ಬೆಂಗಳೂರು, ಜ.06 www.bengaluruwire.com : ರಾಜ್ಯದಲ್ಲಿ ಎಚ್ಎಂಪಿವಿ ವೈರಸ್ (Human metapneumovirus – HMPV Virus) ನ ಎರಡು ಪ್ರಕರಣ ಪತ್ತೆಯಾದ ಹಿನ್ನಲೆಯಲ್ಲಿ , ಸೋಂಕು ಹರಡದಂತೆ ಸರ್ಕಾರ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಾ, ಚೈನಾ ದೇಶದಲ್ಲಿ ಎಚ್ಎಂಪಿವಿ ವೈರಸ್ ಕಾಣಿಸಿಕೊಂಡಿದ್ದು, ಕರ್ನಾಟಕದಲ್ಲಿ ಈ ವೈರಸ್ ಪತ್ತೆಯಾಗಿರುವ ಮಾಹಿತಿ ದೊರೆತಿದೆ. ಆದ್ದರಿಂದ ಈ ವೈರಸ್ ಹರಡದಂತೆ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲು ಆರೋಗ್ಯ ಇಲಾಖೆಗೆ ಸೂಚನೆ ನೀಡಲಾಗಿದೆ. ಆರೋಗ್ಯ ಸಚಿವರು ಈಗಾಗಲೇ ಸಭೆ ನಡೆಸುತ್ತಿದ್ದು, ವೈರಸ್ ತಡೆಗೆ ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಗಳು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಲಿದೆ ಎಂದರು.
ಸೋಂಕು ತಡೆಯ ಕ್ರಮವಾಗಿ ವಿಮಾನ ನಿಲ್ದಾಣಗಳಲ್ಲಿ ಸ್ಕ್ರೀನಿಂಗ್ ಪುನ: ಪ್ರಾರಂಭಿಸುವ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, ಈ ಬಗ್ಗೆ ಆರೋಗ್ಯ ಸಚಿವರು ಸಭೆ ನಡೆಸುತ್ತಿದ್ದು, ರಾಜ್ಯದಲ್ಲಿ ತೆಗೆದುಕೊಳ್ಳಬಹುದಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ತೀರ್ಮಾನಿಸಲಾಗುವುದು ಎಂದು ಅವರು ಹೇಳಿದರು.
ಬೆಂಗಳೂರಿನಲ್ಲಿ 8 ತಿಂಗಳ ಹಾಗೂ 3 ತಿಂಗಳ ಮಗುವಿನಲ್ಲಿ ಎಚ್ಎಂಪಿವಿ ವೈರಸ್ ದೃಢಪಟ್ಟಿದೆ. ಮೊದಲನೆಯ ಪ್ರಕರಣದಲ್ಲಿ 8 ತಿಂಗಳ ಮಗುವಿಗೆ ಜ್ವರ ಬಂದ ಕಾರಣ ಕೆಲವು ದಿನಗಳ ಹಿಂದೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ದಾಖಲು ಮಾಡಲಾಗಿತ್ತು. ರಕ್ತ ಪರೀಕ್ಷೆ ಮಾಡಿಸಿದಾಗ ಎಚ್ಎಂಪಿವಿ ವೈರಸ್ ಇರುವುದು ಪತ್ತೆಯಾಗಿದೆ. ಆದರೆ, ಈ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಹರ್ಷಗುಪ್ತ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಇನ್ನೊಂದು ಪ್ರಕರಣದಲ್ಲಿ, ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾದ ಮೂರು ತಿಂಗಳ ಹೆಣ್ಣು ಶಿಶುವಿನಲ್ಲಿಯೂ ವೈರಸ್ ದೃಢಪಟ್ಟಿದೆ. ಆದರೆ, ಶಿಶುವನ್ನು ಈಗಾಗಲೇ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ಎಚ್ಎಂಪಿವಿ ವೈರಸ್ ಭಾರತದಲ್ಲೂ ಇದೆ. ಆದರೆ, ಅದು ಮ್ಯೂಟೆಷನ್ ಆಗಿದೆಯಾ ಎಂಬ ಬಗ್ಗೆ ಇನ್ನೂ ಸ್ಪಷ್ಟನೆ ಇಲ್ಲ. ನಮಗೆ ಚೀನಾದಲ್ಲಿ ಮ್ಯುಟೇಟ್ ಆಗಿರುವ ವೈರಸ್ ಹೇಗಿದೆ ಎಂದು ತಿಳಿದಿಲ್ಲ. ಹೀಗಾಗಿ ಇಲ್ಲಿ ಪತ್ತೆಯಾಗಿರುವುದು ಸಾಮಾನ್ಯ ಎಚ್ಎಂಪಿವಿ ವೈರಸ್ ಭಾರತದಲ್ಲೂ ಇದೆ. ಆದರೆ, ಅದು ಮ್ಯೂಟೆಷನ್ ಆಗಿದೆಯಾ ಎಂಬ ಬಗ್ಗೆ ಇನ್ನೂ ಸ್ಪಷ್ಟನೆ ಇಲ್ಲ. ನಮಗೆ ಚೀನಾದಲ್ಲಿ ಮ್ಯುಟೇಟ್ ಆಗಿರುವ ವೈರಸ್ ಹೇಗಿದೆ ಎಂದು ತಿಳಿದಿಲ್ಲ. ಹೀಗಾಗಿ ಇಲ್ಲಿ ಪತ್ತೆಯಾಗಿರುವುದು ಸಾಮಾನ್ಯ ಎಚ್ಎಂಪಿವಿ ವೈರಸ್ಸೇ ಅಥವಾ ಚೀನಾದ ತಳಿಯಾ ಎಂಬ ಗೊಂದಲ ಇದೆ. ಭಾರತದಲ್ಲೂ ಸಾಮಾನ್ಯ ಎಚ್ಎಂಪಿವಿ ವೈರಸ್ ಶೇ 0.78 ರಷ್ಟು ಕಾಣಿಸುತ್ತದೆ ಎಂದು ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಹರ್ಷಗುಪ್ತ ತಿಳಿಸಿದ್ದಾರೆ.
ಸದ್ಯ ಸೋಂಕು ಪತ್ತೆಯಾಗಿರುವ ಮಗುವಿಗೆ ಮತ್ತು ಕುಟುಂಬದವರಿಗೆ ಟ್ರಾವೆಲ್ ಹಿಸ್ಟರಿ ಇಲ್ಲ. ಈ ಹಿನ್ನೆಲೆಯ ಬಗ್ಗೆ ಆರೋಗ್ಯ ಇಲಾಖೆ ಕೂಡಾ ಪರಿಶೀಲನೆ ನಡೆಸುತ್ತಿದೆ. ಯಾರೂ ಆತಂಕ ಪಡುವ ಅಗತ್ಯವಿಲ್ಲ ಎಂದು ಹರ್ಷಗುಪ್ತ ತಿಳಿಸಿದ್ದಾರೆ.
ಕೇಂದ್ರಕ್ಕೆ ಮಾಹಿತಿ ನೀಡಿದ ರಾಜ್ಯ ಆರೋಗ್ಯ ಇಲಾಖೆ :
ಮಗುವಿನಲ್ಲಿ ವೈರಸ್ ಪತ್ತೆಯಾದ ಬಗ್ಗೆ ಕೇಂದ್ರ ಆರೋಗ್ಯ ಇಲಾಖೆಗೆ ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಕೇಂದ್ರ ಆರೋಗ್ಯ ಇಲಾಖೆ ಅಧಿಕಾರಿಗಳ ಜತೆ ನಿರಂತರ ಸಂಪರ್ಕದಲ್ಲಿದ್ದೇವೆ ಎಂದೂಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಸೂಕ್ತ ಮುನ್ನೆಚ್ಚರಿಕೆ ವಹಿಸಿ ಎಂದು ಕೇಂದ್ರ ಆರೋಗ್ಯ ಇಲಾಖೆ ರಾಜ್ಯಕ್ಕೆ ಸೂಚಿಸಿದೆ
ಎಚ್ಎಂಪಿವಿ ವೈರಸ್ ಎಂದರೇನು? :
ಸದ್ಯ ಚೀನಾದಲ್ಲಿ ಆತಂಕಕ್ಕೆ ಕಾರಣವಾಗಿದೆ ಎನ್ನಲಾಗಿರುವ ಹ್ಯೂಮನ್ ಮೆಟಾಪ್ನ್ಯೂಮೋ ವೈರಸ್ ಅಥವಾ ಎಚ್ಎಂಪಿವಿ ಹೊಸದೇನಲ್ಲ. ಇದನ್ನು ಮೊದಲು 2001 ರಲ್ಲಿ ಕಂಡುಹಿಡಿಯಲಾಯಿತು ಎಂದು ಯುಎಸ್ ಸೆಂಟರ್ಸ್ ಫಾರ್ ಡಿಸೀಸ್ ಕಂಟ್ರೋಲ್ ಅಂಡ್ ಪ್ರಿವೆನ್ಷನ್ ಹೇಳಿದೆ. ಆದಾಗ್ಯೂ, ಕೆಲವು ಸೆರೋಲಾಜಿಕ್ ಪುರಾವೆಗಳು ವೈರಸ್ 1958 ರಿಂದಲೇ ವ್ಯಾಪಕವಾಗಿ ಹರಡಿತ್ತು ಎಂಬುದನ್ನು ನಿರೂಪಿಸಿರುವುದಾಗಿ ತಜ್ಞರು ವಿವರಿಸಿದ್ದಾರೆ.
ಇದು ಕೊರೊನಾ ವೈರಸ್ಗಿಂತ ಭಿನ್ನವಾಗಿದ್ಯಾ? :
ಕೊರೊನಾವೈರಸ್ ಅಥವಾ COVID-19 ಒಂದು ಸಾಂಕ್ರಾಮಿಕ ಕಾಯಿಲೆಯಾಗಿದೆ. ಇದು SARS-CoV-2 ವೈರಸ್ನಿಂದ ಉಂಟಾಗುತ್ತದೆ. ಎಚ್ಎಂಪಿವಿ ವೈರಸ್ ಮತ್ತು ಕೊರೊನಾ ವೈರಸ್ ಕೆಲವು ರೀತಿಯಲ್ಲಿ ಹೋಲಿಕೆಯನ್ನು ಒಳಗೊಂಡಿವೆ. ಉದಾಹರಣೆಗೆ : ಎರಡೂ ವೈರಸ್ಗಳು ಎಲ್ಲಾ ವಯಸ್ಸಿನ ಜನರಲ್ಲಿ ಉಸಿರಾಟದ ತೊಂದರೆಗೆ ಕಾರಣವಾಗುತ್ತವೆ. ಚಿಕ್ಕ ಮಕ್ಕಳು, ಹಿರಿಯ ವಯಸ್ಕರು ಮತ್ತು ದುರ್ಬಲ ರೋಗನಿರೋಧಕ ಶಕ್ತಿ ಹೊಂದಿರುವ ಜನರು ಹೆಚ್ಚು ಅಪಾಯಕ್ಕೆ ಒಳಗಾಗುತ್ತಾರೆ.
ಸದ್ಯ ಎಚ್ಎಂಪಿವಿ ವೈರಸ್ ಹರಡುವಿಕೆ ತಡೆಗೆ ಯಾವುದೇ ಲಸಿಕೆ ಇಲ್ಲ. ಭಾರತದಲ್ಲಿ ಸದ್ಯ ಯಾವುದೇ ರೀತಿಯಲ್ಲಿ ಆತಂಕ ಪಡಬೇಕಾದ ಅಗತ್ಯ ಇಲ್ಲ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ಕೇಂದ್ರ ಆರೋಗ್ಯ ಸಚಿವ ಜೆಪಿ ನಡ್ಡಾ ಏನಂತಾರೆ?:
ಕೇಂದ್ರ ಆರೋಗ್ಯ ಸಚಿವ ಜೆಪಿ ನಡ್ಡಾ ಅವರು ಭಾರತದಲ್ಲಿ ವರದಿಯಾಗಿರುವ HMPV ಯ ಮೂರು ಪ್ರಕರಣಗಳ ಬಗ್ಗೆ ಇರುವ ಭಯವನ್ನು ನಿವಾರಿಸಿದ್ದಾರೆ. “HMPV ಹೊಸ ವೈರಸ್ ಅಲ್ಲ ಎಂದು ಆರೋಗ್ಯ ತಜ್ಞರು ಸ್ಪಷ್ಟಪಡಿಸಿದ್ದಾರೆ. ಇದನ್ನು ಮೊದಲು 2001 ರಲ್ಲಿ ಗುರುತಿಸಲಾಯಿತು ಮತ್ತು ಇದು ಹಲವು ವರ್ಷಗಳಿಂದ ಇಡೀ ಪ್ರಪಂಚದಲ್ಲಿ ಹರಡುತ್ತಿದೆ. HMPV ಗಾಳಿಯ ಮೂಲಕ, ಉಸಿರಾಟದ ಮೂಲಕ ಹರಡುತ್ತದೆ. ಇದು ಎಲ್ಲಾ ವಯಸ್ಸಿನ ಜನರ ಮೇಲೆ ಪರಿಣಾಮ ಬೀರಬಹುದು” ಅವರು ಹೇಳಿದರು.
ಚೀನಾದ ಪ್ರಸ್ತುತ ಪರಿಸ್ಥಿತಿಯ ಬಗ್ಗೆ ಸರ್ಕಾರವು ನಿಕಟವಾಗಿ ನಿಗಾ ಇರಿಸುತ್ತಿದೆ ಎಂದು ಅವರು ತಿಳಿಸಿದರು.