ದೊಡ್ಡಬಳ್ಳಾಪುರ (ಘಾಟಿ) 13 www.bengaluruwire.com : ಉಪಮುಖ್ಯ ಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಕುಟುಂಬ ಸಮೇತರಾಗಿ ಇಂದು ದೊಡ್ಡಬಳ್ಳಾಪುರ ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯ ದೇವಸ್ಥಾನ (Sri Kshetra Ghati Subramanya Temple)ಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ನಾಡಿನ ಒಳಿತಿಗಾಗಿ ಪ್ರಾರ್ಥನೆ ಸಲ್ಲಿಸಿದರು.
ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್.ಮುನಿಯಪ್ಪ (K H Muniyappa) ಅವರು ಜೊತೆಗೆ ಸಾಥ್ ನೀಡಿದರು.

ಬಳಿಕ ಮಾತನಾಡಿದ ಉಪಮುಖ್ಯಮಂತ್ರಿ ಘಾಟಿ ಸುಬ್ರಹ್ಮಣ್ಯ ಕ್ಷೇತ್ರ ಬಹಳಷ್ಟು ಇತಿಹಾಸ ಪ್ರಸಿದ್ಧಿ ಪಡೆದಿದೆ. ಸಾಕಷ್ಟು ಭಕ್ತರು ಇಲ್ಲಿಗೆ ಪ್ರತಿ ದಿನ ಆಗಮಿಸುತ್ತಾರೆ. ಈಗಾಗಲೇ ಮಾನ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಹಾಗೂ ಮುಜರಾಯಿ ಇಲಾಖೆ ಸಚಿವರಾದ ರಾಮಲಿಂಗಾರೆಡ್ಡಿ ಅವರು ಘಾಟಿ ಕ್ಷೇತ್ರ ಅಭಿವೃದ್ಧಿಗೆ ಹಲವು ಯೋಜನೆಗಳನ್ನು ರೂಪಿಸಿದ್ದಾರೆ. ಸರ್ಕಾರದಿಂದ ಎಲ್ಲಾ ರೀತಿಯ ಸಹಕಾರ ನೀಡಿ ಘಾಟಿಯನ್ನು ಪ್ರಸಿದ್ಧ ಯಾತ್ರಾ ಕ್ಷೇತ್ರವನ್ನಾಗಿ ಅಭಿವೃದ್ಧಿ ಮಾಡಲಾಗುವುದು ಎಂದರು.
ಈ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ಶಾಸಕರಾದ ಧೀರಜ್ ಮುನಿರಾಜು, ಮಾಜಿ ಶಾಸಕರಾದ ವೆಂಕಟರಮಣಯ್ಯ, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಜಿಲ್ಲಾ ಅಧ್ಯಕ್ಷ ರಾಜಣ್ಣ, ಉಪವಿಭಾಗಾಧಿಕಾರಿ ದುರ್ಗ ಶ್ರೀ, ತಹಶೀಲ್ದಾರ್ ವಿದ್ಯಾ ವಿಭಾ ರಾಥೋಡ್, ಇಒ ಮುನಿರಾಜು ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು, ಮುಖಂಡರು ಉಪಸ್ಥಿತರಿದ್ದರು.
