ಬೆಂಗಳೂರು, ಜು.1 www.bengaluruwire.com : ಬೆಂಗಳೂರು ನಗರ ಜಿಲ್ಲೆಯ ಬೆಂಗಳೂರು ದಕ್ಷಿಣ ಉಪವಿಭಾಗದ ಉಪವಿಭಾಗಾಧಿಕಾರಿ ಅಪೂರ್ವ ಬಿದರಿ ಅವರ ವಿರುದ್ಧ ಶಿಸ್ತು ಕ್ರಮ ಜರುಗಿಸಲು ಸರ್ಕಾರ ಸೂಚನೆ ನೀಡಿದೆ.
ಅರೆ ನ್ಯಾಯಿಕ ಪ್ರಕರಣಗಳ ವಿಲೇವಾರಿಯಲ್ಲಿ ದೋಷಪೂರಿತ ಆದೇಶಗಳನ್ನು ಹೊರಡಿಸಿರುವ ಆರೋಪದ ಮೇಲೆ ಎಫ್‌ಐಆರ್ ದಾಖಲಿಸಲು ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರು, ಬೆಂಗಳೂರು ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ಈ ಬಗ್ಗೆ ಪ್ರಾದೇಶಿಕ ಆಯುಕ್ತರ ಕಚೇರಿಯಿಂದ ಬೆಂಗಳೂರು ನಗರ ಜಿಲ್ಲಾಧಿಕಾರಿಗಳಿಗೆ ಜೂನ್ 30 ರಂದು ಪತ್ರ ಬರೆಯಲಾಗಿದ್ದು, ಎಫ್‌ಐಆರ್ ದಾಖಲಿಸಿ, ಅನುಪಾಲನಾ ವರದಿಯನ್ನು ತುರ್ತಾಗಿ ಸಲ್ಲಿಸುವಂತೆ ಸೂಚಿಸಲಾಗಿದೆ.
ಪರಿಶೀಲನೆಯಲ್ಲಿ ಬಯಲಾದ ಲೋಪಗಳು ಏನೇನು? :

ಉಪವಿಭಾಗಾಧಿಕಾರಿ ಅಪೂರ್ವ ಬಿದರಿ ಅವರು ಅಧಿಕಾರ ವಹಿಸಿಕೊಂಡ ದಿನದಿಂದ ಇಲ್ಲಿಯವರೆಗೆ ಹೊರಡಿಸಿರುವ ಅರೆ ನ್ಯಾಯಿಕ ಪ್ರಕರಣಗಳ ಆದೇಶಗಳನ್ನು ಪರಿಶೀಲಿಸಲು ತಂಡವೊಂದನ್ನು ರಚಿಸಲಾಗಿತ್ತು. ಈ ತಂಡದ ಪರಿಶೀಲನೆಯಲ್ಲಿ 53 ಅರೆ ನ್ಯಾಯಿಕ ಪ್ರಕರಣಗಳನ್ನು ನಿರ್ಧರಿಸುವಲ್ಲಿ ಗಂಭೀರ ನ್ಯೂನತೆಗಳು ಕಂಡುಬಂದಿವೆ ಎಂದು ವರದಿಯಾಗಿದೆ.
ಈ ಹಿನ್ನೆಲೆಯಲ್ಲಿ, ಅಪೂರ್ವ ಬಿದರಿ ವಿರುದ್ಧ ಕರ್ನಾಟಕ ಭೂಕಂದಾಯ ಅಧಿನಿಯಮ, 1964 ರ ಸೆಕ್ಷನ್ 35 ಮತ್ತು ಭಾರತೀಯ ನ್ಯಾಯ ಸಂಹಿತೆ, 2023 ರ ಸೆಕ್ಷನ್ 257 ರ ಅಡಿಯಲ್ಲಿ ಶಿಸ್ತು ಕ್ರಮಕ್ಕೆ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸಲಾಗಿತ್ತು. ಸರ್ಕಾರ ಈ ಪ್ರಸ್ತಾವನೆಯನ್ನು ಪರಿಶೀಲಿಸಿದ್ದು, ಉಲ್ಲೇಖಿತ ಕಾಯಿದೆಗಳಡಿ ಎಫ್‌ಐಆರ್ ದಾಖಲಿಸಲು ನಿರ್ದೇಶನ ನೀಡಿದೆ. ಈ ಬೆಳವಣಿಗೆಯು ರಾಜ್ಯ ಆಡಳಿತ ವಲಯದಲ್ಲಿ ಸಂಚಲನ ಮೂಡಿಸಿದೆ.























