ಬೆಂಗಳೂರು ಏ.14 www.bengaluruwire.com : ಇಂದಿನಿಂದ 32 ಜಿಲ್ಲೆಗಳಲ್ಲಿ ಬೆಂಗಳೂರಿನಲ್ಲಿ ಎರಡು ಠಾಣೆ ಸೇರಿದಂತೆ ಒಟ್ಟು 33 ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯ (Directorate of Civil Rights Enforcement – ಡಿಸಿಆರ್ ಇ) ಪೊಲೀಸ್ ಠಾಣೆಗಳು ಕಾರ್ಯಾರಂಭ ಮಾಡಲಿವೆ. ಸಾಂಕೇತಿಕವಾಗಿ ಒಂದು ಕೇಂದ್ರ ಡಿಸಿಆರ್ ಇ ಠಾಣೆಯನ್ನು ಉದ್ಘಾಟಿಸಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಸೋಮವಾರ ಆಯೋಜಿಸಿದ್ದ ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜನ್ಮದಿನೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು. ಇದಕ್ಕೂ ಮುನ್ನ ವಿಧಾನಸೌಧದ ಪೂರ್ವ ಭಾಗದಲ್ಲಿನ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.
ಮೈಸೂರು ವಿಶ್ವವಿದ್ಯಾಲಯದಲ್ಲಿ ಸಂವಿಧಾನ ಪೀಠ ಮತ್ತು ಬೆಂಗಳೂರಿನಲ್ಲೂ ಆಂಧ್ರದ ಮಾದರಿಯನ್ನೂ ಮೀರಿದ ಅಂಬೇಡ್ಕರ್ ಪ್ರತಿಮೆ ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿಗಳು ಇದೇ ವೇಳೆ ಘೋಷಿಸಿದರು.
8300 ಕೋಟಿ ಎಸ್ ಸಿಎಸ್ ಪಿ/ಟಿಎಸ್ ಪಿ (Scheduled Caste Sub Plan- SCSP and Tribal Sub Plan – TSP) ಹಣ ದುರುಪಯೋಗ ಪಡಿಸಿಕೊಂಡಿದ್ದು ಬಿಜೆಪಿ. ಇವರು ನಾಚಿಕೆ ಇಲ್ಲದೆ ನಮ್ಮ ಮೇಲೆ ಆರೋಪ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಅಂಬೇಡ್ಕರ್ ಅವರ ಆಶಯಗಳ ಜಾರಿಗಾಗಿ ನಾವು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು ನಮ್ಮ ಜನರ ಕೊಳ್ಳುವ ಶಕ್ತಿಯನ್ನು ಹೆಚ್ಚಿಸಿದ್ದೇವೆ. ಬಜೆಟ್ ಗಾತ್ರ ಹೆಚ್ಚಾದಂತೆ ಎಸ್ ಸಿಎಸ್ ಪಿ/ಟಿಎಸ್ ಪಿ ಹಣ ಹೆಚ್ಚಾಗಬೇಕು. ಆದರೆ ಬಿಜೆಪಿ ಸರ್ಕಾರ ಕಡಿಮೆ ಮಾಡಿತು. ಆದರೆ ನಾವು ಅಧಿಕಾರಕ್ಕೆ ಬಂದ ಬಳಿಕ ಮತ್ತೆ ಯೋಜನಾ ಗಾತ್ರಕ್ಕೆ ತಕ್ಕಂತೆ ಹೆಚ್ಚಿಸಿದ್ದೀವಿ. ಈ ಬಾರಿ 42,018 ಕೋಟಿ ರೂಪಾಯಿಯನ್ನು ನಾವು ತೆಗೆದಿಟ್ಟಿದ್ದೀವಿ.

ಬಹುತ್ವದ ದೇಶ ನಿರ್ಮಾಣಕ್ಕೆ, ಭ್ರಾತೃತ್ವದ ಸಮಜ ನಿರ್ಮಾಣಕ್ಕೆ ಅಂಬೇಡ್ಕರ್ ಅವರು ಕೊಟ್ಟ ಮಾರ್ಗದಲ್ಲಿ ನಮ್ಮ ಸರ್ಕಾರ ನಡೆಯುತ್ತಿದೆ. ಸರಾಯಿ ಬೇಡ, ಶಾಲೆ ಬೇಕು ಎನ್ನುವುದು ದಲಿತ ಸಂಘರ್ಷ ಸಮಿತಿ ಹೋರಾಟದ ಘೋಷಣೆಯಾಗಿತ್ತು. ನಾನು ಉಪಮುಖ್ಯಮಂತ್ರಿ ಆದ ತಕ್ಷಣ ಊರು ಊರಲ್ಲಿ ವಸತಿ ಶಾಲೆ ಆರಂಭಿಸಿದ್ದೆ. ಮುಂದಿನ ಆರ್ಥಿಕ ವರ್ಷದ ಕೊನೆಯ ವೇಳೆಗೆ ರಾಜ್ಯದ ಎಲ್ಲಾ ಹೋಬಳಿಗಳಲ್ಲೂ ವಸತಿ ಶಾಲೆ ತೆರೆದಿರುತ್ತವೆ ಎಂದರು.