ಬೆಂಗಳೂರು, ಸೆ.17 www.bengaluruwire.com : ಭಾರತೀಯ ವೈದ್ಯಕೀಯ ಆಯೋಗದ ಪರಿವೀಕ್ಷಕರ ತಂಡದಲ್ಲಿದ್ದ ಮೂವರು ವೈದ್ಯರು ಲಂಚ ಸ್ವೀಕರಿಸಿದ ಆರೋಪದ ಹಿನ್ನೆಲೆಯಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆ ಅವರನ್ನು ಅಮಾನತುಗೊಳಿಸಿ ಆದೇಶಿಸಿದೆ.
ವೈದ್ಯಕೀಯ ಸಂಸ್ಥೆಯೊಂದಕ್ಕೆ ಅನುಕೂಲಕರವಾದ ವರದಿ ನೀಡಲು ಲಂಚ ಪಡೆದ ಈ ವೈದ್ಯರ ವಿರುದ್ಧ ಸಿಬಿಐ ಈಗಾಗಲೇ ಎಫ್‌ಐಆರ್ ದಾಖಲಿಸಿ ತನಿಖೆ ನಡೆಸುತ್ತಿದೆ.
ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಾದ ಮೊಹಮ್ಮದ್ ಮೊಸೀನ್ ಅವರು ಈ ಕುರಿತು ಆದೇಶ ಹೊರಡಿಸಿದ್ದಾರೆ.
ಬೆಂಗಳೂರಿನ ಅಟಲ್ ಬಿಹಾರಿ ವಾಜಪೇಯಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಶರೀರ ಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕಿ ಡಾ.ಚೈತ್ರ ಎಂ.ಎಸ್, ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಮೂಳೆ ಚಿಕಿತ್ಸಾ ವಿಭಾಗದ ಪ್ರಾಧ್ಯಾಪಕ ಹಾಗೂ ಮುಖ್ಯಸ್ಥ ಡಾ.ಮಂಜಪ್ಪ ಸಿ.ಎನ್, ಮತ್ತು ಬೀದರ್ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಸಮುದಾಯ ವೈದ್ಯಕೀಯ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಅಶೋಕ್ ಸೆಲ್ಕೆ ಅವರನ್ನು ಅಮಾನತುಗೊಳಿಸಲಾಗಿದೆ.

ಛತ್ತೀಸ್‌ಗಡದ ರವತ್‌ಪುರ ಸರ್ಕಾರ್ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಅಂಡ್ ರಿಸರ್ಚ್ ಸಂಸ್ಥೆಗೆ ಅನುಕೂಲಕರ ವರದಿ ನೀಡಲು ಇವರು ಲಂಚ ಸ್ವೀಕರಿಸಿದ್ದಾರೆ ಎಂದು ವರದಿಯಾಗಿದೆ. ಈ ಆರೋಪದ ಕುರಿತು ಸಿಬಿಐ ತನಿಖೆ ನಡೆಸಿದ್ದು, ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದೆ ಎಂದು ಇಲಾಖೆಗೆ ಇ-ಮೇಲ್ ಮೂಲಕ ಮಾಹಿತಿ ನೀಡಿದೆ.
ಸಿಬಿಐ ತನಿಖೆ ಮತ್ತು ದಾಖಲಿಸಿರುವ ಎಫ್‌ಐಆರ್ ಅನ್ನು ಆಧರಿಸಿ, ಇಲಾಖೆಯ ನಿಯಮಗಳ ಪ್ರಕಾರ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಕೇಂದ್ರ ಸರ್ಕಾರದ ತನಿಖಾ ಸಂಸ್ಥೆ ನೀಡಿರುವ ವರದಿಯನ್ನು ಕೂಲಂಕಶವಾಗಿ ಪರಿಶೀಲಿಸಿದ ಇಲಾಖೆಯ ಮುಖ್ಯ ಕಾರ್ಯದರ್ಶಿಗಳು, ಈ ಮೂವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಈ ಕ್ರಮವು ವೈದ್ಯಕೀಯ ವೃತ್ತಿಯಲ್ಲಿ ಭ್ರಷ್ಟಾಚಾರವನ್ನು ಸಹಿಸುವುದಿಲ್ಲ ಎಂಬ ಸ್ಪಷ್ಟ ಸಂದೇಶವನ್ನು ರವಾನಿಸಿದೆ.






















