ಬೆಳಗಾವಿ, ಡಿ.20 www.bengaluruwire.com : ಭೂಮಿಯೇ ಜೀವದ ತೊಟ್ಟಿಲು, ಅಂತಹ ತೊಟ್ಟಿಲನ್ನು ಬಂಜೆ ಮಾಡಬಾರದು. ರೈತರು ರಸಗೊಬ್ಬರಗಳ ಅತಿಯಾದ ಬಳಕೆಯನ್ನು ಕಡಿಮೆ ಮಾಡಿ, ಮಣ್ಣಿನ ಆರೋಗ್ಯ ಕಾಪಾಡುವತ್ತ ಗಮನಹರಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.
ಬೆಳಗಾವಿ ತಾಲೂಕಿನ ಹುದಲಿ ಗ್ರಾಮದಲ್ಲಿ ಜಿಲ್ಲಾಡಳಿತ ಹಾಗೂ ಕೃಷಿ ಇಲಾಖೆ ಸಹಯೋಗದಲ್ಲಿ ಇಂದು ಆಯೋಜಿಸಲಾಗಿದ್ದ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರಗಿ ಮತ್ತು ಮಂಡ್ಯ ಜಿಲ್ಲೆಗಳ ಕಬ್ಬು ಬೆಳೆಯುವ ಪ್ರದೇಶಗಳಲ್ಲಿ ‘ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ ನಿರ್ವಹಣೆ ಯೋಜನೆ’ಗೆ ಅವರು ಚಾಲನೆ ನೀಡಿದರು.

“ಹೆಚ್ಚಿನ ರಸಗೊಬ್ಬರ ಹಾಕಿದರೆ ಹೆಚ್ಚು ಇಳುವರಿ ಬರುತ್ತದೆ ಎಂಬ ತಪ್ಪು ಕಲ್ಪನೆಯಿಂದ ರೈತರು ಹೊರಬರಬೇಕು. ಕೃಷಿ ಪ್ರಧಾನವಾದ ನಮ್ಮ ದೇಶದಲ್ಲಿ ರೈತರು ತಂತ್ರಜ್ಞಾನವನ್ನು ಅಳವಡಿಸಿಕೊಂಡು, ಕಡಿಮೆ ಖರ್ಚಿನಲ್ಲಿ ಅಧಿಕ ಲಾಭ ಗಳಿಸುವಂತಾಗಬೇಕು. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಸಬ್ಸಿಡಿ ಮೂಲಕ ಆಧುನಿಕ ಯಂತ್ರೋಪಕರಣಗಳನ್ನು ವಿತರಿಸುತ್ತಿದೆ,” ಎಂದು ಸಿಎಂ ತಿಳಿಸಿದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ, “ಕಬ್ಬು ಬೆಳೆಗಾರರು ಕಡಿಮೆ ನೀರಿನಲ್ಲಿ ಉತ್ತಮ ಇಳುವರಿ ಪಡೆಯುವಂತಾಗಲು ಈ ಯೋಜನೆ ರೂಪಿಸಲಾಗಿದೆ. ಕಬ್ಬು ಕಟಾವು ಯಂತ್ರಗಳನ್ನು ಸಬ್ಸಿಡಿ ದರದಲ್ಲಿ ನೀಡುವ ಮೂಲಕ ಕೃಷಿ ಕಾರ್ಮಿಕರ ಕೊರತೆ ನೀಗಿಸಲು ಕ್ರಮ ಕೈಗೊಳ್ಳಲಾಗಿದೆ,” ಎಂದರು.

ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಮಾತನಾಡಿ, “ವಿದೇಶಗಳ ಮಾದರಿಯಲ್ಲಿ ನಮ್ಮ ರೈತರೂ ವೈಜ್ಞಾನಿಕ ಕೃಷಿ ಪದ್ಧತಿ ಅಳವಡಿಸಿಕೊಂಡು, ಸೀಮಿತ ಭೂಮಿಯಲ್ಲಿ ದುಪ್ಪಟ್ಟು ಆದಾಯಗಳಿಸಿ ಸ್ವಾವಲಂಬಿಗಳಾಗಬೇಕು,” ಎಂದು ಆಶಯ ವ್ಯಕ್ತಪಡಿಸಿದರು. ಇದೇ ವೇಳೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ ಮತ್ತು ಶಿವಾನಂದ ಪಾಟೀಲ ಅವರು ಮಾತನಾಡಿ, ಸಕ್ಕರೆ ರಫ್ತು ಮತ್ತು ಮೌಲ್ಯವರ್ಧನೆ ಕುರಿತು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ರೈತರಿಗೆ ಮಣ್ಣು ಆರೋಗ್ಯ ಚೀಟಿ, ಕಬ್ಬಿನ ಸಸಿ, ಟ್ರ್ಯಾಷ್ ಕಟರ್ ಮತ್ತು ಕೃಷಿ ಭಾಗ್ಯ ಯೋಜನೆಯಡಿ ಕಾರ್ಯಾದೇಶಗಳನ್ನು ವಿತರಿಸಲಾಯಿತು.























