ಬೆಂಗಳೂರು, ಆ.19 www.bengaluruwire.com : ಕರ್ನಾಟಕದಲ್ಲಿ ಬಾಲ್ಯ ವಿವಾಹ ಎಂಬ ಸಾಮಾಜಿಕ ಪಿಡುಗನ್ನು ತಡೆಯುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆಯನ್ನಿಟ್ಟಿದೆ. ಇನ್ನು ಮುಂದೆ ಅಪ್ರಾಪ್ತ ವಯಸ್ಸಿನವರಿಗೆ ನಿಶ್ಚಿತಾರ್ಥ ಮಾಡಿದರೂ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ. ಸೋಮವಾರ ವಿಧಾನಸಭೆಯಲ್ಲಿ ಮಂಡನೆಯಾದ ‘ಬಾಲ್ಯ ವಿವಾಹ ನಿಷೇಧ (ತಿದ್ದುಪಡಿ) ವಿಧೇಯಕ’ ಕ್ಕೆ ಸದನ ಅನುಮೋದನೆ ನೀಡಿದೆ.
ಈ ವಿಧೇಯಕದ ಪ್ರಕಾರ, ಬಾಲ್ಯ ವಿವಾಹವನ್ನು ತಡೆಯುವ ನಿಟ್ಟಿನಲ್ಲಿ ಕಠಿಣ ಕ್ರಮಗಳನ್ನು ಜಾರಿಗೊಳಿಸಲಾಗಿದೆ. ಹೊಸ ತಿದ್ದುಪಡಿಯ ನಿಯಮದಂತೆ, ಅಪ್ರಾಪ್ತ ವಯಸ್ಸಿನವರಿಗೆ ನಿಶ್ಚಿತಾರ್ಥ ಮಾಡಿದರೂ ಕಾನೂನು ಕ್ರಮ ಜರುಗಿಸಲಾಗುವುದು. ಒಂದು ವೇಳೆ ಬಾಲ್ಯ ವಿವಾಹ ಪ್ರಕರಣಗಳು ಪತ್ತೆಯಾದರೆ, ಒಂದು ಲಕ್ಷ ರೂಪಾಯಿ ದಂಡ ಹಾಗೂ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗುವುದು ಎಂದು ಸಚಿವೆ ಹೆಬ್ಬಾಳಕರ್ ಹೇಳಿದರು.
2024-25ನೇ ಸಾಲಿನಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಂಕಿಅಂಶಗಳ ಪ್ರಕಾರ, ಒಟ್ಟು 1828 ಬಾಲ್ಯ ವಿವಾಹ ಪ್ರಕರಣಗಳು ಪತ್ತೆಯಾಗಿವೆ. ಇದರಲ್ಲಿ 1260 ಪ್ರಕರಣಗಳನ್ನು ಯಶಸ್ವಿಯಾಗಿ ತಡೆಯಲಾಗಿದೆ. ಆದರೂ, ಕಠಿಣ ಕಾನೂನುಗಳ ನಡುವೆಯೂ 369 ಬಾಲ್ಯ ವಿವಾಹಗಳು ನಡೆದಿವೆ. ಈ ಪ್ರಕರಣಗಳ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಸಚಿವರು ಮಾಹಿತಿ ನೀಡಿದರು.
ಬಾಲ್ಯ ವಿವಾಹವನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡುವುದೇ ತಮ್ಮ ಇಲಾಖೆಯ ಪ್ರಮುಖ ಉದ್ದೇಶವಾಗಿದ್ದು, ಈ ನಿಟ್ಟಿನಲ್ಲಿ ಎಲ್ಲರೂ ಸಹಕರಿಸುವಂತೆ ಅವರು ಮನವಿ ಮಾಡಿದರು. ಈ ಹೊಸ ಕಾನೂನು ಬಾಲ್ಯ ವಿವಾಹವನ್ನು ಮೂಲದಿಂದಲೇ ಕಿತ್ತು ಹಾಕಲು ಸಹಕಾರಿ ಎಂದು ಅವರು ತಿಳಿಸಿದರು.























