ಬೆಳಗಾವಿ, ಡಿ.16 www.bengaluruwire.com : ರಾಜ್ಯದಲ್ಲಿ ಸಿಸೇರಿಯನ್ (Caesarean) ಹೆರಿಗೆಗಳನ್ನ ನಿಯಂತ್ರಿಸುವ ನಿಟ್ಟಿನಲ್ಲಿ ಮುಂದಿನ ತಿಂಗಳು ನೂತನ ಕಾರ್ಯಕ್ರಮ ಜಾರಿಗೊಳಿಸುತ್ತಿರುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬೆಳಗಾವಿಯ ಸುವರ್ಣಸೌಧದಲ್ಲಿ ಸೋಮವಾರ ವಿಧಾನ ಪರಿಷತ್ ಕಲಾಪದಲ್ಲಿ ಪರಿಷತ್ ಸದಸ್ಯ ಜಗದೇವ ಗುತ್ತೇದಾರ ಅವರ ಪ್ರಶ್ನೆಗೆ ಉತ್ತರಿಸುವ ವೇಳೆ ಸಚಿವರು ಈ ವಿಷಯ ತಿಳಿಸಿದರು.
ರಾಜ್ಯದಲ್ಲಿ ಪ್ರತಿ ವರ್ಷ ಸಿಸೇರಿಯನ್ ಹೆರಿಗೆ ಪ್ರಮಾಣ ಹೆಚ್ಚಾಗುತ್ತಿದೆ. 2021-2022 ರಲ್ಲಿ ಶೇ.35ರಷ್ಟು ಇದ್ದ ಸಿಸೇರಿಯನ್ ಪ್ರಮಾಣ, 2022-23 ಕ್ಕೆ ಶೇ.38 ಕ್ಕೆ ಏರಿಕೆಯಾಗಿತ್ತು. ಪ್ರಸ್ತುತ ರಾಜ್ಯದಲ್ಲಿ ಸಿಸೇರಿಯನ್ ಹೆರಿಗೆ ಪ್ರಮಾಣ ಶೇ.46 ಇದೆ. ವಿಶೇಷವಾಗಿ ಖಾಸಗಿ ಆಸ್ಪತ್ರೆ (Private Hospitals)ಗಳಲ್ಲಿ ಶೇ.61 ರಷ್ಟು ಸಿಸೇರಿಯನ್ ಗಳನ್ನು ಮಾಡಲಾಗುತ್ತಿದೆ. ಸಿಸೇರಿಯನ್ ಗಳಿಂದ ಹೆಚ್ಚು ಆದಾಯ ಬರುತ್ತದೆ ಮತ್ತು ಸುಲಭವಾಗಿ ಹೆರಿಗೆ ಮಾಡಿಸಬಹುದು ಎಂಬ ಕಾರಣಕ್ಕೆ ಖಾಸಗಿ ಆಸ್ಪತ್ರೆಗಳು ಸಿಸೇರಿಯನ್ ಹೆರಿಗೆಗಳನ್ನೇ ಹೆಚ್ಚು ಮಾಡುತ್ತಿದ್ದಾರೆ. ತಾಯಿ ಮತ್ತು ಮಗುವಿನ ಆರೋಗ್ಯ ದೃಷ್ಟಿಯಿಂದ ಇದಕ್ಕೆ ಕಡಿವಾಣ ಹಾಕುವುದು ಅತ್ಯಗತ್ಯವಾಗಿದೆ. ಈ ನಿಟ್ಟಿನಲ್ಲಿ ಮಹಿಳೆಯರನ್ನ ಸಹಜ ಹೆರಿಗೆ ಮಾಡಿಸಿಕೊಳ್ಳಲು ಮಾನಸಿಕವಾಗಿ ಸಜ್ಜುಗೊಳಿಸಿಬೇಕಿದೆ. ಇದಕ್ಕಾಗಿ ನೂತನ ಕಾರ್ಯಕ್ರಮ ಜಾರಿಗೊಳಿಸುತ್ತಿರುವುದಾಗಿ ಸದನಕ್ಕೆ ತಿಳಿಸಿದರು.
ಭ್ರೂಣ ಹತ್ಯೆ ವಿರುದ್ಧ ಯಶಸ್ವಿ ಕಾರ್ಯಾಚರಣೆ – 46 ಜನರ ಬಂಧನ :
ರಾಜ್ಯದಲ್ಲಿ 2023-24 ರಿಂದ ಇಲ್ಲಿಯವರೆಗೆ ಭ್ರೂಣಹತ್ಯೆ (Feticide) ಸಂಬಂಧಿಸಿದಂತೆ 8 ಪ್ರಕರಣ ದಾಖಲಿಸಿ 46 ಜನರನ್ನು ಬಂಧಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಇದೇ ವೇಳೆ ಸದನಕ್ಕೆ ಮಾಹಿತಿ ನೀಡಿದರು. ರಾಜ್ಯದಲ್ಲಿ ಸ್ಕ್ಯಾನಿಂಗ್ ಸೆಂಟರ್ ಮತ್ತು ಆಸ್ಪತ್ರೆಗಳ ಮೇಲೆ ತಪಾಸಣೆಗಳನ್ನು ಜಾಸ್ತಿ ಮಾಡಿರುವುದರಿಂದ ಹೆಚ್ಚಿನ ಸಂಖ್ಯೆಯ ಭ್ರೂಣ ಹತ್ಯೆ ಪ್ರಕರಣಗಳು ಕಂಡುಹಿಡಿಯಲಾಗಿದೆ. ಅಲ್ಲದೇ ಆಪರೇಷನ್‌ಗಳ ಯಶಸ್ವಿ ಕಾರ್ಯಾಚರಣೆಗಳನ್ನ ನಡೆಸಿ ಭ್ರೂಣ ಹತ್ಯೆ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.
![](https://i0.wp.com/bengaluruwire.com/wp-content/uploads/2024/01/WIRE.jpeg?fit=1280%2C901&ssl=1)
![](https://i0.wp.com/bengaluruwire.com/wp-content/uploads/2024/12/Pre-Scanning-For-Pregnant-Women.jpeg?resize=693%2C391&ssl=1)
ರಾಜ್ಯದಲ್ಲಿ ಭ್ರೂಣ ಹತ್ಯೆ ತಡೆಯಲು ಸರ್ಕಾರವು ಗರ್ಭ ಪೂರ್ವ ಮತ್ತು ಪ್ರಸವ ಪೂರ್ವ ಭ್ರೂಣ ಲಿಂಗ ಪತ್ತೆ ತಂತ್ರ ವಿಧಾನಗಳ (ಲಿಂಗ ಆಯ್ಕೆ ನಿಷೇಧ) ಕಾಯ್ದೆ 1994 (Pre-Conception and Pre-Natal Diagnostic Techniques Act – PCPNDT Act) ಕಾಯ್ದೆಯಡಿ ಬರುವ ಎಲ್ಲಾ ಶಾಸನಬದ್ದ ಸಮಿತಿಗಳನ್ನು ರಾಜ್ಯ ಮತ್ತು ಜಿಲ್ಲೆಗಳಲ್ಲಿ ರಚನೆ ಮಾಡಲಾಗಿದೆ. 2018 ರಿಂದ ರಾಜ್ಯದಲ್ಲಿ ‘ಬಾಲಿಕಾ’ ಆನ್ಲೈನ್ ಸಾಪ್ಟ್ವೇರ್ (Balika Online Software) ಮುಖಾಂತರ ಎಲ್ಲಾ ಸ್ಕ್ಯಾನಿಂಗ್ ಸೆಂಟರ್ ಗಳನ್ನು ಕಡ್ಡಾಯವಾಗಿ ನೋಂದಣಿ ಮತ್ತು ನವೀಕರಣ ನಡೆಸಲಾಗುತ್ತಿದೆ.
ರಾಜ್ಯ ಮಟ್ಟದಲ್ಲಿ ಶೇ.100 ರಷ್ಟು ಗರ್ಭಿಣಿಯರ ನೊಂದಣಿ ಪ್ರಕ್ರಿಯೆಯು ಚಾಲ್ತಿಯಲ್ಲಿದ್ದು, ಗ್ರಾಮ ಮಟ್ಟದಲ್ಲಿ ಜನನ ಸಮಯದ ಲಿಂಗಾನುಪಾತದ ದತ್ತಾಂಶಗಳನ್ನು ಮಾಹಿತಿ ತಂತ್ರಜ್ಞಾನದ ಮುಖಾಂತರ ಮೇಲ್ವಿಚಾರಣೆ ಮಾಡುವ ವ್ಯವಸ್ಥೆ ಕಲ್ಪಿಸಲಾಗುತ್ತಿದೆ. ರಾಜ್ಯದಲ್ಲಿ ಇದುವರೆಗೂ ಪಿಸಿ ಮತ್ತು ಪಿಎನ್ ಡಿಟಿ ಕಾಯ್ದೆ ಉಲ್ಲಂಘಿಸಿರುವ ಸ್ಕ್ಯಾನಿಂಗ್ ಸೆಂಟರ್, ಮಾಲೀಕರು ಹಾಗೂ ವೈದ್ಯರ ವಿರುದ್ಧ ಒಟ್ಟು 136 ಪ್ರಕರಣಗಳನ್ನು ನ್ಯಾಯಾಲಯದಲ್ಲಿ ದಾವೆ ಹೂಡಲಾಗಿದ್ದು, 74 ಪ್ರಕರಣಗಳಲ್ಲಿ ದಂಡ ವಿಧಿಸಿ ಖುಲಾಸೆಗೊಂಡಿದ್ದು, 65 ಪ್ರಕರಣಗಳು ಕೋರ್ಟಿನಲ್ಲಿ ವಿವಿಧ ಹಂತದಲ್ಲಿ ಬಾಕಿಯಿರುತ್ತದೆ ಎಂದು ತಿಳಿಸಿದರು.
ಹೆಣ್ಣು ಭ್ರೂಣ ಪತ್ತೆ ಮತ್ತು ಹತ್ಯೆ ಪ್ರಕರಣದಲ್ಲಿ ಮಾಹಿತಿದಾರರ ಬಹುಮಾನ ಮೊತ್ತ ಏರಿಕೆ :
ಹೆಣ್ಣು ಭ್ರೂಣ ಪತ್ತೆ ಮತ್ತು ಹತ್ಯೆ ಮಾಡುವಂತಹ ಸ್ಕ್ಯಾನಿಂಗ್ ಸೆಂಟರ್, ಆಸ್ಪತ್ರೆ, ವೈದ್ಯರು, ದಲ್ಲಾಳಿಗಳು ಹಾಗೂ ಗರ್ಭಿಣಿಯರ ಸಂಬಂಧಿಕರ ವಿರುದ್ಧ ಮಾಹಿತಿ ನೀಡಿ, ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಲು ಸಹಕರಿಸುವ ಮಾಹಿತಿದಾರರಿಗೆ ಕರ್ನಾಟಕ ಸರ್ಕಾರದಿಂದ ನೀಡುತ್ತಿದ್ದ ಬಹುಮಾನವನ್ನು ರೂ.50 ಸಾವಿರದಿಂದ 1 ಲಕ್ಷ ರೂ.ವರೆಗೆ ಹೆಚ್ಚಿಸಲಾಗಿದೆ. ಪಿ.ಸಿ. & ಪಿ.ಎನ್.ಡಿ.ಟಿ. ಕಾಯ್ದೆಯ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಆಯುಕ್ತರ ಅಧ್ಯಕ್ಷತೆಯಲ್ಲಿ ರಾಜ್ಯ ಕಾರ್ಯಪಡೆಯನ್ನು ರಚಿಸಲಾಗಿದ್ದು, ರಾಜ್ಯ ಮಟ್ಟದಿಂದ ಬೆಂಗಳೂರು ಗ್ರಾಮಾಂತರ, ಬೆಳಗಾವಿ, ಮಂಡ್ಯ, ಕೋಲಾರ ಜಿಲ್ಲೆಗಳಲ್ಲಿ ಗುಪ್ತ ಕಾರ್ಯಚರಣೆ ನಡೆಸಲಾಗಿದೆ. ಹೆಣ್ಣು ಭ್ರೂಣ ಹತ್ಯೆ ಮಾಡದಂತೆ ರಾಜ್ಯಾದ್ಯಂತ ಜನ ಜಾಗೃತಿ ಹಾಗೂ ಅರಿವು ಮೂಡಿಸುವಂತಹ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ವಿವರಿಸಿದರು.
“ಬೆಂಗಳೂರು ವೈರ್” ಡಿಜಿಟಲ್ ವೆಬ್ ನ್ಯೂಸ್ ಪೋರ್ಟೆಲ್ಲಿನ ಸೋಶಿಯಲ್ ಮೀಡಿಯಾ ಪೇಜ್ ಹಾಗೂ Google News ಗಳಿಗೆ ಉಚಿತವಾಗಿ Subscribe ಆಗಲು Facebook, Telegram, Twitter, Youtube, Whatsup Channel ಗೆ ಜಾಯಿನ್ ಆಗಲು ಇವುಗಳ ಲಿಂಕ್ ಮೇಲೆ ಕ್ಲಿಕ್ ಮಾಡಿ.