ಬೆಂಗಳೂರು, ಅ.19 www.bengaluruwire.com : ವಾಯು ಮಾಲಿನ್ಯ, ಶಬ್ದ ಮಾಲಿನ್ಯ ತಡೆಯಲು, ಹಿರಿಯ ನಾಗರಿಕರು ಮತ್ತು ಪುಟ್ಟ ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ ಪಟಾಕಿ ತ್ಯಜಿಸಲು ಇಲ್ಲವೇ ಹಸಿರು ಪಟಾಕಿಗಳನ್ನು ಮಾತ್ರ ಬಳಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಮನವಿ ಮಾಡಿದ್ದಾರೆ.
ಕತ್ತಲೆಂಬ ಅಜ್ಞಾನವನ್ನು ಕಳೆದು ಸುಜ್ಞಾನವೆಂಬ ದೀಪ ಹಚ್ಚುವ ಬೆಳಕಿನ ಹಬ್ಬಕ್ಕೂ ಪಟಾಕಿಗೂ ಅವಿನಾಭಾವ ಬಾಂಧವ್ಯ ಬೆಸೆದಿದೆ. ಆದರೆ ಈ ಪಟಾಕಿಗಳು ಪರಿಸರಕ್ಕೆ ತೀವ್ರ ಹಾನಿ ಉಂಟು ಮಾಡುತ್ತವೆ ಈ ನಿಟ್ಟಿನಲ್ಲಿ ಪ್ರಜ್ಞಾವಂತ ನಾಗರಿಕರು ಪರಿಸರಕ್ಕೆ ದಟ್ಟ ಹೊಗೆ ಸೇರಿಸುವ, ರಾಸಾಯನಿಕ, ಭಾರ ಲೋಹಯುಕ್ತ ಪಟಾಕಿ ಬಳಸದಂತೆ ಮನವಿ ಮಾಡಿದ್ದಾರೆ.
ಹಸಿರು ಪಟಾಕಿ ಮಾತ್ರವೇ ಬಳಸಿ :
ಹಲವು ಮಕ್ಕಳು ಪಟಾಕಿ ಸಿಡಿಸುವಾಗ ಕಣ್ಣಿಗೆ ಪೆಟ್ಟು ಮಾಡಿಕೊಂಡಿದ್ದನ್ನು ನೋಡುತ್ತೇವೆ, ಹಲವರು ಗಾಯಗೊಳ್ಳುತ್ತಾರೆ. ಹೀಗಾಗಿ ಸಾಧ್ಯವಾದಷ್ಟು ಪಟಾಕಿ ಹಚ್ಚದಿರುವುದೇ ಉತ್ತಮ. ಪಟಾಕಿ ಸಿಡಿಸಲೇಬೇಕು ಎಂದಾದರೆ ಪರಿಸರಕ್ಕೆ ಹಾನಿ ಉಂಟು ಮಾಡದ ಹಸಿರು ಪಟಾಕಿ ಮಾತ್ರವೇ ಸಿಡಿಸಿ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.
125 ಡೆಸಿಬಲ್ ಗಿಂತ ಕಡಿಮೆ ಶಬ್ದದ ಪಟಾಕಿಗೆ ಅವಕಾಶ:
ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ ಮತ್ತು ಸುಪ್ರೀಂಕೋರ್ಟ್ ತನ್ನ ಹಲವು ತೀರ್ಪುಗಳಲ್ಲಿ 125 ಡೆಸಿಬಲ್ ಗಿಂತ ಹೆಚ್ಚು ಶಬ್ದ ಮಾಡುವ ಮತ್ತು ಹೆಚ್ಚು ಹೊಗೆ ಹೊರಹೊಮ್ಮುವ ರಾಸಾಯನಿಕಯುಕ್ತ ಪಟಾಕಿಗಳನ್ನು ನಿಷೇಧಿಸಿದೆ. ರಾತ್ರಿ 8 ರಿಂದ 10ಗಂಟೆ ವರೆಗೆ ಮಾತ್ರ ಹಸಿರು ಪಟಾಕಿಗಳನ್ನು ಹಚ್ಚಲು ಅವಕಾಶ ಕಲ್ಪಿಸಿದೆ. ಸಾರ್ವಜನಿಕರು ಈ ನಿಯಮಗಳನ್ನು ಪಾಲಿಸಬೇಕು ಎಂದು ಈಶ್ವರ ಖಂಡ್ರೆ ತಿಳಿಸಿದ್ದಾರೆ.
ಪಟಾಕಿ ಮಾಲೀಕರಿಂದ ಮುಚ್ಚಳಿಕೆಗೆ ಸೂಚನೆ:
ಗಣಪತಿ ಹಬ್ಬದ ಸಂದರ್ಭದಲ್ಲಿ ಮುಖ್ಯ ಕಾರ್ಯದರ್ಶಿಗಳೊಂದಿಗೆ ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಪಟಾಕಿ ಮಳಿಗೆಗೆ ಅನುಮತಿ ನೀಡುವಾಗ ಹಸಿರು ಪಟಾಕಿ ಮಾತ್ರ ದಾಸ್ತಾನು, ಸಾಗಾಟ ಹಾಗೂ ಮಾರಾಟ ಮಾಡುವುದಾಗಿ ಮಳಿಗೆ ಮಾಲೀಕರಿಂದ ಮುಚ್ಚಳಿಕೆ ಬರೆಸಿಕೊಳ್ಳಲು ಸೂಚಿಸಲಾಗಿದೆ. ನಿಯಮ ಉಲ್ಲಂಘಿಸುವವರಿಗೆ ಮುಂದಿನ ಸಾಲಿನಿಂದ ಪಟಾಕಿ ಮಳಿಗೆ ಅನುಮತಿ ನೀಡದಂತೆ ತಿಳಿಸಲಾಗಿದೆ. ಜಿಲ್ಲಾಡಳಿತ ಈ ಬಗ್ಗೆ ಕ್ರಮ ವಹಿಸಬೇಕು ಎಂದು ತಿಳಿಸಿದ್ದಾರೆ.