ಬೆಂಗಳೂರು, ಮಾ.02 www.bengaluruwire.com : ಪಶ್ಚಿಮ ಏಷ್ಯಾದಲ್ಲಿ ಇಸ್ರೇಲ್ ಮತ್ತು ಇರಾನ್ ನಡುವೆ ಹೆಚ್ಚುತ್ತಿರುವ ಯುದ್ಧ ಭೀತಿಯಿಂದಾಗಿ ಅಲ್ಲಿನ ವಿಮಾನ ನಿಲ್ದಾಣಗಳು ಸ್ಥಗಿತಗೊಂಡಿದ್ದು, ಸಾವಿರಾರು ಕನ್ನಡಿಗರು ಸಂಕಷ್ಟಕ್ಕೆ ಸಿಲುಕಿದ್ದಾರೆ.
ಈ ಹಿನ್ನೆಲೆಯಲ್ಲಿ, ಅಲ್ಲಿ ಸಿಲುಕಿರುವವರನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಲು ತಕ್ಷಣವೇ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸೋಮವಾರ (ಮಾ.02) ಸುದೀರ್ಘ ಪತ್ರ ಬರೆದಿದ್ದಾರೆ.
ಪಶ್ಚಿಮ ಏಷ್ಯಾದ ಹಲವು ದೇಶಗಳು ತಮ್ಮ ವೈಮಾನಿಕ ಮಾರ್ಗಗಳನ್ನು (Airspace) ಮುಚ್ಚಿರುವುದರಿಂದ ದುಬೈ ಸೇರಿದಂತೆ ಪ್ರಮುಖ ನಗರಗಳಲ್ಲಿ ಕನ್ನಡಿಗರು ಅತಂತ್ರರಾಗಿದ್ದಾರೆ. ಈ ತುರ್ತು ಪರಿಸ್ಥಿತಿಯನ್ನು ನಿಭಾಯಿಸಲು ಕೇಂದ್ರ ಸರ್ಕಾರವು ಪರಿಣಾಮಕಾರಿ ಕ್ರಮಗಳನ್ನು ಜಾರಿಗೆ ತರಬೇಕು ಎಂದು ಸಿಎಂ ಮನವಿ ಮಾಡಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರ ಪತ್ರದ ಪ್ರಮುಖ ಅಂಶಗಳು:

ಮುಖ್ಯಮಂತ್ರಿಗಳು ತಮ್ಮ ಪತ್ರದಲ್ಲಿ ಐದು ಪ್ರಮುಖ ಬೇಡಿಕೆಗಳನ್ನು ಕೇಂದ್ರ ಸರ್ಕಾರದ ಮುಂದಿಟ್ಟಿದ್ದಾರೆ:
ರಾಯಭಾರ ಕಚೇರಿಗಳ ನೆರವು: ಯುದ್ಧಪೀಡಿತ ಪ್ರದೇಶಗಳಲ್ಲಿರುವ ಭಾರತೀಯರಿಗೆ ರಾಯಭಾರ ಕಚೇರಿಗಳ ಮೂಲಕ ನಿರಂತರ ಮಾರ್ಗದರ್ಶನ ಮತ್ತು ರಕ್ಷಣೆ ಒದಗಿಸಬೇಕು.
ವಿಶೇಷ ವಿಮಾನಗಳ ವ್ಯವಸ್ಥೆ: ವಾಣಿಜ್ಯ ವಿಮಾನಗಳು ರದ್ದಾಗಿರುವ ಕಾರಣ, ಅಗತ್ಯವಿದ್ದಲ್ಲಿ ವಿಶೇಷ ವಿಮಾನಗಳ (Special Evacuation Flights) ಮೂಲಕ ಭಾರತೀಯರನ್ನು ಸ್ಥಳಾಂತರಿಸಲು ಸಿದ್ಧತೆ ಮಾಡಿಕೊಳ್ಳಬೇಕು.
ಸಮನ್ವಯ ತಂಡದ ರಚನೆ: ವಿದೇಶಾಂಗ ಸಚಿವಾಲಯ, ನಾಗರಿಕ ವಿಮಾನಯಾನ ಸಚಿವಾಲಯ ಮತ್ತು ರಾಜ್ಯ ಸರ್ಕಾರಗಳ ನಡುವೆ ಸಮನ್ವಯ ಸಾಧಿಸಲು ವಿಶೇಷ ಕಾರ್ಯಪಡೆ (Task Force) ರಚಿಸಬೇಕು.
ಡಿಜಿಟಲ್ ಪೋರ್ಟಲ್: ಸಂಕಷ್ಟದಲ್ಲಿರುವವರ ಮಾಹಿತಿ ಸಂಗ್ರಹಿಸಲು ಮತ್ತು ಅವರ ಕುಟುಂಬಗಳಿಗೆ ಮಾಹಿತಿ ನೀಡಲು ಕೇಂದ್ರ ಮಟ್ಟದ ಡಿಜಿಟಲ್ ವೇದಿಕೆ ಸಿದ್ಧಪಡಿಸಬೇಕು.
ವಿಮಾನಯಾನ ರಿಯಾಯಿತಿ: ವಿಮಾನ ರದ್ದತಿಯಿಂದಾಗಿ ಪ್ರಯಾಣಿಕರಿಗೆ ಆರ್ಥಿಕ ಹೊರೆಯಾಗದಂತೆ ವಿಮಾನಯಾನ ಸಂಸ್ಥೆಗಳು ಟಿಕೆಟ್ ದಂಡ ವಿಧಿಸದಂತೆ ಸೂಚನೆ ನೀಡಬೇಕು.
ಕೇಂದ್ರದೊಂದಿಗೆ ರಾಜ್ಯದ ಸಮನ್ವಯ:
ಈಗಾಗಲೇ ರಾಜ್ಯ ಸರ್ಕಾರವು ದೆಹಲಿಯ ರೆಸಿಡೆಂಟ್ ಕಮಿಷನರ್ ಅವರೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, 24×7 ಸಹಾಯವಾಣಿ ಕೇಂದ್ರಗಳನ್ನು ತೆರೆದಿದೆ. ಇರಾನ್ ಮತ್ತು ಇತರೆಡೆಗಳಲ್ಲಿ ಸಿಲುಕಿರುವ ಕನ್ನಡಿಗರನ್ನು ಮರಳಿ ಕರೆತರಲು ರಾಜ್ಯ ಸರ್ಕಾರವು ಕೇಂದ್ರಕ್ಕೆ ಎಲ್ಲಾ ರೀತಿಯ ಸಹಕಾರ ನೀಡಲಿದೆ ಎಂದು ಸಿದ್ದರಾಮಯ್ಯ ಅವರು ಭರವಸೆ ನೀಡಿದ್ದಾರೆ.























