ಬೆಂಗಳೂರು, ಏ.28 www.bengaluruwire.com : ರಾಜ್ಯದಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ಬ್ರಾಹ್ಮಣ ವಿದ್ಯಾರ್ಥಿಯ ಜನಿವಾರ ತೆಗಿಸಿದ ವಿವಾದಿತ ಪ್ರಕರಣದ ಬಳಿಕ ರೈಲ್ವೆ ನೇಮಕಾತಿ ಪರೀಕ್ಷೆಗಳಲ್ಲಿ ಅಭ್ಯರ್ಥಿಗಳು ಜನಿವಾರ, ಮಾಂಗಲ್ಯ ಸೂತ್ರ ತೆಗೆದಿಟ್ಟು ಪರೀಕ್ಷೆ ಬರೆಯಬೇಕೆಂದು ಪರೀಕ್ಷಾ ನಿಯಮದಲ್ಲಿ ಉಲ್ಲೇಖಿಸಿರುವ ಪ್ರಕರಣದ ಬಗ್ಗೆ ಸಾಕಷ್ಟು ದೂರುಗಳು ಬಂದಿದ್ದವು. ಇದರಿಂದ ಕೂಡಲೇ ಎಚ್ಚೆತ್ತುಕೊಂಡ ರೈಲ್ವೆ ಇಲಾಖೆ ಈ ನಿಯಮಗಳಲ್ಲಿ ಸಡಿಲಿಕೆ ಮಾಡಿದೆ.
ಈ ಕುರಿತಂತೆ ಕೇಂದ್ರ ಜಲಶಕ್ತಿ ಮತ್ತು ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ, ‘ಇದೇ ಏ.28, 29 ಮತ್ತು 30ರಂದು ರೈಲ್ವೆ ಇಲಾಖೆಯಲ್ಲಿ ನೇಮಕಾತಿಗಾಗಿ ಪರೀಕ್ಷೆ ನಡೆಯುತ್ತಿದೆ. ಈ ಪರೀಕ್ಷೆ ಬರೆಯುವ ಅಭ್ಯರ್ಥಿಗಳು ಜನಿವಾರ, ಮಾಂಗಲ್ಯ ಸೂತ್ರ ತೆಗೆದಿಟ್ಟು ಪರೀಕ್ಷೆ ಬರೆಯಬೇಕೆಂಬ ವಿಷಯವನ್ನು ಪರೀಕ್ಷಾ ನಿಯಮದಲ್ಲಿ ಉಲ್ಲೇಖಿಸಲಾಗಿದೆಯೆಂಬ ದೂರುಗಳು ನನಗೆ ಬಂದಿತ್ತು. ಈ ಬಗ್ಗೆ, ಸಂಸದರು, ಶಾಸಕರು ಈ ನಿಯಮಗಳನ್ನು ತೆಗೆಯುವಂತೆ ಮನವಿ ಮಾಡಿರುತ್ತಾರೆ. ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಮತ್ತು ವಿವಿಧ ಸಂಘಟನೆಗಳು ಈ ಬಗ್ಗೆ ನನ್ನ ಗಮನವನ್ನು ಸೆಳೆದಿದ್ದರು’.
‘ಈ ವಿಷಯದ ಬಗ್ಗೆ ಇಂದು ನಾನು ನವದೆಹಲಿಯಲ್ಲಿ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರೊಂದಿಗೆ ಮತ್ತು ರೈಲ್ವೆ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿ ಈ ಗೊಂದಲ ನಿವಾರಿಸಲಾಗಿದೆ. ಜನಿವಾರ, ಮಾಂಗಲ್ಯ ಇತ್ಯಾದಿ ಸಂಸ್ಕೃತಿಯನ್ನು ಬಿಂಬಿಸುವ ಯಾವುದೇ ವಸ್ತುವನ್ನು ಧರಿಸಿ ಬಂದಲ್ಲಿ ಅಭ್ಯರ್ಥಿಗಳಿಗೆ ತೊಂದರೆ ನೀಡಬಾರದೆಂದು ಸಂಬಂಧಪಟ್ಟವರಿಗೆ ಸೂಚನೆ ನೀಡಲಾಗಿದೆ’ ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
‘ಇತರ ಎಲ್ಲಾ ಪರೀಕ್ಷಾ ನಿಯಮವನ್ನು ಪಾಲಿಸಿ, ಅಭ್ಯರ್ಥಿಗಳಿಗೆ ಪರೀಕ್ಷೆ ಬರೆಯಲು ಅನುವು ಮಾಡಿಕೊಡಲು ಸೂಚಿಸಲಾಗಿದೆ. ಪರೀಕ್ಷಾ ಅಭ್ಯರ್ಥಿಗಳು ಸಹ ನಿಯಮಾನುಸಾರ ಪರೀಕ್ಷೆ ಬರೆಯುವಂತೆ ಮನವಿ ಮಾಡುತ್ತೇನೆ. ಅಭ್ಯರ್ಥಿಗಳು ಗೊಂದಲಕ್ಕೀಡಾಗಬಾರದೆಂದು’ ಎಂದು ಅವರು ಹೇಳಿದ್ದಾರೆ.

ಏ.29ರಂದು ಮಂಗಳವಾರ ಬೆಳಗ್ಗೆ ಮಂಗಳೂರಿನ ಬೊಂದಲ್ ಬೆಸೆಂಟ್ ವಿದ್ಯಾಕೇಂದ್ರದಲ್ಲಿ ರೈಲ್ವೆ ಇಲಾಖೆಯ ನರ್ಸಿಂಗ್ ಸೂಪರಿಟೆಂಡೆಂಟ್ ಹುದ್ದೆಗೆ ಪರೀಕ್ಷೆ ನಡೆಯುತ್ತಿದ್ದು, ಈ ಪರೀಕ್ಷೆ ಬರೆಯುವ ಅಭ್ಯರ್ಥಿಗಳು ಜನಿವಾರ ಮತ್ತು ಮಾಂಗಲ್ಯ ಸೂತ್ರವನ್ನು ತೆಗೆದಿಟ್ಟು ಪರೀಕ್ಷೆ ಬರೆಯಬೇಕೆಂದು ಪರೀಕ್ಷಾ ನಿಯಮಾವಳಿಗಳಲ್ಲಿ ಉಲ್ಲೇಖಿಸಲಾಗಿದೆ ಎಂದು ತಿಳಿದುಬಂದಿದೆ. ಹೀಗಾಗಿ ಇಂತಹ ನಿಮಯಾವಳಿಗಳು ಹಿಂದೂ ಧರ್ಮಕ್ಕೆ ಮತ್ತು ಬ್ರಾಹ್ಮಣರ ಪದ್ಧತಿಗಳು ಮತ್ತು ನಂಬಿಕೆಗೆ ವಿರುದ್ಧವಾಗಿದೆ ಹಾಗೂ ಸಮಾಜದಲ್ಲಿ ಇಲ್ಲದ ಸಮಸ್ಯೆಯನ್ನು ಹುಟ್ಟುಹಾಕುತ್ತದೆ ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರಿಗೆ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ಎಸ್.ರಘುನಾಥ್ ಪತ್ರ ಬರೆದು ಮನವಿ ಮಾಡಿದ್ದರು.

ಸಿಇಟಿ ಪರೀಕ್ಷೆಯಲ್ಲೂ ಇದೇ ರೀತಿಯ ನಿಯಮಾವಳಿಗಳನ್ನು ಅಳವಡಿಸಿದ್ದರಿಂದ ರಾಜ್ಯಾದ್ಯಂತ ಪ್ರತಿಭಟನೆಗಳು ನಡೆದಿವೆ. ಹೈಕೋರ್ಟ್ ನಲ್ಲಿ ಈ ಸಂಬಂಧ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದು, ಈ ಸಂಬಂಧ ರಾಜ್ಯ ಸರ್ಕಾರಕ್ಕೆ ನ್ಯಾಯಾಲಯ ನೋಟಿಸ್ ನೀಡಿದೆ. ಈ ಹಿನ್ನೆಲೆಯಲ್ಲಿ ರೈಲ್ವೆ ಇಲಾಖೆಯಲ್ಲಿನ ಈ ನಿಯಮಾವಳಿಗಳನ್ನು ಸರಿಪಡಿಸಿ ಜನಿವಾರ ಹಾಗೂ ಮಾಂಗಲ್ಯ ಸೂತ್ರ ಧರಿಸಿ ಪರೀಕ್ಷೆ ಬರೆಯಲು ಅನುವು ಮಾಡಿಕೊಡಬೇಕು. ಇಲ್ಲವಾದಲ್ಲಿ ಇಂತಹ ಧೋರಣೆ ಖಂಡಿಸಿ ನ್ಯಾಯಕ್ಕಾಗಿ ಪ್ರತಿಭಟನೆ ಅನಿವಾರ್ಯವಾಗಿ ಮಾಡಬೇಕಾಗುತ್ತದೆ ಎಂದು ಮಹಾಸಭಾ ಅಧ್ಯಕ್ಷರು ಎಚ್ಚರಿಕೆ ನೀಡಿದ್ದರು.
ಇದಲ್ಲದೆ ವಿವಿಧ ಹಿಂದೂಪರ ಸಂಘಟನೆಗಳು ರೈಲ್ವೆ ಇಲಾಖೆಯ ಈ ಗೊಂದಲಕಾರಿ ನಿಯಮಗಳ ಬಗ್ಗೆ ವಿರೋಧ ವ್ಯಕ್ತಪಡಿಸಿ ಪ್ರತಿಭಟನೆ ನಡೆಸುವುದಾಗಿ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದವು.
“ಬೆಂಗಳೂರು ವೈರ್” ಪ್ರತಿ ಸುದ್ದಿ ನಿತ್ಯ ನಿರಂತರವಾಗಿ, ಉಚಿತವಾಗಿ ನಿಮಗೆ ಲಭ್ಯವಾಗಲಿದೆ. ಇದಕ್ಕಾಗಿ ಇಂದೇ ನಿಮಿಷದೊಳಗಾಗಿ Subscribe ಆಗಿ. ಈ ಡಿಜಿಟಲ್ ವೆಬ್ ನ್ಯೂಸ್ ಪೋರ್ಟೆಲ್ಲಿನ ಸೋಶಿಯಲ್ ಮೀಡಿಯಾ ಪೇಜ್ ಹಾಗೂ Google News ಗಳಿಗೆ ಉಚಿತವಾಗಿ Subscribe ಆಗಲು Facebook, Telegram, Twitter, Youtube, Whatsup Channel ಗೆ ಜಾಯಿನ್ ಆಗಲು ಇವುಗಳ ಲಿಂಕ್ ಮೇಲೆ ಕ್ಲಿಕ್ ಮಾಡಿ.