ಕಲ್ಬುರ್ಗಿ, ನ.25 www.bengaluruwire.com : ವಿವಾಹ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬಿಳಗಿ ಸೇರಿದಂತೆ ಮೂವರು, ಕಾರು ಅಪಘಾತದಲ್ಲಿ ಅಸುನೀಗಿರುವ ದಾರುಣ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ.
ಕರ್ನಾಟಕ ರಾಜ್ಯ ಖನಿಜ ನಿಗಮದ (KSMCL) ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಐಎಎಸ್ ಅಧಿಕಾರಿ ಮಹಾಂತೇಶ್ ಬಿಳಗಿ ಅವರೊಂದಿಗೆ, ಅವರ ಸೋದರರಾದ ಶಂಕರ ಬೀಳಗಿ ಹಾಗೂ ಈರಣ್ಣ ಶಿರಸಂಗಿ ಅವರು ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಈ ದುರ್ಘಟನೆಯು ವಿಜಯಪುರದಿಂದ ಕಲಬುರಗಿಗೆ ತೆರಳುತ್ತಿದ್ದ ವೇಳೆ, ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಗೌನಳ್ಳಿ ಕ್ರಾಸ್ ಬಳಿ ಸಂಭವಿಸಿದೆ.
ದುರ್ಘಟನೆಯ ವಿವರ:
ವರದಿಯ ಪ್ರಕಾರ, ಮಹಾಂತೇಶ್ ಬಿಳಗಿ ಮತ್ತು ಕುಟುಂಬ ಸದಸ್ಯರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು ವೇಗವಾಗಿ ಬರುತ್ತಿದ್ದಾಗ, ಏಕಾಏಕಿ ರಸ್ತೆಗೆ ಅಡ್ಡ ಬಂದ ಶ್ವಾನವೊಂದಕ್ಕೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಚಾಲಕ ಪ್ರಯತ್ನಿಸಿದ್ದಾರೆ ಎನ್ನಲಾಗಿದೆ. ಈ ಸಂದರ್ಭದಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡ ಕಾರು ಪಲ್ಟಿಯಾಗಿ ಭೀಕರ ಅಪಘಾತಕ್ಕೀಡಾಗಿದೆ. ಸ್ಥಳೀಯರು ಮತ್ತು ಪೊಲೀಸರು ತಕ್ಷಣ ಕಾರ್ಯಪ್ರವೃತ್ತರಾದರಾದರೂ, ಗಂಭೀರವಾಗಿ ಗಾಯಗೊಂಡಿದ್ದ ಮೂವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ. ಈ ಸಂಬಂಧ ಜೇವರ್ಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಧಿಕಾರಿಯ ಹಿನ್ನೆಲೆ:
ಕರ್ನಾಟಕ ಕೇಡರ್‌ನ ಪ್ರತಿಭಾವಂತ ಅಧಿಕಾರಿಯಾಗಿದ್ದ ಮಹಾಂತೇಶ್ ಬಿಳಗಿ ಅವರು, ಪ್ರಸ್ತುತ ಕೆಎಸ್‌ಎಂಸಿಎಲ್‌ನ ವ್ಯವಸ್ಥಾಪಕ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದರು. ಈ ಹಿಂದೆ ದಾವಣಗೆರೆ ಮತ್ತು ಉಡುಪಿ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಯಶಸ್ವಿಯಾಗಿ ಕಾರ್ಯನಿರ್ವಹಿಸಿದ್ದ ಇವರು, ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಯ ವ್ಯವಸ್ಥಾಪಕ ನಿರ್ದೇಶಕರಾಗಿಯೂ ಸೇವೆ ಸಲ್ಲಿಸಿದ್ದರು. ದಕ್ಷ ಮತ್ತು ಪ್ರಾಮಾಣಿಕ ಅಧಿಕಾರಿಯೊಬ್ಬರನ್ನು ಕಳೆದುಕೊಂಡಿರುವುದು ರಾಜ್ಯಕ್ಕೆ ತುಂಬಲಾರದ ನಷ್ಟವಾಗಿದೆ. ಇವರ ನಿಧನಕ್ಕೆ ಮುಖ್ಯಮಂತ್ರಿ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.






















