ಬೆಂಗಳೂರು, ಡಿ.21 www.bengaluruwire.com : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ (Lakshmi Hebbalkar) ಅವರಿಗೆ ಎಂಎಲ್ ಸಿ ಸಿ.ಟಿ. ರವಿ (MLC CT Ravi) ಅವರು ಅವಾಚ್ಯ ಮತ್ತು ಅಸಂವಿಧಾನಿಕ ಪದ ಬಳಕೆ ಮಾಡಿ ಅಪಮಾನಿಸಿರುವ ಘಟನೆ ಕುರಿತು ಉನ್ನತ ಮಟ್ಟದ ತನಿಖೆ ನಡೆಸುವಂತೆ ರಾಜ್ಯ ಮಹಿಳಾ ಆಯೋಗ (Karnataka Womens Commission) ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿಯವರಿಗೆ ಪತ್ರ ಬರೆದು ಒತ್ತಾಯಿಸಿದೆ.
ಬೆಳಗಾವಿಯ ಚಳಿಗಾಲದ ಅಧಿವೇಶನದ ಕೊನೆಯ ದಿನ (ಡಿ.19) ವಿಧಾನ ಪರಿಷತ್ತಿನ ಸದಸ್ಯರಾದ ಸಿ.ಟಿ.ರವಿಯವರು ಸುವರ್ಣ ಸೌಧದ ವಿಧಾನ ಪರಿಷತ್ ಕಲಾಪದಲ್ಲಿ ಅಸಭ್ಯ ಮತ್ತು ಅಸಂವಿಧಾನಿಕ ಪದ ಬಳಕೆ ಮಾಡಿ ಅಪಮಾನಿಸಿರುವುದು ಮಾಧ್ಯಮಗಳಲ್ಲಿ ವರದಿಯಾಗಿರುತ್ತದೆ ಎಂದು ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ತಮ್ಮ ಪತ್ರದಲ್ಲಿ ವಿವರಿಸಿದ್ದಾರೆ.
“ಮಾಜಿ ಮಂತ್ರಿಗಳಾಗಿರುವ ಸಿ.ಟಿ ರವಿಯವರು ಹೆಣ್ಣು ಮಕ್ಕಳ ಬಗ್ಗೆ ಅಪಾರ ಕಾಳಜಿ, ಗೌರವ ಹೊಂದಿರಬೇಕಾದ ಜವಾಬ್ದಾರಿ ಸ್ಥಾನದಲ್ಲಿರುವ ವ್ಯಕ್ತಿಗಳಾಗಿ, ಘನತೆವೆತ್ತ ಸದನದಲ್ಲಿ ಮಹಿಳಾ ಮಂತ್ರಿಯೊಬ್ಬರನ್ನು ಅತೀ ಕೀಳು ಮಟ್ಟದ ಅಸಾಂವಿಧಾನಿಕ ಪದ ಪ್ರಯೋಗ ಮಾಡಿದ್ದರೆ ಅದು ನಾಡಿನ ಹೆಣ್ಣು ಕುಲಕ್ಕೇ, ಅವರ ಭಾವನೆಗಳಿಗೆ, ಅವರ ಘನತೆಗೆ ಕುಂದುಂಟು ಮಾಡಿರುವ ಅಪಮಾನವಾಗುತ್ತದೆ. ಹಾಗಾಗಿ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಉನ್ನತ ಮಟ್ಟದ ತನಿಖೆಗೆ ಆದೇಶಿಸಬೇಕೆಂದು” ಡಾ.ನಾಗಲಕ್ಷ್ಮಿ ಚೌಧರಿ ಸಭಾಪತಿಗಳಿಗೆ ಬರೆದ ಪತ್ರದಲ್ಲಿ ಕೋರಿದ್ದಾರೆ.