ಮೈಸೂರು, ಸೆ.15 www.bengaluruwire.com : ಐತಿಹಾಸಿಕ ಮೈಸೂರು ದಸರಾ ಉತ್ಸವಕ್ಕೆ ಜಿಲ್ಲಾಡಳಿತದಿಂದ ಅಧಿಕೃತ ಸಿದ್ಧತೆಗಳು ಬಿರುಸಿನಿಂದ ಸಾಗುತ್ತಿವೆ. ಈ ವರ್ಷದ ದಸರಾ ಉತ್ಸವಕ್ಕೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಅವರಿಗೆ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್. ಸಿ. ಮಹದೇವಪ್ಪ ಅವರು ಅರಮನೆ ನಿವಾಸಕ್ಕೆ ಭೇಟಿ ನೀಡಿ, ಸಾಂಪ್ರದಾಯಿಕವಾಗಿ ಫಲ-ತಾಂಬೂಲ ನೀಡಿ ಅಧಿಕೃತ ಆಹ್ವಾನ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಾದ ಜಿ. ಲಕ್ಷ್ಮೀಕಾಂತ ರೆಡ್ಡಿ, ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಸೇರಿದಂತೆ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.
ಮಾವುತರು ಮತ್ತು ಕಾವಾಡಿಗರಿಗೆ ವಿಶೇಷ ಉಪಹಾರ :

ದಸರಾ ಉತ್ಸವದ ಪ್ರಮುಖ ಭಾಗವಾದ ಆನೆಗಳ ಮಾವುತರು ಮತ್ತು ಕಾವಾಡಿಗರಿಗೆ ಜಿಲ್ಲಾಡಳಿತ ವತಿಯಿಂದ ಅರಮನೆ ಆವರಣದಲ್ಲಿ ವಿಶೇಷ ಉಪಹಾರ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಸಚಿವ ಡಾ. ಎಚ್. ಸಿ. ಮಹದೇವಪ್ಪ ಅವರು ಸ್ವತಃ ಮಾವುತರಿಗೆ ಉಪಹಾರ ಬಡಿಸಿ ಗೌರವ ಸಲ್ಲಿಸಿದರು.

ಇದೇ ಸಂದರ್ಭದಲ್ಲಿ ಮಾವುತರು ಹಾಗೂ ಕಾವಾಡಿಗರ ಮಕ್ಕಳಿಗೆ ತಾತ್ಕಾಲಿಕವಾಗಿ ತೆರೆದಿರುವ ಶಾಲೆಯನ್ನೂ ಉದ್ಘಾಟಿಸಿದರು. ಈ ಶಾಲೆಯ ಮಕ್ಕಳು ಪ್ರದರ್ಶಿಸಿದ ಸಾಂಸ್ಕೃತಿಕ ಕಾರ್ಯಕ್ರಮಗಳು ಎಲ್ಲರ ಗಮನ ಸೆಳೆದವು.
ಈ ಕಾರ್ಯಕ್ರಮದಲ್ಲಿ ಎನ್. ಆರ್.ವಿಧಾನಸಭಾ ಕ್ಷೇತ್ರದ ಶಾಸಕರಾದ ತನ್ವೀರ್ ಸೇಠ್, ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಜಿ. ಟಿ. ದೇವೇಗೌಡ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಉಪಾಧ್ಯಕ್ಷರಾದ ಡಾ. ಪುಷ್ಪಾ ಅಮರನಾಥ್, ದಸರಾ ವಸ್ತುಪ್ರದರ್ಶನ ಅಧ್ಯಕ್ಷರಾದ ಆಯೂಬ್ ಖಾನ್, ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತ ರೆಡ್ಡಿ, ಪೊಲೀಸ್ ಆಯುಕ್ತ ಸೀಮಾ ಲಾಟ್ಕರ್, ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್ ಸೇರಿದಂತೆ ಹಲವು ಗಣ್ಯರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.






















