ಮೈಸೂರು/ಬೆಂಗಳೂರು, ಜು.20 www.bengaluruwire.com : ಸರ್ಕಾರದ ಕಾರ್ಯವೈಖರಿ ಮತ್ತು ಇತ್ತೀಚಿನ ರಾಜಕೀಯ ಬೆಳವಣಿಗೆಗಳ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇಂದು ಮಾಧ್ಯಮಗಳೊಂದಿಗೆ ಮಾತನಾಡಿದರು.
ಬಿಜೆಪಿಯ ಟೀಕೆಗಳಿಗೆ ತಿರುಗೇಟು ನೀಡಿದ ಸಿಎಂ, ಬಿಜೆಪಿ ಮೊಸರಿನಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದೆ ಎಂದು ಹೇಳಿದರು. ಡಿಸಿಎಂ ತಮ್ಮ ದೆಹಲಿ ಭೇಟಿ ಹಾಗೂ ರಾಜ್ಯದ ಅಣೆಕಟ್ಟುಗಳ ಸುರಕ್ಷತೆಯ ಕುರಿತು ಮಾಹಿತಿ ನೀಡಿದರು.
ಡಿ.ಕೆ.ಶಿವಕುಮಾರ್ ಅವರನ್ನು ಮುಗಿಸಲು ಗುದ್ದಲಿ ಪೂಜೆ :
ಇನ್ನೊಂದೆಡೆ ಪ್ರತಿಪಕ್ಷ ನಾಯಕ ಆರ್.ಅಶೋಕ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಕಾಂಗ್ರೆಸ್ ಪಕ್ಷದ ನಾಯಕರು ಬೀದಿಯಲ್ಲಿ ಬಡಿದಾಡಿಕೊಳ್ಳುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ಶನಿವಾರ ನಡೆಸಿದ ಸಮಾವೇಶ ಸರ್ಕಾರಿ ಕಾರ್ಯಕ್ರಮ ಅಲ್ಲ, ಅದು ಡಿ.ಕೆ.ಶಿವಕುಮಾರ್ ಅವರನ್ನು ಮುಗಿಸಲು ಮಾಡಿದ ಕಾರ್ಯಕ್ರಮ. ಡಿ.ಕೆ.ಶಿವಕುಮಾರ್ ಅವರನ್ನು ಮುಗಿಸಲು ಗುದ್ದಲಿ ಪೂಜೆ ಮಾಡಲಾಗಿದೆ ಎಂದು ವಿಶ್ಲೇಷಿಸಿದ್ದಾರೆ.

ಬಿಜೆಪಿಯ ಸುಳ್ಳು ಆರೋಪಗಳು ಮತ್ತು ಸರ್ಕಾರದ ಸ್ಪಷ್ಟನೆ :
ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಿಸಿದ ನಂತರ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಸರ್ಕಾರದ ಸಾಧನೆಗಳ ಬಗ್ಗೆ ಸುಳ್ಳು ಹೇಳುವ ಬಿಜೆಪಿಯವರು ಬಹಿರಂಗ ಚರ್ಚೆಗೆ ಎಂದಿಗೂ ಬರುವುದಿಲ್ಲ, ಆದರೆ ತಾವು ಚರ್ಚೆಗೆ ಸದಾ ಸಿದ್ಧ ಎಂದು ಸವಾಲು ಹಾಕಿದರು. ನಿನ್ನೆ ನಡೆದ ಮೈಸೂರು ಸಮಾವೇಶದಲ್ಲಿ ಡಿಸಿಎಂಗೆ ಅವಮಾನ ಮಾಡಲಾಗಿದೆ ಎಂಬ ಬಿಜೆಪಿಯ ಆರೋಪವನ್ನು ತಳ್ಳಿಹಾಕಿದ ಸಿಎಂ, ಡಿ.ಕೆ. ಶಿವಕುಮಾರ್ ಕಾರ್ಯಕ್ರಮದಲ್ಲಿ ಇರದಿದ್ದ ಕಾರಣ ಅವರ ಹೆಸರನ್ನು ಪ್ರಸ್ತಾಪಿಸಲಾಗಿಲ್ಲ. ಇದರಲ್ಲಿ ಅವಮಾನ ಮಾಡುವ ಪ್ರಶ್ನೆಯೇ ಇಲ್ಲ ಎಂದರು.
ಬಿಜೆಪಿ ತನ್ನ ಮತ್ತು ಡಿಸಿಎಂ ನಡುವೆ ಒಡಕುಂಟು ಮಾಡಿ ರಾಜಕೀಯ ಲಾಭ ಪಡೆಯುವ ಭ್ರಮೆಯಲ್ಲಿದೆ, ಆದರೆ ಅದು ಕೇವಲ ಭ್ರಮೆಯಾಗಿಯೇ ಉಳಿಯಲಿದೆ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.
ಡಿಜಿಟಲ್ ಪೇಮೆಂಟ್‌ನಿಂದ ಸಣ್ಣ ವ್ಯಾಪಾರಿಗಳಿಗೆ ತೆರಿಗೆ ನೋಟಿಸ್ ನೀಡುತ್ತಿರುವ ಕುರಿತು ಪ್ರತಿಕ್ರಿಯಿಸಿದ ಸಿಎಂ, ಜಿಎಸ್‌ಟಿ ಕೇಂದ್ರ ಸರ್ಕಾರದ ಅಧೀನದಲ್ಲಿರುವುದರಿಂದ ರಾಜ್ಯ ಸರ್ಕಾರವು ಇದಕ್ಕೆ ಜವಾಬ್ದಾರಿಯಲ್ಲ. ಆದಾಗ್ಯೂ, ಈ ಬಗ್ಗೆ ಕೇಂದ್ರ ಸರ್ಕಾರದೊಂದಿಗೆ ಸಮಾಲೋಚಿಸಿ, ರಾಜ್ಯ ವಾಣಿಜ್ಯ ತೆರಿಗೆ ಇಲಾಖೆಯೊಂದಿಗೆ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಸರ್ಕಾರಕ್ಕೆ ಎರಡು ವರ್ಷ ತುಂಬಿದ ಸಂದರ್ಭದಲ್ಲಿ ವಿಜಯನಗರದಲ್ಲಿ ನಡೆದ ಸಮಾವೇಶದಲ್ಲಿ ಸುಮಾರು 2 ಲಕ್ಷ ಜನ ಭಾಗವಹಿಸಿದ್ದು, ಇದು ಜನಬೆಂಬಲವನ್ನು ಸೂಚಿಸುತ್ತದೆ. ನಮ್ಮ ಗ್ಯಾರಂಟಿ ಯೋಜನೆಗಳನ್ನು ಬಿಜೆಪಿ ಅನುಕರಿಸುತ್ತಿದೆ ಎಂದು ಸಿದ್ದರಾಮಯ್ಯ ಹೇಳಿದರು.
ಅಣೆಕಟ್ಟುಗಳ ಸುರಕ್ಷತೆ ಮತ್ತು ಖಾಸಗಿ ಭೇಟಿ: ಡಿ.ಕೆ. ಶಿವಕುಮಾರ್ :
ಕಬಿನಿ ಅಣೆಕಟ್ಟಿನ ಬಳಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಜಲಸಂಪನ್ಮೂಲ ಸಚಿವರೂ ಆಗಿರುವ ಡಿ.ಕೆ. ಶಿವಕುಮಾರ್, ರಾಜ್ಯದ ಅಣೆಕಟ್ಟುಗಳ ಸುರಕ್ಷತೆ ಕುರಿತು ತಾಂತ್ರಿಕ ಸಮಿತಿ ರಚಿಸಲಾಗಿದ್ದು, ವರದಿ ಬಂದ ನಂತರ ಅಗತ್ಯ ಕಾಮಗಾರಿಗಳನ್ನು ಆದ್ಯತೆ ಮೇರೆಗೆ ಕೈಗೆತ್ತಿಕೊಳ್ಳಲಾಗುವುದು ಎಂದು ತಿಳಿಸಿದರು.
ಕಬಿನಿ ಅಣೆಕಟ್ಟು ಈ ವರ್ಷ ಭರ್ತಿಯಾಗಿದ್ದು, ಈ ಪ್ರದೇಶದ ವಿಸ್ತರಣೆಗೆ ಶಾಸಕರು ಪ್ರಸ್ತಾವನೆ ನೀಡಿದ್ದಾರೆ. ಮಹದೇಶ್ವರ ಬೆಟ್ಟದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ 35 ಕೋಟಿ ರೂ. ಮೊತ್ತದ ಅಭಿವೃದ್ಧಿ ಕಾಮಗಾರಿಗಳಿಗೆ ಅನುಮೋದನೆ ನೀಡಲಾಗಿದ್ದು, 88 ಕೋಟಿ ರೂ. ಮೊತ್ತದ ಹನಿ ನೀರಾವರಿ ಯೋಜನೆಗೆ ಡಿಪಿಆರ್ ಸಿದ್ಧಗೊಳಿಸಲಾಗಿದೆ ಎಂದು ಮಾಹಿತಿ ನೀಡಿದರು.
ಕಬಿನಿ ಉತ್ಸವ ಮತ್ತು ಕಾವೇರಿ ಆರತಿ ಮಾಡುವ ಬಗ್ಗೆ ಪ್ರಸ್ತಾವನೆಗಳಿದ್ದು, ಜಿಲ್ಲಾ ಸಚಿವರು ಹಾಗೂ ಇತರರೊಂದಿಗೆ ಚರ್ಚೆ ನಡೆಸಿ ಪ್ರವಾಸೋದ್ಯಮ ಆಕರ್ಷಣೆ ಮತ್ತು ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡಲಾಗುವುದು. ಬಟಾನಿಕಲ್ ಗಾರ್ಡನ್ ಯೋಜನೆಗೆ ಬಂಡವಾಳ ಹೂಡಿಕೆ ಮಾಡುವವರು ಮುಂದೆ ಬರಬೇಕು. ತಮ್ಮ ಆದ್ಯತೆ ನೀರಿನ ಸಮರ್ಪಕ ಬಳಕೆ ಮತ್ತು ಅಣೆಕಟ್ಟು ಸುರಕ್ಷತೆ ಬಗ್ಗೆ ಇದೆ ಎಂದು ಹೇಳಿದರು.
ದಿಢೀರ್ ದೆಹಲಿ ಪ್ರವಾಸದ ಬಗ್ಗೆ ಸ್ಪಷ್ಟನೆ ನೀಡಿದ ಡಿ.ಕೆ. ಶಿವಕುಮಾರ್, ಸಿಎಂಗೆ ಮಾಹಿತಿ ನೀಡಿ ಖಾಸಗಿ ಕೆಲಸದ ನಿಮಿತ್ತ ದೆಹಲಿಗೆ ತೆರಳಿದ್ದೆ. ಮಾರ್ಗ ಮಧ್ಯದಲ್ಲಿ ನನ್ನ ಬೆಂಗಾವಲು ವಾಹನ ಅಪಘಾತಕ್ಕೀಡಾಗಿದ್ದು, ತಾಯಿ ಚಾಮುಂಡೇಶ್ವರಿ ಕೃಪೆಯಿಂದ ಯಾರಿಗೂ ಅಪಾಯವಾಗಿಲ್ಲ. ವಕೀಲರ ಜೊತೆ ಸಭೆ ನಿಗದಿಯಾಗಿದ್ದರಿಂದ ತೆರಳಿ, ಸಭೆ ಮುಗಿಸಿಕೊಂಡು ವಾಪಸ್ ಬಂದಿದ್ದೇನೆ. ಇದರ ಹೊರತಾಗಿ ರಾಜಕಾರಣವಿಲ್ಲ ಎಂದು ಸ್ಪಷ್ಟಪಡಿಸಿದರು.
ತಮಗೆ ಅವಮಾನವಾಗಿದೆ ಎಂಬ ಬಿಜೆಪಿ ನಾಯಕರ ಹೇಳಿಕೆ ಕುರಿತು, “ಅವರಿಗೆ ಯಾವಾಗಲೂ ನನ್ನ ಮೇಲೆ ಪ್ರೀತಿ ಜಾಸ್ತಿ. ನಾನು ಹೆಚ್ಚು ಬಲಿಷ್ಠವಾಗಿರುವುದಕ್ಕೆ ನನ್ನ ಮೇಲೆ ಪ್ರೀತಿ ಜಾಸ್ತಿ” ಎಂದು ಲೇವಡಿ ಮಾಡಿದರು.






















