ಬೆಂಗಳೂರು, ಮೇ.20 www.bengaluruwire.com : ಅಂಡಮಾನ್ ಮತ್ತು ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಶಕ್ತಿ ಚಂಡಮಾರುತದ ಪರಿಣಾಮ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ತನ್ನ ಆರ್ಭಟವನ್ನು ಮುಂದುವರೆಸಿದೆ.
ಕಳೆದ ರಾತ್ರಿಯಿಂದ ಸುರಿಯುತ್ತಿರುವ ಮಳೆಯಿಂದಾಗಿ ಬೆಂಗಳೂರಿನ ಜನಜೀವನ ಅಸ್ತವ್ಯಸ್ತಗೊಂಡಿದೆ. ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ, ಮುಂದಿನ 4-5 ದಿನಗಳ ಕಾಲ ರಾಜ್ಯದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ಸೋಮವಾರ ಬೆಳಗ್ಗೆಯಷ್ಟೇ ಗೋಡೆ ಕುಸಿದು ಮಹಿಳೆಯೊಬ್ಬರು ಮೃತಪಟ್ಟಿದ್ದರು. ಬಳಿಕ ಬಿಟಿಎಂ ಲೇಔಟ್ ಎರಡನೇ ಹಂತದ ಎನ್.ಎಸ್.ಪಾಳ್ಯದಲ್ಲಿ ಮತ್ತಿಬ್ಬರು ಎಲೆಕ್ಟ್ರಿಕ್ ಶಾಕ್ನಿಂದ ಇಬ್ಬರು ಬಲಿಯಾಗಿದ್ದಾರೆ.
ಮಧುವನ ಅಪಾರ್ಟ್ಮೆಂಟ್ನ ನಿವಾಸಿ 55 ವರ್ಷದ ಮನೋಹರ ಕಾಮತ್ ಮತ್ತು ನೇಪಾಳ ಮೂಲದ 12 ವರ್ಷದ ಬಾಲಕ ದಿನೇಶ್ ಮೃತಪಟ್ಟಿದ್ದಾರೆ. ಮಳೆಯಿಂದ ಮಧುವನ ಅಪಾರ್ಟ್ಮೆಂಟ್ನ ಬೇಸ್ಮೆಂಟ್ ಜಲಾವೃತವಾಗಿತ್ತು. ಮೋಟಾರ್ ಮೂಲಕ ನೀರು ಹೊರಹಾಕಲು ಯತ್ನಿಸುತ್ತಿದ್ದಾಗ ಎಲೆಕ್ಟ್ರಿಕ್ ಶಾಕ್ನಿಂದ ಮನೋಹರ ಕಾಮತ್ ಮತ್ತು ದಿನೇಶ್ ದುರ್ಮರಣ ಹೊಂದಿದ್ದಾರೆ. ಇದರಿಂದ ಸೋಮವಾರ ಒಂದೇ ದಿನ ಮಳೆ ಅನಾಹುತದಿಂದ ನಗರದಲ್ಲಿ ಮೂವರು ಬಲಿಯಾದಂತಾಗಿದೆ.


ರಾಜ್ಯದಾದ್ಯಂತ ಮಳೆ ಮುನ್ಸೂಚನೆ:

ಹವಾಮಾನ ಇಲಾಖೆಯು ನೀಡಿದ ಮಾಹಿತಿಯ ಪ್ರಕಾರ, ಕರಾವಳಿ ಕರ್ನಾಟಕ, ಉತ್ತರ ಒಳನಾಡು, ದಕ್ಷಿಣ ಒಳನಾಡು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೇ 22ರ ವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಇಂದು ಬೆಳಗ್ಗೆಯಿಂದಲೇ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಧಾರವಾಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮುಂದಿನ ಮೂರು ಗಂಟೆಗಳಲ್ಲಿ ಈ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.
ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು, ಬೆಂಗಳೂರಿನಲ್ಲಿ ರಾತ್ರಿಯಿಂದಲೇ ಎಡೆಬಿಡದೆ ಮಳೆ ಸುರಿಯುತ್ತಿದೆ. ಇಂದು ಬೆಳಿಗ್ಗೆ ಕೂಡ ಮಳೆ ಮುಂದುವರೆದಿದ್ದು, ವಾಹನ ಸವಾರರು ಪರದಾಡುವಂತಾಗಿದೆ. ನಗರದ ತಗ್ಗು ಪ್ರದೇಶಗಳಲ್ಲಿ ನೀರು ನಿಂತಿರುವ ಬಗ್ಗೆ ವರದಿಯಾಗಿದೆ.
ಇತರ ಜಿಲ್ಲೆಗಳಿಗೂ ಅಲರ್ಟ್:
ಇಂದು ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು ಮತ್ತು ತುಮಕೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇದರೊಂದಿಗೆ ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿಯೂ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಜಾರಿ ಮಾಡಲಾಗಿದೆ.
ಮೇ 22ರಂದು ವಾಯುಭಾರ ಕುಸಿತದ ಸಾಧ್ಯತೆ:
ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದ್ದು, ಮೇ 22ರಂದು ಕರ್ನಾಟಕದ ಕರಾವಳಿ ತೀರದಲ್ಲಿ ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆ ಇದೆ. ಇದರ ಪರಿಣಾಮವಾಗಿ ಮೇ 23ರವರೆಗೂ ರಾಜ್ಯದ ಹಲವು ಭಾಗಗಳಲ್ಲಿ ಮಳೆಯ ತೀವ್ರತೆ ಹೆಚ್ಚಾಗುವ ಸಾಧ್ಯತೆ ಇದೆ. ಗಾಳಿಯ ವೇಗವು ಗಂಟೆಗೆ 40 ಕಿ.ಮೀ. ವರೆಗೆ ಇರಬಹುದು ಎಂದು ಅಂದಾಜಿಸಲಾಗಿದೆ.
ಸಾರ್ವಜನಿಕರು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಮತ್ತು ಹವಾಮಾನ ಇಲಾಖೆಯ ಸೂಚನೆಗಳನ್ನು ಪಾಲಿಸುವಂತೆ ಕೋರಲಾಗಿದೆ.
“ಬೆಂಗಳೂರು ವೈರ್” ಪ್ರತಿ ಸುದ್ದಿ ನಿತ್ಯ ನಿರಂತರವಾಗಿ, ಉಚಿತವಾಗಿ ನಿಮಗೆ ಲಭ್ಯವಾಗಲಿದೆ. ಇದಕ್ಕಾಗಿ ಇಂದೇ ನಿಮಿಷದೊಳಗಾಗಿ Subscribe ಆಗಿ. ಈ ಡಿಜಿಟಲ್ ವೆಬ್ ನ್ಯೂಸ್ ಪೋರ್ಟೆಲ್ಲಿನ ಸೋಶಿಯಲ್ ಮೀಡಿಯಾ ಪೇಜ್ ಹಾಗೂ Google News ಗಳಿಗೆ ಉಚಿತವಾಗಿ Subscribe ಆಗಲು Facebook, Telegram, Twitter, Youtube, Whatsup Channel ಗೆ ಜಾಯಿನ್ ಆಗಲು ಇವುಗಳ ಲಿಂಕ್ ಮೇಲೆ ಕ್ಲಿಕ್ ಮಾಡಿ.