ಬೆಂಗಳೂರು, ಮಾ.04 www.bengaluruwire.com : ಅತಿ ವೇಗವಾಗಿ ಬದಲಾಗುತ್ತಿರುವ ಇಂದಿನ ಡಿಜಿಟಲ್ ಯುಗದ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಯಶಸ್ಸು ಸಾಧಿಸಲು ವಿದ್ಯಾರ್ಥಿಗಳು ಕೇವಲ ಪದವಿ ಪಡೆದರೆ ಸಾಲದು, ನಿರಂತರ ಓದು ಮತ್ತು ಆಳವಾದ ಅಧ್ಯಯನ ಪ್ರವೃತ್ತಿಯನ್ನು ಬೆಳೆಸಿಕೊಳ್ಳಬೇಕು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ. ಪ್ರಭಾಕರ್ ಅವರು ಕಿವಿಮಾತು ಹೇಳಿದರು.
ನಗರದ ಡಾ. ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾನಿಲಯದ ಅಕಾಡೆಮಿಕ್ ಬ್ಲಾಕ್‌ನಲ್ಲಿ ಆಯೋಜಿಸಲಾಗಿದ್ದ ಎರಡು ದಿನಗಳ ವಿಶೇಷ ಕಾರ್ಯಾಗಾರ ‘ಮಾಧ್ಯಮ ಹಬ್ಬ-2026’ ಅನ್ನು ಉದ್ಘಾಟಿಸಿ ಅವರು ಮಾತನಾಡಿದರು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಬೆಂಗಳೂರು ನಗರ ವಿಶ್ವವಿದ್ಯಾನಿಲಯ ಹಾಗೂ ಬೆಂಗಳೂರು ವಿಶ್ವವಿದ್ಯಾನಿಲಯಗಳ ಸಹಭಾಗಿತ್ವದಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಕೌಶಲ್ಯ ಮತ್ತು ವ್ಯಕ್ತಿತ್ವ ರೂಪಿಸಿಕೊಳ್ಳಿ:
ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಕೆ.ವಿ. ಪ್ರಭಾಕರ್ ಅವರು, “ಮಾಧ್ಯಮ ಕ್ಷೇತ್ರವು ಇಂದು ಹತ್ತು ಹಲವು ಆಯಾಮಗಳಲ್ಲಿ ವಿಸ್ತರಿಸಿದೆ. ಈ ಸ್ಪರ್ಧಾತ್ಮಕ ಜಗತ್ತಿನಲ್ಲಿ ನೆಲೆ ನಿಲ್ಲಲು ವಿದ್ಯಾರ್ಥಿಗಳು ತಾಂತ್ರಿಕ ಕೌಶಲ್ಯಗಳ ಜೊತೆಗೆ ಸ್ವತಂತ್ರ ವ್ಯಕ್ತಿತ್ವ ಮತ್ತು ಸಂಘಟನಾ ಮನೋಭಾವವನ್ನು ರೂಢಿಸಿಕೊಳ್ಳಬೇಕು. ಕೇವಲ ಮಾಹಿತಿ ನೀಡುವುದು ಪತ್ರಿಕೋದ್ಯಮವಲ್ಲ; ಜನಸಾಮಾನ್ಯರ ನೋವು-ನಲಿವುಗಳಿಗೆ ಸ್ಪಂದಿಸಿ, ನೈಜ ಮತ್ತು ನಿಖರವಾದ ಸುದ್ದಿಗಳನ್ನು ತಲುಪಿಸುವ ಮೂಲಕ ಸಾಮಾಜಿಕ ಜವಾಬ್ದಾರಿಯನ್ನು ಮೆರೆಯಬೇಕು,” ಎಂದು ಸಲಹೆ ನೀಡಿದರು.

ನೈತಿಕತೆ ಪತ್ರಿಕೋದ್ಯಮದ ಅಡಿಪಾಯ:
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಹಿರಿಯ ಪತ್ರಕರ್ತ ದಿನೇಶ್ ಅಮೀನ್ ಮಟ್ಟು ಅವರು ಮಾಧ್ಯಮ ತತ್ವಗಳ ಕುರಿತು ಮಾತನಾಡಿದರು. “ಪತ್ರಿಕೋದ್ಯಮ ವಿದ್ಯಾರ್ಥಿಗಳಲ್ಲಿ ಓದಿನ ಹಸಿವು ಇರಬೇಕು. ಸುದ್ದಿಯನ್ನು ಸೃಷ್ಟಿಸುವ ಅವಸರದಲ್ಲಿ ಸತ್ಯವನ್ನು ಬಲಿ ಕೊಡಬಾರದು. ಪತ್ರಕರ್ತರು ತಮ್ಮ ಬರವಣಿಗೆಯಲ್ಲಿ ವೃತ್ತಿಪರ ನೈತಿಕತೆ ಮತ್ತು ಸಿದ್ಧಾಂತಗಳನ್ನು ಅಳವಡಿಸಿಕೊಳ್ಳಬೇಕು. ಜನರ ನಂಬಿಕೆಗೆ ದ್ರೋಹ ಮಾಡದಂತೆ ನೈಜ ಸುದ್ದಿಯನ್ನು ಸಮಾಜಕ್ಕೆ ತಲುಪಿಸುವುದು ಇಂದಿನ ತುರ್ತು ಅಗತ್ಯವಾಗಿದೆ,” ಎಂದರು.
ಕಾರ್ಯಕ್ರಮದಲ್ಲಿ ಕರ್ನಾಟಕ ಮಾಧ್ಯಮ ಅಕಾಡೆಮಿಯ ಅಧ್ಯಕ್ಷರಾದ ಅಯೇಷಾ ಖಾನಂ, ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಪಲ್ಲವಿ ಜಿ, ಕುಲಪತಿ ಪ್ರೊ. ರಮೇಶ್ ಬಿ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು. ಬೆಂಗಳೂರು ನಗರದ ವಿವಿಧ ಕಾಲೇಜುಗಳ 100ಕ್ಕೂ ಹೆಚ್ಚು ಪತ್ರಿಕೋದ್ಯಮ ವಿದ್ಯಾರ್ಥಿಗಳು ಈ ಕಾರ್ಯಾಗಾರದಲ್ಲಿ ಉತ್ಸಾಹದಿಂದ ಭಾಗವಹಿಸಿದ್ದರು.





















