ಮೈಸೂರು, ಜು.5 www.bengaluruwire.com : ರಾಜ್ಯದಲ್ಲಿ ಪ್ರಸ್ತುತ ಯಾವುದೇ ಜಿಲ್ಲೆಯಲ್ಲೂ ರಸಗೊಬ್ಬರದ ಕೊರತೆ ಇಲ್ಲ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಸ್ಪಷ್ಟಪಡಿಸಿದ್ದಾರೆ. ಆದರೆ, ಮುಂದಿನ ದಿನಗಳಲ್ಲಿ ಯೂರಿಯಾ ಪೂರೈಕೆಯಲ್ಲಿ ಶೇ. 50ರಷ್ಟು ಕಡಿತವಾಗಲಿದೆ ಎಂದು ಅವರು ಪ್ರಮುಖ ಮಾಹಿತಿ ನೀಡಿದರು.
ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಭೂಮಿಯ ಫಲವತ್ತತೆ ಕಾಪಾಡುವ ಆಶಯದಂತೆ ಯೂರಿಯಾ ಬಳಕೆ ಕಡಿಮೆ ಮಾಡುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಚಿವರು ತಿಳಿಸಿದರು.
ಮೈಸೂರಿನ ನಾಗನಹಳ್ಳಿ ಕೃಷಿ ತರಬೇತಿ ಕೇಂದ್ರದಲ್ಲಿ ಶುಕ್ರವಾರ ವಿಭಾಗ ಮಟ್ಟದ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಕಳೆದ ಎರಡು ವರ್ಷಗಳಿಂದ ರಾಜ್ಯದಲ್ಲಿ ರಾಸಾಯನಿಕಗಳು ಮತ್ತು ಕೀಟನಾಶಕಗಳ ಬಳಕೆಯ ಪರಿಣಾಮಗಳ ಬಗ್ಗೆ ಅರಿವು ಮೂಡಿಸುವ ಜೊತೆಗೆ, ಸಾವಯವ ಕೃಷಿ ಮತ್ತು ಸಮಗ್ರ ಬೇಸಾಯದ ಲಾಭಗಳ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ ಎಂದರು.
ಬಿತ್ತನೆ ಚುರುಕು, ಬೆಳೆ ವಿಮೆ ಕಡ್ಡಾಯ :


ರಾಜ್ಯಾದ್ಯಂತ ಉತ್ತಮ ಮಳೆಯಾಗಿದ್ದು, ಬಿತ್ತನೆ ಕಾರ್ಯ ಚುರುಕುಗೊಂಡಿದೆ. ಪೂರ್ವ ಮುಂಗಾರು ಅಧಿಕವಾಗಿ ಸುರಿದು ಕೆಲವೆಡೆ ಹಾನಿ ಉಂಟುಮಾಡಿದೆ. ರೈತರು ಪ್ರತಿ ವರ್ಷ ಬೆಳೆ ವಿಮೆ ಮಾಡಿಸುವ ಮೂಲಕ ಸಂಭವನೀಯ ನಷ್ಟವನ್ನು ತಗ್ಗಿಸಿಕೊಳ್ಳಬೇಕು ಎಂದು ಕೃಷಿ ಸಚಿವರು ಕರೆ ನೀಡಿದರು.
ಆಹಾರ ಧಾನ್ಯ ಉತ್ಪಾದನೆಯಲ್ಲಿ ಮುನ್ನಡೆ, ಬರ ಪರಿಹಾರ ವಿತರಣೆ :
2023-24ರಲ್ಲಿ ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ಕಾಡಿತ್ತು. ರೈತರ ಸಂಕಷ್ಟಕ್ಕೆ ಸ್ಪಂದಿಸಿ ₹3454 ಕೋಟಿ ಬರ ಪರಿಹಾರವನ್ನು ನೀಡಲಾಗಿತ್ತು. 2024-25ನೇ ಸಾಲಿನಲ್ಲಿ ಗುರಿಗಿಂತ ಹೆಚ್ಚು ಅಂದರೆ 153 ಲಕ್ಷ ಟನ್ ಆಹಾರ ಉತ್ಪಾದನೆಯಾಗಿತ್ತು. ಪ್ರಸ್ತುತ ವರ್ಷ 148.48 ಲಕ್ಷ ಮೆಟ್ರಿಕ್ ಟನ್ ಆಹಾರ ಧಾನ್ಯಗಳು ಮತ್ತು 12.20 ಲಕ್ಷ ಟನ್ ಎಣ್ಣೆಕಾಳು ಉತ್ಪಾದನೆಯ ಗುರಿ ಹೊಂದಲಾಗಿದೆ ಎಂದು ಸಚಿವರು ವಿವರಿಸಿದರು.
ಕೃಷಿ ಯಾಂತ್ರೀಕರಣ ಮತ್ತು ಮೌಲ್ಯವರ್ಧನೆಗೆ ಆದ್ಯತೆ :
ರಾಜ್ಯದಲ್ಲಿ ಕೃಷಿ ಯಾಂತ್ರೀಕರಣ ಮತ್ತು ಕೃಷಿ ಉತ್ಪನ್ನಗಳ ಮೌಲ್ಯವರ್ಧನೆಗೆ ಆದ್ಯತೆ ನೀಡಲಾಗಿದೆ. ಹಿಂದೆಂದೂ ಕಂಡಿರದ ಪ್ರಮಾಣದಲ್ಲಿ ಯಂತ್ರೋಪಕರಣಗಳು ಮತ್ತು ಸೂಕ್ಷ್ಮ ನೀರಾವರಿ ಸಲಕರಣೆಗಳನ್ನು ಸಹಾಯಧನದಲ್ಲಿ ವಿತರಿಸಲಾಗುತ್ತಿದೆ ಎಂದು ಚಲುವರಾಯಸ್ವಾಮಿ ತಿಳಿಸಿದರು.
ಕೃಷಿ ಭಾಗ್ಯ ಯೋಜನೆಯನ್ನು ಎಲ್ಲಾ ಕ್ಷೇತ್ರಗಳಿಗೂ ವಿಸ್ತರಿಸಲಾಗಿದ್ದು, 24000 ಕೃಷಿ ಹೊಂಡಗಳ ನಿರ್ಮಾಣದ ಗುರಿಯನ್ನು ಪೂರೈಸಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದರು. ತಾವು ರಾಜ್ಯಾದ್ಯಂತ ಪ್ರವಾಸ ಮಾಡಿ ಕೃಷಿ ಯೋಜನೆಗಳ ಅನುಷ್ಠಾನ ಮತ್ತು ಕೃಷಿ ಪರಿಸ್ಥಿತಿಗಳ ಬಗ್ಗೆ ಪರಿಶೀಲನೆ ನಡೆಸುತ್ತಿದ್ದು, ಎಲ್ಲಾ ವಿಭಾಗಗಳಲ್ಲೂ ಅಧಿಕಾರಿಗಳ ಸಭೆ ನಡೆಸಿ ಸಲಹೆ-ಸೂಚನೆಗಳನ್ನು ನೀಡಲಾಗುತ್ತಿದೆ ಎಂದು ಸಚಿವರು ನುಡಿದರು.
ಈ ಸಂದರ್ಭದಲ್ಲಿ ಕೃಷಿ ಆಯುಕ್ತ ವೈ.ಎಸ್. ಪಾಟೀಲ್, ನಿರ್ದೇಶಕ ಡಾ. ಜಿ.ಟಿ. ಪುತ್ರ, ಜಲಾನಯನ ಅಭಿವೃದ್ಧಿ ಇಲಾಖೆ ನಿರ್ದೇಶಕ ಮಹಮದ್ ಪರ್ವೇಜ್ ಬಂಥನಾಳ, ರಾಜ್ಯ ಬೀಜ ನಿಗಮದ ವ್ಯವಸ್ಥಾಪಕ ನಿರ್ದೇಶಕ ಅನುಪ್, ಬೀಜ ಪ್ರಮಾಣೀಕರಣ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕ ಡಾ. ಸದಾಶಿವ ಮತ್ತು ಇತರ ಅಧಿಕಾರಿಗಳು ಉಪಸ್ಥಿತರಿದ್ದರು.





















