ಬೆಂಗಳೂರು, ಮೇ.06 www.bengaluruwire.com : ನಗರದಲ್ಲಿ ಟಾಟಾ ಐಪಿಎಲ್ ಟಿ-20 ಕ್ರಿಕೆಟ್ ಪಂದ್ಯಗಳ ಟಿಕೆಟ್‌ಗಳನ್ನು ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಸಿಸಿಬಿ ವಿಶೇಷ ವಿಚಾರಣಾ ದಳದ ಪೊಲೀಸರು ಬಂಧಿಸಿದ್ದಾರೆ.
ಆರ್.ಸಿ.ಬಿ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳ ನಡುವೆ ಮೇ.3 ರಂದು ನಡೆದ ಪಂದ್ಯದ ಟಿಕೆಟ್‌ಗಳನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಈ ಇಬ್ಬರಿಂದ ಒಟ್ಟು 13 ಐಪಿಎಲ್ ಟಿಕೆಟ್ ಗಳನ್ನು ವಶಪಡಿಸಿಕೊಳ್ಳಲಾಗಿದೆ.

ಮೊದಲ ಘಟನೆಯಲ್ಲಿ, ಕಬ್ಬನ್ ಪಾರ್ಕ್ ಪೊಲೀಸ್ ಠಾಣಾ ವ್ಯಾಪ್ತಿಯ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಒಬ್ಬ ವ್ಯಕ್ತಿಯನ್ನು ಬಂಧಿಸಲಾಯಿತು. ಆತನಿಂದ 4 ಐಪಿಎಲ್ ಟಿಕೆಟ್, 1 ಮೊಬೈಲ್ ಫೋನ್ ಮತ್ತು 1,100 ರೂಪಾಯಿ ನಗದನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಯು ಟಿಕೆಟ್‌ಗಳನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡುವ ಉದ್ದೇಶದಿಂದ ಕಾಳಸಂತೆ ಮಾಡುತ್ತಿರುವುದಾಗಿ ಒಪ್ಪಿಕೊಂಡಿದ್ದಾನೆ.
ಎರಡನೇ ಪ್ರಕರಣದಲ್ಲಿ, ವಿಲ್ಸನ್ ಗಾರ್ಡನ್ ಪೊಲೀಸ್ ಠಾಣಾ ವ್ಯಾಪ್ತಿಯ ಎ2ಬಿ ಹೋಟೆಲ್ ಬಳಿ ಇಬ್ಬರು ವ್ಯಕ್ತಿಗಳನ್ನು ಬಂಧಿಸಲಾಗಿದೆ. ಅವರಿಂದ 9 ಐಪಿಎಲ್ ಟಿಕೆಟ್ ಮತ್ತು 2 ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಇಬ್ಬರೂ ಸಹ ಟಿಕೆಟ್‌ಗಳನ್ನು ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿರುವುದಾಗಿ ತಪ್ಪೊಪ್ಪಿಕೊಂಡಿದ್ದಾರೆ.

ಪೊಲೀಸರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.
