ಮಂಡ್ಯ, ಡಿ.20 www.bengaluruwire.com : ಇಂದಿನಿಂದ ಮೂರು ದಿನಗಳ ಕಾಲ ಇಲ್ಲಿ ನಡೆಯುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಚಟುವಟಿಕೆಗಳಿಗೆ ಅಧಿಕೃತ ಚಾಲನೆ ದೊರೆತಿದೆ.
ಮಂಡ್ಯದ ಸ್ಯಾಂಜೋ ಆಸ್ಪತ್ರೆ ಹಿಂಭಾಗ 130 ಎಕರೆ ಪ್ರದೇಶದಲ್ಲಿ ಈ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುತ್ತಿದ್ದು, 80 ಎಕರೆ ಪ್ರದೇಶದಲ್ಲಿ ಪ್ರಧಾನ ವೇದಿಕೆ ಹಾಗೂ ಎರಡು ಸಮಾನಂತರ ವೇದಿಕೆಗಳ ನಿರ್ಮಾಣ ಮಾಡಲಾಗಿದೆ. ಸಮ್ಮೇಳನದ ವೇದಿಕೆ ಆವರಣದಲ್ಲಿ ಕೃಷಿ ಸಚಿವ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷರಾದ ಎನ್ ಚಲುವರಾಯಸ್ವಾಮಿ ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರೆ, ಕನ್ನಡ ಸಾಹಿತ್ಯ ಪರಿಷತ್ ರಾಜ್ಯ ಅಧ್ಯಕ್ಷರಾದ ನಾಡೋಜ ಡಾ ಮಹೇಶ್ ಜೋಶಿ ಸಾಹಿತ್ಯ ಪರಿಷತ್ತಿನ ಧ್ವಜಾರೋಹಣ ಮಾಡಿದರು.
ಇದೇ ಸಂದರ್ಭದಲ್ಲಿ ಮಂಡ್ಯ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಂಚಾಲಕರಾದ ಮೀರಾ ಶಿವಲಿಂಗಯ್ಯ ನಾಡ ಧ್ವಜಾರೋಹಣ ಮಾಡಿದರು. ಸಮ್ಮೇಳನದ ಸರ್ವಾಧ್ಯಕ್ಷರಾದ ಗೊ.ರು. ಚನ್ನಬಸಪ್ಪ ಅವರು ಇರುವ ಸರ್ವಾಧ್ಯಕ್ಷರ ಮೆರವಣಿಗೆಗೆ ರಾಜವಂಶಸ್ಥೆ ಪ್ರಮೋದಾ ದೇವಿ ಒಡೆಯರ್ ಇದೇ ವೇಳೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಆದಿ ಚುಂಚನಗಿರಿ ಮಠದ ನಿರ್ಮಲಾನಂದ ನಾಥ ಸ್ವಾಮೀಜಿ, ಪುರುಶೋತ್ತಮಾನಂದ ಸ್ವಾಮೀಜಿ , ಚೆಸ್ಕಾಂ ಅಧ್ಯಕ್ಷರಾದ ರಮೇಶ್ ಬಂಡಿಸಿದ್ದೇಗೌಡ, ಶಾಸಕರಾದ ನರೇಂದ್ರಸ್ವಾಮಿ, ರವಿ ಕುಮಾರ್, ಮಧು ಮಾದೇಗೌಡ, ದಿನೇಶ್ ಗೂಳಿಗೌಡ, ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು. 11 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಲಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್, ಸಚಿವರು, ಶಾಸಕರು, ಸಾಹಿತಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.