ಬೆಂಗಳೂರು, ಸೆ.16 www.bengaluruwire.com : ರಾಜಧಾನಿಯ ಪ್ರತಿಷ್ಠಿತ ಶಾಲೆಗಳಲ್ಲಿ ಒಂದಾದ ಕುಮಾರ ಪಾರ್ಕ್‌ನಲ್ಲಿರುವ ಸಿಂಧಿ ಪ್ರೌಢಶಾಲೆಯು ಕನ್ನಡದಲ್ಲಿ ಮಾತನಾಡುವ ವಿದ್ಯಾರ್ಥಿಗಳಿಗೆ ದಂಡ ವಿಧಿಸುತ್ತಿರುವ ಆಘಾತಕಾರಿ ಕ್ರಮದ ಕುರಿತು ಸರ್ಕಾರ ಕೂಡಲೇ ಕಠಿಣ ಕ್ರಮಕ್ಕೆ ಮುಂದಾಗಬೇಕೆಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಪುರುಷೋತ್ತಮ ಬಿಳಿಮಲೆ ಆಗ್ರಹಿಸಿದ್ದಾರೆ.
ಈ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಸಚಿವ ಮಧು ಬಂಗಾರಪ್ಪ ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಪತ್ರ ಬರೆದಿರುವ ಡಾ.ಬಿಳಿಮಲೆ, ಈ ವಿಷಯದ ಕುರಿತು ವರದಿ ಸಲ್ಲಿಸಿರುವ ಬೆಂಗಳೂರು ಉತ್ತರ ಜಿಲ್ಲೆಯ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು ನೀಡಿರುವ ದಾಖಲೆಗಳ ಪ್ರಕಾರ, ಸಿಂಧಿ ಪ್ರೌಢಶಾಲೆಯ ಪ್ರಾಂಶುಪಾಲರೇ ಕನ್ನಡದಲ್ಲಿ ಮಾತನಾಡಿದ ವಿದ್ಯಾರ್ಥಿಗಳಿಗೆ ದಂಡ ವಿಧಿಸಿರುವುದನ್ನು ಒಪ್ಪಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.
ಮಕ್ಕಳ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆ :
ಉಪ ನಿರ್ದೇಶಕರ ಭೇಟಿಯ ಸಂದರ್ಭದಲ್ಲಿ ವಿದ್ಯಾರ್ಥಿಗಳೇ ಕನ್ನಡದಲ್ಲಿ ಮಾತನಾಡಿದ ಕಾರಣಕ್ಕೆ ದಂಡ ವಿಧಿಸಲಾಗಿದೆ ಎಂಬುದನ್ನು ಬಹಿರಂಗಪಡಿಸಿದ್ದಾರೆ. ಮಕ್ಕಳ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಕಸಿಯುತ್ತಿರುವ, ಅವರ ಆತ್ಮವಿಶ್ವಾಸವನ್ನು ಕುಗ್ಗಿಸುತ್ತಿರುವ ಹಾಗೂ ಕನ್ನಡದ ಕುರಿತು ಲಘು ಧೋರಣೆ ತಳೆದಿರುವ ಇಂತಹ ಕ್ರಮಗಳು ಕನ್ನಡದ ಹಿತದೃಷ್ಟಿಯಿಂದ ಅತ್ಯಂತ ನಕಾರಾತ್ಮಕ ಬೆಳವಣಿಗೆಯಾಗಿವೆ ಎಂದು ಡಾ. ಬಿಳಿಮಲೆ ತಮ್ಮ ಪತ್ರದಲ್ಲಿ ವಿಷಾದ ವ್ಯಕ್ತಪಡಿಸಿದ್ದಾರೆ.


“ಇಂತಹ ಶಾಲೆಗಳ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳದಿದ್ದರೆ, ಸಮಾಜಕ್ಕೆ ಸರಿಯಾದ ಸಂದೇಶ ಹೋಗುವುದಿಲ್ಲ. ಅಲ್ಲದೆ, ಕನ್ನಡ ತನ್ನ ನೆಲದಲ್ಲಿಯೇ ಪರಕೀಯ ಸ್ಥಾನಕ್ಕೆ ತೃಪ್ತಿಪಡಬೇಕಾದ ಅನಿವಾರ್ಯತೆ ನಿರ್ಮಾಣವಾಗುತ್ತದೆ,” ಎಂದು ಅವರು ಎಚ್ಚರಿಸಿದ್ದಾರೆ.
ಎನ್‌ಒಸಿ ರದ್ದುಪಡಿಸುವಂತೆ ಆಗ್ರಹ :
ಸರ್ಕಾರದ ಕನ್ನಡ ಪರ ನಿಲುವನ್ನು ಸಾಬೀತು ಮಾಡಲು ಶಿಕ್ಷಣ ಸಚಿವರು ಮನಸ್ಸು ಮಾಡಬೇಕಿದೆ ಎಂದಿರುವ ಡಾ. ಬಿಳಿಮಲೆ, ನೆಲದ ಭಾಷೆಯನ್ನು ಉಲ್ಲಂಘಿಸಿರುವ ಸಿಂಧಿ ಪ್ರೌಢಶಾಲೆಯ ಮಾನ್ಯತೆಯನ್ನು ರದ್ದುಪಡಿಸಿ, ಎನ್‌ಒಸಿ (NOC) ಹಿಂಪಡೆಯಬೇಕೆಂದು ಒತ್ತಾಯಿಸಿದ್ದಾರೆ. ಶಿಕ್ಷಣ ಸಚಿವರ ಈ ಕ್ರಮವು ಇಡೀ ರಾಜ್ಯಕ್ಕೆ ತಲುಪಿದಲ್ಲಿ, ಬೇರೆ ಶಿಕ್ಷಣ ಸಂಸ್ಥೆಗಳಿಗೂ ಇದೊಂದು ಪಾಠವಾಗಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಕನ್ನಡದ ಹಿತದೃಷ್ಟಿಯಿಂದ ಈ ಕಠಿಣ ಕ್ರಮ ಅನಿವಾರ್ಯ ಎಂದು ಅವರು ಸ್ಪಷ್ಟಪಡಿಸಿದ್ದಾರೆ.






















