ಬೆಂಗಳೂರು, ಸೆ.13 www.bengaluruwire.com : ವಿಶ್ವ ಆತ್ಮಹತ್ಯಾ ನಿವಾರಣಾ ದಿನಾಚರಣೆಯ ಸಂದರ್ಭದಲ್ಲಿ ಯೋಗಕ್ಷೇಮ ಮತ್ತು ಆತ್ಮಹತ್ಯೆ ನಿವಾರಣೆ ಕುರಿತಂತೆ ಸಮೀಕ್ಷೆಯಲ್ಲಿ ಪಾಲ್ಗೊಳ್ಳುವಂತೆ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಕಾರ್ಯಪಡೆಯು ಕರೆ ನೀಡಿದೆ.
ದೇಶಾದ್ಯಂತ ಶೈಕ್ಷಣಿಕ ಸಂಸ್ಥೆಗಳು, ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಆತ್ಮಹತ್ಯಾ ಪ್ರಕರಣಗಳ ಹೆಚ್ಚಳದ ಬಗ್ಗೆ ಸುಪ್ರೀಂ ಕೋರ್ಟ್ ತೀವ್ರ ಕಳವಳ ವ್ಯಕ್ತಪಡಿಸಿತ್ತು. ಈ ಹಿನ್ನೆಲೆಯಲ್ಲಿ ಇತ್ತೀಚೆಗೆ, ವಿದ್ಯಾರ್ಥಿಗಳ ಆತ್ಮಹತ್ಯೆ ನಿವಾರಣೆಗಾಗಿ ರಾಷ್ಟ್ರೀಯ ಕಾರ್ಯಪಡೆಯೊಂದನ್ನು ರಚಿಸುವಂತೆ ಶಿಫಾರಸು ಮಾಡಿತ್ತು. ಈ ಕಾರ್ಯಪಡೆಯ ಅಧ್ಯಕ್ಷರಾಗಿ ನಿವೃತ್ತ ನ್ಯಾಯಮೂರ್ತಿ ಎಸ್. ರವೀಂದ್ರ ಭಟ್ ಅವರನ್ನು ನೇಮಿಸಲಾಗಿದೆ.
ಈ ಕಾರ್ಯಪಡೆಯು ಸಮಗ್ರ ವರದಿಯನ್ನು ಸಿದ್ಧಪಡಿಸುವ ಜವಾಬ್ದಾರಿ ವಹಿಸಿಕೊಂಡಿದ್ದು, ವಿದ್ಯಾರ್ಥಿಗಳು ಎದುರಿಸುತ್ತಿರುವ ರ್ಯಾಗಿಂಗ್, ತಾರತಮ್ಯ ಮತ್ತು ಶೈಕ್ಷಣಿಕ ಒತ್ತಡಗಳಂತಹ ಸಮಸ್ಯೆಗಳನ್ನು ತಡೆಗಟ್ಟಲು ಪರಿಣಾಮಕಾರಿ ಕ್ರಮಗಳನ್ನು ಶಿಫಾರಸು ಮಾಡಲಿದೆ. ಇದು ವಿದ್ಯಾರ್ಥಿಗಳ ಮಾನಸಿಕ ಆರೋಗ್ಯ ಮತ್ತು ಯೋಗಕ್ಷೇಮಕ್ಕೆ ಒತ್ತು ನೀಡುವ ಗುರಿ ಹೊಂದಿದೆ.
ದೆಹಲಿ, ಹರಿಯಾಣ, ಕರ್ನಾಟಕ, ಮತ್ತು ತಮಿಳುನಾಡಿನ 13 ಪ್ರಮುಖ ಶಿಕ್ಷಣ ಸಂಸ್ಥೆಗಳಿಗೆ ಭೇಟಿ ನೀಡಿ, ವಿದ್ಯಾರ್ಥಿಗಳು, ಶಿಕ್ಷಕರು, ಆಡಳಿತ ವರ್ಗ ಮತ್ತು ಕುಂದು-ಕೊರತೆ ಸಮಿತಿಗಳೊಂದಿಗೆ ಸಂವಾದ ನಡೆಸಿದೆ. ಈ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳ ಯೋಗಕ್ಷೇಮಕ್ಕೆ ಪೂರಕವಾದ ಮೂಲಸೌಕರ್ಯ ಮತ್ತು ಸೇವೆಗಳನ್ನು ಒದಗಿಸುವಂತೆ ಕಾರ್ಯಪಡೆಯು ಸಲಹೆ ನೀಡಿದೆ.

ಈ ಸಂವಾದಗಳಲ್ಲದೆ, ವೈದ್ಯಕೀಯ ವಿದ್ಯಾರ್ಥಿಗಳು, ವಿಕಲಚೇತನರು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳೊಂದಿಗೆ ವಿಶೇಷ ಸಮಾಲೋಚನೆ ನಡೆಸಲಾಗಿದೆ. ಇದಲ್ಲದೆ, ಆನ್‌ಲೈನ್ ಸಮೀಕ್ಷೆಯನ್ನೂ ಕೂಡ ನಡೆಸಲಾಗಿದ್ದು, ವಿದ್ಯಾರ್ಥಿಗಳು, ಬೋಧಕರು, ಪೋಷಕರು ಮತ್ತು ಇತರ ಪಾಲುದಾರರು https://ntf.education.gov.in ಜಾಲತಾಣದ ಮೂಲಕ ತಮ್ಮ ಅಭಿಪ್ರಾಯಗಳನ್ನು ದಾಖಲಿಸಿದ್ದಾರೆ ಎಂದು ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.






















