ಬೆಂಗಳೂರು, ಜ.24 www.bengaluruwire.com : ನಾಳೆ (ಜ. 26) ರಂದು ಬೆಂಗಳೂರಿನ (Bengaluru) ಮಾಣಿಕ್ ಷಾ ಪರೇಡ್ ಮೈದಾನದಲ್ಲಿ (Manik Shah Parade Ground) 76ನೇ ಗಣರಾಜ್ಯೋತ್ಸವ (Republic Day) ದಿನಾಚರಣೆ ಹಿನ್ನೆಲೆಯಲ್ಲಿ ಭರದಿಂದ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.
ಈ ಕುರಿತಂತೆ ಬಿಬಿಎಂಪಿ ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್, ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಜಗದೀಶ್, ನಗರ ಪೊಲೀಸ್ ಆಯುಕ್ತರಾದ ದಯಾನಂದ್ ಗಣರಾಜ್ಯೋತ್ಸವ ದಿನಾಚರಣೆಯ ಪೂರ್ವಭಾವಿ ಸಿದ್ದತೆಗಳ ಬಗ್ಗೆ ಪರಿಶೀಲನೆ ನಡೆಸಿದರು. ಬಳಿಕ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಭಾನುವಾರ ನಡೆಯುವ ಗಣರಾಜ್ಯೋತ್ಸವ ಕಾರ್ಯಕ್ರಮದ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದರು.
ಜನವರಿ 26ರ ಬೆಳಗ್ಗೆ 9 ಗಂಟೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋತ್ (Thawar Chand Gehlot) ಧ್ವಜಾರೋಹಣ ನೆರವೇರಿಸಲಿದ್ದಾರೆ. ಇದಕ್ಕಾಗಿ ಮಾಣಿಕ್ ಷಾ ಪರೇಡ್ ಮೈದಾನವನ್ನು ಸಿದ್ಧಗೊಳಿಸಲಾಗಿರುತ್ತದೆ. ಧ್ವಜಾರೋಹಣದ ನಂತರ ರಾಜ್ಯಪಾಲರು ಗೌರವರಕ್ಷೆ ಸ್ವೀಕರಿಸಿ ನಂತರ ನಾಡಿನ ಜನತೆಗೆ ಗಣರಾಜ್ಯೋತ್ಸವದ ಸಂದೇಶ ನೀಡಲಿದ್ದಾರೆ.
ಜ.22 ರಿಂದ ಒಟ್ಟು 3 ದಿನಗಳ ಕಾಲ ಸತತವಾಗಿ ಗೌರವರಕ್ಷೆ ಸ್ವೀಕರಿಸುವ ತಾಲಿಮನ್ನು ನಡೆಸಲಾಗುತ್ತಿದೆ. ಈ ಪಥಸಂಚಲನದಲ್ಲಿ ರಾಜ್ಯ ಪೊಲೀಸ್, ಕೇರಳ ಪೊಲೀಸ್, ಸ್ಕೌಟ್ಸ್, ಗೈಡ್ಸ್, ಎನ್ಸಿಸಿ, ಸೇವಾದಳ ಹಾಗೂ ವಿವಿಧ ಶಾಲೆಗಳ ಮಕ್ಕಳನ್ನೊಳಗೊಂಡಂತೆ ಕವಾಯತು ಮತ್ತು ಬ್ಯಾಂಡ್ ಸೇರಿದಂತೆ ಒಟ್ಟು 38 ತುಕಡಿಗಳಲ್ಲಿ ಸುಮಾರು 1150 ಮಂದಿ ಭಾಗವಹಿಸಲಿದ್ದಾರೆ.
ಒಟ್ಟು 2 ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಸುಮಾರು 1500 ಶಾಲಾ ಮಕ್ಕಳು ಭಾಗವಹಿಸಲಿದ್ದಾರೆ. ಪೊಲೀಸ್ ಇಲಾಖಾ ವತಿಯಿಂದ 2 ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಮಿಲಿಟರಿ ಇಲಾಖಾ ವತಿಯಿಂದ 3 ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಸಾಹಸ ಪ್ರದರ್ಶನ :
ಗಣರಾಜ್ಯೋತ್ಸವ ದಿನಾಚರಣೆ ಅಂಗವಾಗಿ ಕಿಕ್ಕೇರಿ ಕೃಷ್ಣಮೂರ್ತಿ ಮತ್ತು ತಂಡದವರಿಂದ ನಾಡಗೀತೆ ಮತ್ತು ರೈತಗೀತೆ, ಬೆಂಗಳೂರು ದಕ್ಷಿಣ ವಲಯ-3ರ ಅಗರದಲ್ಲಿನ ಕರ್ನಾಟಕ ಪಬ್ಲಿಕ್ ಶಾಲೆಯ ಒಟ್ಟು 800 ಮಕ್ಕಳಿಂದ “ನಾವೆಲ್ಲರೂ ಒಂದೇ ನಾವು ಭಾರತೀಯರು” ಎಂಬ ಸಾಂಸ್ಕೃತಿಕ ಕಾರ್ಯಕ್ರಮ, ಕುಕ್ರಿ ನೃತ್ಯ, ಬಾಂಗ್ರಾ ಪಂಜಾಬಿ ಜಾನಪದ ನೃತ್ಯ, ಪಂಜಾಬ್ ಘಾತಕ್ ಸೈನಿಕರ ತಂಡದಿಂದ ಸಾಹಸ ಪ್ರದರ್ಶನ, ಹೇರೋಹಳ್ಳಿಯ ಬಿ.ಬಿ.ಎಂ.ಪಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ 650 ಮಕ್ಕಳಿಂದ “ಅರಿವೇ ಅಂಬೇಡ್ಕರ್?” ಪ್ರದರ್ಶನ, ಮೈಸೂರಿನ ಕೆ.ಎಸ್.ಆರ್.ಪಿ ಮೌಂಟೆಡ್ ಪೊಲೀಸ್, ಶೈಲೇಂದ್ರ ಮತ್ತು ತಂಡದವರಿಂದ ಟೆಂಟ್ ಪೆಗ್ಗಿಂಗ್, ಬೆಂಗಳೂರಿನ ಆಂತರಿಕ ಭದ್ರತಾ ವಿಭಾಗದ ಭಯೋತ್ಪಾದನಾ ನಿಗ್ರಹ ತಂಡದಿಂದ ಬಸ್ ಮೇಲೆ ಭಯೋತ್ಪಾದಕರ ದಾಳಿಯಾದಾಗ ಕಾರ್ಯಾಚರಣೆ ನಡೆಸುವ ಅಣುಕು ಪ್ರದರ್ಶನವಿರಲಿದೆ.
ಸಾಂಸ್ಕೃತಿಕ ಕಾರ್ಯಕ್ರಮಗಳ ನಂತರ ರಾಜ್ಯಪಾಲರಿಂದ ವಿಜೇತರಿಗೆ ಬಹುಮಾನ ವಿತರಣೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ನಗರ ಪೊಲೀಸ್ ಆಯುಕ್ತರಾದ ದಯಾನಂದ್ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ, ಕಾರ್ಯಕ್ರಮದ ಅಂಗವಾಗಿ 8 ಮಂದಿ ಡಿಸಿಪಿ, 17 ಮಂದಿ ಎಸಿಪಿ, 44 ಮಂದಿ ಪಿಐ, 114 ಮಂದಿ ಪಿಎಸ್ಐ, 58 ಮಂದಿ ಎಎಸ್ಐ, 80 ಮಂದಿ ಸಿಬ್ಬಂದಿ, 30 ಜನ ಕ್ಯಾಮೆರಾ ಸಿಬ್ಬಂದಿ ಸೇರಿದಂತೆ ಒಟ್ಟು 1051 ಜನ ಅಧಿಕಾರಿಗಳು ಭದ್ರತೆಗೆ ಇರಲಿದ್ದಾರೆ. ಬಂದೋಬಸ್ತ್ಗೆ 10 ಕೆಎಸ್ಆರ್ಪಿ ತುಕಡಿ, 2 ಅಗ್ನಿಶಾಮಕ ವಾಹನ, ಕ್ಷಿಪ್ರ ಕಾರ್ಯಾಚರಣೆ ತಂಡ ಇರುತ್ತದೆ. ಮೈದಾನದ ಸುತ್ತ 103 ಸಿಸಿಟಿವಿ ಕ್ಯಾಮರಾ ಅಳವಡಿಸಲಾಗಿದೆ ಎಂದರು.
ಕಲರ್ ಕೋಡ್ಗಳ ಮೂಲಕ ಪಾಸ್ ವಿತರಿಸಿ ಪ್ರವೇಶಕ್ಕೆ ಅವಕಾಶ ನೀಡಲಾಗುತ್ತದೆ. ಕಾರ್ಯಕ್ರಮಕ್ಕೆ ಆಗಮಿಸುವವರಿಗೆ ಪಿಂಕ್ ಬಣ್ಣದ ಪಾಸ್ ನೀಡಲಾಗುತ್ತದೆ. ವಿಐಪಿ ಪಾಸ್ ಗೇಟ್-2ರ ಮೂಲಕ ಪ್ರವೇಶಿಸಬಹುದಾಗಿದೆ. ಮುಖ್ಯ ಅತಿಥಿಗಳು, ಗಣ್ಯರು ಗೇಟ್-3 ಮೂಲಕ ಪ್ರವೇಶಿಸಬಹುದು. ಗೇಟ್-4ರಲ್ಲಿ ಬಿಳಿ ಪಾಸ್ ನೀಡಲಾಗುತ್ತದೆ, ಇಲ್ಲಿ ಮಾಧ್ಯಮದವರಿಗೆ ಪ್ರವೇಶಕ್ಕೆ ಅವಕಾಶ ನೀಡಲಾಗಿದೆ.
ವಾಹನ ಸಂಚಾರ ನಿರ್ಬಂಧ :
ಜ.26ರಂದು ಬೆಳಗ್ಗೆ 8.30 ರಿಂದ 10.30ರವರೆಗೆ ಕಬ್ಬನ್ ರಸ್ತೆ, ಕಾಮರಾಜ ರಸ್ತೆ, ಬಿಆರ್ವಿ ರಸ್ತೆಯಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿದೆ. ಪರ್ಯಾಯ ರಸ್ತೆಗಳಲ್ಲಿ ಸಂಚರಿಸಲು ನಗರ ಸಂಚಾರ ಪೊಲೀಸರ ಸೂಚನೆ ನೀಡಿದ್ದಾರೆ.
ವಾಹನ ನಿಲುಗಡೆಗೆ ನಿಷೇಧ :
ಸೆಂಟ್ರಲ್ ಸ್ಟ್ರೀಟ್, ಅನಿಲ್ ಕುಂಬ್ಳೆ ವೃತ್ತ, ಶಿವಾಜಿನಗರ ಬಸ್ ನಿಲ್ದಾಣ, ಕಬ್ಬನ್ ರಸ್ತೆ, ಸಿಟಿಒ ವೃತ್ತದಿಂದ ಕೆ.ಆರ್.ರಸ್ತೆ, ಕಬ್ಬನ್ ಜಂಕ್ಷನ್ವರೆಗೆ, ಎಂ.ಜಿ.ರಸ್ತೆ, ಅನಿಲ್ ಕುಂಬ್ಳೆ ವೃತ್ತದಿಂದ ಕ್ವೀನ್ಸ್ ವೃತ್ತದವರೆಗೆ ವಾಹನ ನಿಲುಗಡೆ ನಿಷೇಧಿಸಲಾಗಿದೆ.
ಈ ವೇಳೆ ಸಂಚಾರ ಪೊಲೀಸ್ ವಿಭಾಗದ ಜಂಟಿ ಆಯುಕ್ತರಾದ ಅನುಚೇತ್, ವಲಯ ಆಯುಕ್ತರಾದ ಸ್ನೇಹಲ್ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.