಲೋಕನ ಮಾಡುತ್ತೇನೆ” ಎಂದು ತಿಳಿಸಿದರು.
“ವಿರೋಧ ಪಕ್ಷಗಳ ನಾಯಕರ ಟ್ವೀಟ್ ಗಳನ್ನು ನೋಡಿದೆ. ಪ್ರಕೃತಿಗೆ ನಾವು ಕಡಿವಾಣ ಹಾಕಿ ಬುದ್ದಿಹೇಳಲು ಸಾಧ್ಯವೇ? ಚಂಡಮಾರುತದ ಪರಿಣಾಮದಿಂದ ಅನಿರೀಕ್ಷಿತವಾಗಿ ಮಳೆ ಸುರಿದಿದ್ದು, ಇನ್ನು ಹೆಚ್ಚಿನ ಮಳೆ ಬಂದರೂ ಅದನ್ನು ನಿಭಾಯಿಸಲು ಸರ್ಕಾರ ಹಾಗೂ ಜನರು ಸಮರ್ಥರಿದ್ದೇವೆ” ಎಂದು ತಿಳಿಸಿದರು.
ಮಳೆ ಹಾನಿ ಪ್ರದೇಶಗಳಿಗೆ ತುಷಾರ್ ಗಿರಿನಾಥ್ ಭೇಟಿ :
ಇನ್ನೊಂದೆಡೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ಯಲಹಂಕ ವಲಯದ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಸೂಕ್ತ ಪರಿಹಾರ ಕಾರ್ಯಗಳನ್ನು ಕೈಗೊಳ್ಳುವಂತೆ ಪಾಲಿಕೆ ಅಧಿಕಾರಿಗಳಿಗೆ ಸ್ಥಳದಲ್ಲೇ ಸೂಚನೆ ನೀಡಿದರು.
ಮೊದಲಿಗೆ ಬೆಳಗ್ಗೆ ಕೇಂದ್ರೀಯ ವಿಹಾರ್ ಅಪಾರ್ಟ್ಮೆಂಟ್ ಗೆ ಭೇಟಿ ನೀಡಿ ಪ್ರಸ್ತುತ ಸುಮಾರು 3 ಅಡಿ ನೀರು ನಿಂತಿದ್ದು, ಕೂಡಲೆ ಅಗತ್ಯ ಕ್ರಮಗಳನ್ನು ಕೈಗೊಂಡು ಸಮಸ್ಯೆ ಬಗೆಹರಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸದ್ಯ ಇರುವ ನೀರುಗಾಲುವೆಯ ಪಕ್ಕ ಖಾಸಗಿ ಜಾಗದಲ್ಲಿ ಹಿಟಾಚಿ ಮೂಲಕ ಕಚ್ಚಾ ಡ್ರೈನ್ ಮಾಡಲಾಗುತ್ತಿದ್ದು, ಕೂಡಲೇ ಕೆಲಸ ಮುಗಿಸಿ ಕಚ್ಚಾ ಡ್ರೈನ್ ಮೂಲಕ ನೀರು ಹರಿದು ಹೊಗುವಂತೆ ಮಾಡಲಾಗುತ್ತಿದೆ. 2 ಅಗ್ನಿಶಾಮಕ ವಾಹನಗಳಿಂದ ಪಂಪ್ ಮೂಲಕ ನೀರನ್ನು ಹೊರ ಹಾಕಲಾಗುತ್ತಿದೆ. ನಿನ್ನೆ ಸಂಜೆ ಸಹಾಯ ಕೇಂದ್ರ(Help Desk) ತೆಗಯಲಾಗಿದ್ದು, ನಿವಾಸಿಗಳಿಗಳಿಗೆ ಕುಡಿಯುವ ನೀರು, ಹಾಲು, ಬ್ರೆಡ್, ಬಿಸ್ಕೆಟ್ ಇನ್ನಿತರೆ ಅಗತ್ಯ ವ್ಯವಸ್ಥೆ ಮಾಡಲಾಗುತ್ತಿದೆ. ಅಪಾರ್ಟ್ಮೆಂಟ್ ನಿಂದ ನಿವಾಸಿಗಳು ಹೊರ ಬರಲು ಹಾಗೂ ಒಳ ಹೋಗಲು 2 ಟ್ರ್ಯಾಕ್ಟರ್ ಗಳ ವ್ಯವಸ್ಥೆ ಮಾಡಲಾಗಿದೆ ಎಂದರು.
ಯಲಹಂಕ ಕೆರೆಗೆ ಎರಡು ಕೋಡಿಗಳಿದ್ದು, ಉತ್ತರ, ದಕ್ಷಿಣದಲ್ಲಿ ಕೋಡಿಗಳು ಬರಲಿದೆ. ಕೇಂದ್ರೀಯ ವಿಹಾರ್ ಅಪಾರ್ಟ್ಮೆಂಟ್ ಕಡೆಗೆ ಉತ್ತರ ಕೋಡಿ ಬರಲಿದ್ದು, ಅಲ್ಲಿ ನೀರಿನ ಹರಿವನ್ನು ಕಡಿಮೆ ಮಾಡಬೇಕಿದೆ. ಈ ಸಂಬಂಧ ದಕ್ಷಿಣದ ಕೋಡಿಯಲ್ಲಿ ನೀರಿನ ಹರಿವಿನ ಮಟ್ಟ ಹೆಚ್ಚಿಸಿದಾಗ ಉತ್ತರದ ಕೋಡಿಯಲ್ಲಿ ನೀರಿನ ಹರಿವಿನ ಮಟ್ಟ ಕಡಿಮೆಯಾಗಲಿದೆ. ಆದ್ದರಿಂದ ಕೂಡಲೆ ಸೂಕ್ತ ಕ್ರಮ ಕೈಗೊಳ್ಳ ಸೂಚನೆ ನೀಡಿದರು. 20ಕ್ಕೂ ಹೆಚ್ಚು ಅಧಿಕಾರಿ ಮತ್ತು ಸಿಬ್ಬಂದಿ ಸ್ಥಳದಲ್ಲಿದ್ದು, ಸಮಸ್ಯೆಯನ್ನು ಬಗೆಹರಿಸುವಲ್ಲಿ ಸಕ್ರಿಯವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ರಮಣಶ್ರೀ ಕ್ಯಾಲಿಫೋರ್ನಿಯಾ ಲೇಔಟ್ ಪರಿಶೀಲನೆ:
ರಮಣಶ್ರೀ ಲೇಔಟ್ ಗೆ ಬರುತ್ತಿರುವ ನೀರನ್ನು ತಡೆಯುವ ಸಲುವಾಗಿ ಹಿಂದೆಯೇ ಡೈವರ್ಷನ್ ಚಾನಲ್ ಮಾಡಲಾಗಿದ್ದು, ನೀರಿನ ಮಟ್ಟವನ್ನು ಸಾಕಷ್ಟು ತಡೆಯಲಾಗಿದೆ. ರಮಣಶ್ರೀ ಕ್ಯಾಲಿಫೋರ್ನಿಯಾ ಲೇಔಟ್ ನಲ್ಲಿ ನಿಂತಿರುವ ನೀರನ್ನು ಕೂಡಲೇ ತೆರವುಗೊಳಿಸಲು ಸೂಚನೆ ನೀಡಿದರು.
ವಿವಿಧ ವಲಯಗಳಲ್ಲಿ ಸಮಸ್ಯೆಯಾಗಿರುವ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲಿಸಲು ಸೂಚನೆ:
ಮಳೆಯಾಗುತ್ತಿರುವ ಹಿನ್ನೆಲೆ ಮುಖ್ಯ ಆಯುಕ್ತರು ಇಂದು ಬೆಳಗ್ಗೆಯೇ ವರ್ಚುವಲ್ ಮೂಲಕ ಸಭೆ ನಡೆಸಿ, ಆಯಾ ವಲಯ ವ್ಯಾಪ್ತಿಯಲ್ಲಿ ಸಮಸ್ಯೆಯಾಗಿರುವ ಸ್ಥಳಗಳಿಗೆ ಖುದ್ದು ಭೇಟಿ ನೀಡಿ ಪರಿಶೀಲಿಸಬೇಕು. ಸ್ಥಳದಲ್ಲಾಗಿರುವ ಸಮಸ್ಯೆ ಬಗ್ಗೆ ಅವಲೋಕಿಸಿ ಆ ಸ್ಥಳದಲ್ಲಿ ಶಾಶ್ವತ ಪರಿಹಾರ ಹುಡುಕಿ, ಇರುವ ಸಮಸ್ಯೆಯನ್ನು ಬಗೆಹರಿಸಲು ಸೂಕ್ತ ಕ್ರಮ ಕೈಗೊಳ್ಳಲು ಎಲ್ಲಾ ಅಧಿಕಾರಿಗಳಿಗೆ ಸೂಚನೆ ನೀಡಿದರು. ಎಲ್ಲಾ ವಲಯಗಳ ನಿಯಂತ್ರಣ ಕೊಠಡಿಗಳು ಸಕ್ರಿಯವಾಗಿ ಕಾರ್ಯನಿರ್ವಹಿಸಬೇಕು. ನಾಗರೀಕರಿಂದ ಬರುವ ದೂರುಗಳಿಗೆ ಕೂಡಲೇ ಸ್ಪಂದಿಸಲು ಸೂಚನೆ ನೀಡಿದರು.
ಪ್ರತಿ ಬಾರಿ ನಿರಂತರ ಜೋರು ಮಳೆಯಾದರೂ ಯಲಹಂಕ, ಮಹದೇವಪುರ, ಬೊಮ್ಮನಹಳ್ಳಿಯಲ್ಲಿ ರಸ್ತೆ, ಬಡಾವಣೆಗಳಲ್ಲಿ ನೀರು ತುಂಬಿ, ಜನ ಟ್ಯಾಕ್ಟರ್- ಬೋಟ್ ಗಳಲ್ಲಿ ಸಂಚರಿಸುವ ತಾಪತ್ರಯ ಇನ್ನೂ ತಪ್ಪಿಲ್ಲದಿರುವುದಕ್ಕೆ ಸಾಮಾಜಿಕ ಜಾಲತಾಣದಲ್ಲಿ ಜನ ಪಾಲಿಕೆಗೆ, ಆಡಳಿತ ವ್ಯವಸ್ಥೆಗೆ ಹಿಡಿಶಾಪ ಹಾಕುತ್ತಿದ್ದಾರೆ.